ದಾವಣಗೆರೆ: ಜನರು ಉತ್ತಮ ಆರೋಗ್ಯ ಹೊಂದಿದಾಗ ಮಾತ್ರ ಶೋಷಣೆ, ಅನ್ಯಾಯದ ವಿರುದ್ಧ ಹೋರಾಟ ಮಾಡುವ ಶಕ್ತಿ ಬರುತ್ತದೆ. ಆಗ ಸಮಾಜವೂ ಸದೃಢವಾಗುತ್ತದೆ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ರಾಜೇಶ್ವರಿ ಎನ್. ಹೆಗಡೆ ಹೇಳಿದರು.
ಜಿಲ್ಲಾಧಿಕಾರಿ ಕಚೇರಿಯ ತುಂಗಭದ್ರಾ ಸಭಾಂಗಣದಲ್ಲಿ ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಪ್ರಸಕ್ತ ಸಾಲಿನ ‘ಪೋಷಣ್ ಮಾಸಾಚರಣೆ ಮತ್ತು ಮಾತೃವಂದನ ಸಪ್ತಾಹ’ವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ದೇಶದ ಭವಿಷ್ಯ ಆಗಿರುವ ಮಕ್ಕಳು ಆರೋಗ್ಯವಂತರಾಗಿರಬೇಕು. ಗರ್ಭಿಣಿ ತಾಯಿ ಮತ್ತು ಮಗು ಇಬ್ಬರು ಶಕ್ತಿಯುತವಾಗಿರಬೇಕೆಂದರೆ ಪೌಷ್ಟಿಕ ಆಹಾರ ಒದಗಿಸಬೇಕು. ಗರ್ಭಿಣಿಯರಿಗೆ ಯಾವ ರೀತಿಯ ಆಹಾರ ನೀಡಬೇಕು ಎಂಬುದನ್ನು ಆರೋಗ್ಯ ಇಲಾಖೆಯ ತಜ್ಞ ವೈದ್ಯರೊಂದಿಗೆ ಚರ್ಚಿಸಿ ಆಹಾರ ಒದಗಿಸಬೇಕು. ಮೂಢನಂಬಿಕೆಗಳಿಂದ ಹೊರ ಬಂದು ಸರ್ಕಾರ ಜಾರಿ ಮಾಡಿರುವ ಯೋಜನೆಗಳ ಸೌಲಭ್ಯ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.
ಗರ್ಭಿಣಿಯರಿಗೆ ಆಯಾ ಭೌಗೋಳಿಕ ಪ್ರದೇಶಗಳಿಗೆ ತಕ್ಕಂತೆ ಆಹಾರಗಳನ್ನು ಒದಗಿಸಲಾಗುತ್ತದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರವೀಣ್ ನಾಯ್ಕ್ ತಿಳಿಸಿದರು.
ಗರ್ಭಿಣಿಯರು ಮತ್ತು ಅಪೌಷ್ಟಿಕ ಸಮಸ್ಯೆಯಿಂದ ಬಳಲುತ್ತಿರುವವರ ಸಬಲೀಕರಣಕ್ಕಾಗಿ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಈ ಕಾರ್ಯಕ್ರಮಗಳಲ್ಲಿ ಭಾಗಿಯಾಗಿ ಯಶಸ್ವಿಗೊಳಿಸಲು ಪ್ರಯತ್ನಿಸಬೇಕು ಎಂದು ಅಧ್ಯಕ್ಷತೆ ವಹಿಸಿದ್ದ ಹೆಚ್ಚುವರಿ ಜಿಲ್ಲಾಧಿಕಾರಿ ಪಿ.ಎನ್ ಲೋಕೇಶ್ ಹೇಳಿದರು.
ಅಪೌಷ್ಟಿಕ ಸಮಸ್ಯೆಯಿಂದ ಬಳಲುತ್ತಿರುವ ಮಕ್ಕಳನ್ನು ಸದೃಢಗೊಳಿಸುವ ನಿಟ್ಟಿನಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ಪೌಷ್ಟಿಕಾಂಶಗಳನ್ನು ಒಳಗೊಂಡ ಆಹಾರ ಒದಗಿಸಲಾಗುತ್ತಿದೆ. ಜೊತೆಗೆ ಸ್ಥಳೀಯವಾಗಿ ಅಂಗನವಾಡಿ ಕೇಂದ್ರಗಳ ಬಳಿ ಪೌಷ್ಟಿಕ ಆಹಾರ ಒದಗಿಸುವ ಸಸ್ಯಗಳ ಕೈತೋಟ ನಿರ್ಮಿಸುವ ಮೂಲಕ ಪೌಷ್ಟಿಕ ಆಹಾರ ತಯಾರಿಸಿ ಮಕ್ಕಳಿಗೆ ನೀಡಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ವಾಸಂತಿ ಉಪ್ಪಾರ್ ಮಾಹಿತಿ ನೀಡಿದರು.
ಪೋಷಣ್ ಮಾಸಾಚರಣೆ ಮತ್ತು ಮಾತೃವಂದನ ಸಪ್ತಾಹ ಕುರಿತ ಪೋಸ್ಟರ್‌ಗಳನ್ನು ಬಿಡುಗಡೆ ಮಾಡಲಾಯಿತು. ಆರ್‌ಸಿಎಚ್ಒ ಡಾ. ಕೆ.ಎಸ್. ಮೀನಾಕ್ಷಿ ಅವರು ಆರೋಗ್ಯ ನೈರ್ಮಲ್ಯಿಕರಣ ಎಂಬ ವಿಷಯದ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗರಾಜ, ಜಿಲ್ಲಾ ಆಯುಷ್ ಅಧಿಕಾರಿ ಶಂಕರಗೌಡ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ರೇಷ್ಮಾ ಕೌಸರ್, ಜಿಲ್ಲಾ ಅಂಗವಿಲಕರ ಸಬಲೀಕರಣಾಧಿಕಾರಿ ಡಾ.ಕೆ.ಕೆ. ಪ್ರಕಾಶ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಕುಮಾರ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪೂರ್ಣಿಮಾ ಮುಂತಾದವರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.