ಜಗಳೂರು: ತಾಲ್ಲೂಕಿನ ವಿವಿಧ ಸರ್ಕಾರಿ ಕಚೇರಿಗಳನ್ನು ಒಂದೇ ಸೂರಿನಡಿ ತರುವ ನಿಟ್ಟಿನಲ್ಲಿ ಪಟ್ಟಣದಲ್ಲಿ ₹ 10 ಕೋಟಿ ವೆಚ್ಚದಲ್ಲಿ ಹೊಸದೊಂದು ಸಂಕೀರ್ಣ ನಿರ್ಮಿಸಲಾಗುತ್ತಿದೆ.
ಸ್ವಂತ ಕಟ್ಟಡಗಳು ಇಲ್ಲದೇ ಇರುವುದರಿಂದ ಪಟ್ಟಣದಲ್ಲಿನ ಹಲವು ಇಲಾಖೆಗಳ ಕಚೇರಿಗಳು ದಶಕಗಳಿಂದಲೂ ಬಾಡಿಗೆ ಕಟ್ಟಡಗಳಲ್ಲಿ ನಡೆಯುತ್ತಿವೆ. ಇದರಿಂದ ಬಾಡಿಗೆಗೆಂದೇ ಪ್ರತಿ ವರ್ಷ ಲಕ್ಷಾಂತರ ರೂಪಾಯಿ ತೆರಬೇಕಾದ ಸ್ಥಿತಿ ಇದೆ. ಇನ್ನು ಮುಂದೆ ಇದಕ್ಕೆ ಮುಕ್ತಿ ಸಿಗಲಿದೆ.
ಪಟ್ಟಣದ ಹಳೇ ತಾಲ್ಲೂಕು ಕಚೇರಿಯನ್ನು ನೆಲಸಮಗೊಳಿಸಿ ಆ ಜಾಗದಲ್ಲಿ ವಿಶಾಲವಾದ ಸಂಕೀರ್ಣ ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಮುಂತಾದ ಕಚೇರಿಗಳು ಸದ್ಯ ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿವೆ.
ಗ್ರಾಮೀಣ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಲೋಕೋಪಯೋಗಿ ಇಲಾಖೆ ಹಾಗೂ ಸಮಾಜಕಲ್ಯಾಣ ಇಲಾಖೆ ಕಚೇರಿಗಳು ಅತ್ಯಂತ ಕಿರಿದಾದ, ಶಿಥಿಲಗೊಂಡ ಹಳೆಯ ಕಟ್ಟಡಗಳಲ್ಲಿವೆ. ಪಟ್ಟಣದಾದ್ಯಂತ ದಿಕ್ಕಿಗೆ ಒಂದರಂತೆ ಕಚೇರಿಗಳಿದ್ದು, ಕೆಲಸ ಕಾರ್ಯಗಳಿಗೆ ಬರುವ ಜನರು ಅಲೆದಾಡುವ ಸ್ಥಿತಿ ಇದೆ.
ಹಲವು ಸರ್ಕಾರಿ ಇಲಾಖೆಗಳ ಕಚೇರಿಗಳನ್ನು ಒಂದೇ ಸೂರಿನಡಿ ತರುವ ಉದ್ದೇಶದಿಂದ ನಿರ್ಮಾಣ ಮಾಡಲಾಗುತ್ತಿರುವ ಈ ಸಂಕೀರ್ಣದಿಂದ ಜನರಿಗೆ ಅನುಕೂಲವಾಗಲಿದೆ. ಕಚೇರಿಯಿಂದ ಕಚೇರಿಗೆ ಅಲೆಯುವುದು ತಪ್ಪಲಿದೆ.
‘ಶತಮಾನದ ಹಿಂದಿನ ಕಟ್ಟಡ ಶಿಥಿಲಾವಸ್ಥೆ ತಲುಪಿತ್ತು. ಪಾಳು ಬಿದ್ದಿದ್ದ ಕಟ್ಟಡ ಬಿಡಾಡಿ ದನಗಳು ಹಾಗೂ ಹಂದಿಗಳ ಆವಾಸ ಸ್ಥಾನವಾಗಿತ್ತು. ಅನೈತಿಕ ಚಟುವಟಿಕೆಗಳ ತಾಣವೂ ಆಗಿತ್ತು. ಕಚೇರಿಗಳ ಸಂಕೀರ್ಣ ನಿರ್ಮಿಸುವ ಮೂಲಕ ಸರ್ಕಾರಿ ಜಾಗವನ್ನು ಸದ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಜನರು ಕೆಲಸ ಕಾರ್ಯಗಳಿಗಾಗಿ ಒಂದು ಕಚೇರಿಯಿಂದ ಮತ್ತೊಂದು ಕಚೇರಿಗೆ ಅಲೆಯುವುದೂ ತಪ್ಪಲಿದೆ’ ಎಂದು ವಕೀಲರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಮರೇನಹಳ್ಳಿ ಬಸವರಾಜ್, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಎ.ಎಲ್. ತಿಪ್ಪೇಸ್ವಾಮಿ ಹೇಳಿದರು.
‘ಪಟ್ಟಣದ ವಿವಿಧ ಮೂಲೆಗಳಲ್ಲಿರುವ ಸರ್ಕಾರಿ ಕಚೇರಿಗಳಿಗೆ ಜನರು ಅಲೆದಾಡುವುದನ್ನು ತಪ್ಪಿಸುವ ಹಾಗೂ ಬಾಡಿಗೆ ರೂಪದಲ್ಲಿ ಸಾರ್ವಜನಿಕ ಹಣ ವ್ಯಯವಾಗುವುದನ್ನು ತಪ್ಪಿಸುವ ಉದ್ದೇಶದಿಂದ, ಅತ್ಯಾಧುನಿಕ ಸೌಲಭ್ಯಗಳನ್ನು ಒಳಗೊಂಡ ಮೂರು ಅಂತಸ್ತಿನ ಸುಸಜ್ಜಿತ ಸಂಕೀರ್ಣ ನಿರ್ಮಿಸಲಾಗುತ್ತಿದೆ’ ಎಂದು ಶಾಸಕ ಬಿ. ದೇವೇಂದ್ರಪ್ಪ ‘ಪ್ರಜಾವಾಣಿ’ಗೆ ತಿಳಿಸಿದರು.
‘ಪಟ್ಟಣದ ಹಳೇ ಊರಿನಲ್ಲಿರುವ ಬ್ರಿಟಿಷರ ಕಾಲದ ಕಟ್ಟಡದಲ್ಲಿ ಕಚೇರಿ ನಡೆಯುತ್ತಿತ್ತು. ಹಲವು ವರ್ಷಗಳಿಂದ ಕಟ್ಟಡ ಶಿಥಿಲಗೊಂಡಿತ್ತು. ಹೀಗಾಗಿ ₹ 10 ಕೋಟಿ ವೆಚ್ಚದಲ್ಲಿ ಹೊಸ ಕಟ್ಟಡ ಸಂಕೀರ್ಣ ನಿರ್ಮಾಣ ಮಾಡಲಾಗುತ್ತಿದೆ’ ಎಂದು ಲೋಕೋಪಯೋಗಿ ಇಲಾಖೆ ಎಇಇ ನಾಗರಾಜ್ ಮಾಹಿತಿ ನೀಡಿದರು.
‘ನೆಲ ಮಹಡಿ ಹೊರತುಪಡಿಸಿ ಮೂರು ಮಹಡಿಗಳ ಕಟ್ಟಡ ನಿರ್ಮಿಸಲಾಗುತ್ತಿದೆ. ನೆಲ ಮಹಡಿಯಲ್ಲಿ ವಾಹನಗಳ ನಿಲುಗಡೆ ವ್ಯವಸ್ಥೆ, ಡಿಟಿಪಿ, ಜೆರಾಕ್ಸ್ ಹಾಗೂ ಕ್ಯಾಂಟೀನ್ ಸೌಲಭ್ಯ ಇರಲಿದೆ. ಮೊದಲ ಮಹಡಿಯಲ್ಲಿ ನಾಲ್ಕು ಕಚೇರಿಗಳು ಹಾಗೂ ಎರಡನೇ ಮಹಡಿಯಲ್ಲಿ ನಾಲ್ಕು ಕಚೇರಿಗಳಿಗೆ ಅವಕಾಶ ಕಲ್ಪಿಸಲಾಗುವುದು. ಮೂರನೇ ಮಹಡಿಯಲ್ಲಿ ಸುಸಜ್ಜಿತ ಸಭಾಂಗಣ ನಿರ್ಮಿಸಲಾಗುತ್ತದೆ. ಈಗಾಗಲೇ ಟೆಂಡರ್ ಪ್ರಕ್ರಿಯೆ ಮುಗಿದಿದೆ. ಮುಂದಿನ ವಾರ ಕಾಮಗಾರಿಗೆ ಶಾಸಕರು ಚಾಲನೆ ನೀಡಲಿದ್ದಾರೆ’ ಎಂದು ತಿಳಿಸಿದರು.
ಸರ್ಕಾರದಿಂದ ಈಗಾಗಲೇ ₹5 ಕೋಟಿ ಅನುದಾನ ಮಂಜೂರಾಗಿದೆ. ಹಲವು ಕಚೇರಿಗಳು ಒಂದೇ ಕಟ್ಟಡದಲ್ಲಿರಬೇಕು ಎಂಬ ಜನರ ಬೇಡಿಕೆ ಶೀಘ್ರ ಈಡೇರಲಿದೆಬಿ.ದೇವೇಂದ್ರಪ್ಪ ಶಾಸಕ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.