ಬಂಧನ
(ಸಾಂದರ್ಭಿಕ ಚಿತ್ರ)
ದಾವಣಗೆರೆ: ಕೇಂದ್ರ ಸರ್ಕಾರದ ವಕ್ಫ್ ತಿದ್ದುಪಡಿ ಕಾಯ್ದೆಯ ವಿರುದ್ಧ ಪ್ರಚೋದನಕಾರಿ ವಿಡಿಯೊ ಹರಿಬಿಟ್ಟು ಶಾಂತಿ ಕದಡಲು ಯತ್ನಿಸಿದ ಆರೋಪದ ಮೇರೆಗೆ ಮಹಾನಗರ ಪಾಲಿಕೆಯ ಮಾಜಿ ಸದಸ್ಯ ಅಹಮ್ಮದ್ ಕಬೀರ್ ಖಾನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ವಕ್ಫ್ ತಿದ್ದುಪಡಿ ಕಾಯ್ದಯ ವಿರುದ್ಧ ಪ್ರಚೋದನಾಕಾರಿಯಾಗಿ ಮಾತನಾಡಿದ ವಿಡಿಯೊವೊಂದು ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಇದನ್ನು ಪರಿಶೀಲಿಸಿದ ಆಜಾದ್ ನಗರ ಠಾಣೆಯ ಪೊಲೀಸರು ಕಬೀರ್ ಖಾನ್ ವಿರುದ್ಧ ದೂರು ದಾಖಲಿಸಿಕೊಂಡಿದ್ದರು. ಆರೋಪಿ ಪತ್ತೆಗೆ ಪೊಲೀಸ್ ಇನ್‌ಸ್ಪೆಕ್ಟರ್ ಅಶ್ವಿನ್ ಕುಮಾರ ನೇತೃತ್ವದ ತಂಡ ರಚಿಸಲಾಗಿತ್ತು.
ರಾಜಸ್ಥಾನದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪೊಲೀಸರು ಭಾನುವಾರ ನ್ಯಾಯಾಧೀಶರ ಎದುರು ಹಾಜರುಪಡಿಸಿದ್ದರು. ಆರೋಪಿಯನ್ನು ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
‘ಸಾಮಾಜಿಕ ಜಾಲತಾಣದಲ್ಲಿ ಸಾರ್ವಜನಿಕರು ಪ್ರಚೋದನಕಾರಿ ಹೇಳಿಕೆಯನ್ನು ಹಂಚಿಕೊಳ್ಳುವಂತಿಲ್ಲ. ವ್ಯಕ್ತಿ ನಿಂದನೆ, ಧಾರ್ಮಿಕ ಭಾವನೆಗೆ ಧಕ್ಕೆ ಉಂಟು ಮಾಡುವುದು, ದ್ವೇಷ ಭಾಷಣ, ದೇಶ ವಿರೋಧಿ ಹೇಳಿಕೆ ಹಾಗೂ ಸಂದೇಶವನ್ನು ಹಂಚಿಕೊಳ್ಳುವುದು ಕಾನೂನು ಬಾಹಿರ. ಸಾಮಾಜಿಕ ಜಾಲತಾಣ ಬಳಕೆಯಲ್ಲಿ ಎಚ್ಚರ ವಹಿಸಬೇಕು’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಎಚ್ಚರಿಕೆ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.