ದಾವಣಗೆರೆ: ಸರ್ಕಾರ ವಿಧಾನಸೌಧದಲ್ಲಿ ಇರುವುದಲ್ಲ, ಅದಕ್ಕಾಗಿ ಸರ್ಕಾರದ ಸೌಲಭ್ಯಗಳನ್ನು ಜನರ ಬಳಿಗೆ ಒಯ್ಯುವ ಕಾರ್ಯ ಮುಂದಿನ ಜನವರಿ 26ರಿಂದ ಜಾರಿಗೆ ತರುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ನ್ಯಾಮತಿ ತಾಲ್ಲೂಕಿನ ಸುರಹೊನ್ನೆಯಲ್ಲಿ 'ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ' ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಶನಿವಾರ ಚಾಲನೆ ನೀಡಿ ಮಾತನಾಡಿದರು.
ನಿಮ್ಮ ರೇಷನ್ ಅನ್ನು ನಿಮ್ಮ ಮನೆ ಬಾಗಿಲಿಗೆ ಕೊಡುವ ವ್ಯವಸ್ಥೆ ಮಾಡುತ್ತೇವೆ. ಅದಕ್ಕೆ ಎಲ್ಲ ರೀತಿಯ ಸಿದ್ಧತೆ ಮಾಡುತ್ತಿದ್ದೇವೆ. ಸಾಮಾಜಿಕ ಭದ್ರತೆ ನಿಮ್ಮ ಮನೆಗೆ ಬರಬೇಕು. ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಎಲ್ಲ ಸರ್ಟಿಫಿಕೆಟ್‌ಗಳು ಸಿಗಬೇಕು ಎಂಬುದು ನಮ್ಮ ಉದ್ದೇಶ ಎಂದು ಹೇಳಿದರು.
ಪ್ರಾಯೋಗಿಕವಾಗಿ ನವೆಂಬರ್ 1ರಂದು ಜನಸೇವಕ ಕಾರ್ಯಕ್ರಮಗಳನ್ನು ಬೆಂಗಳೂರಿನ 28 ಕ್ಷೇತ್ರಗಳಲ್ಲಿ ಮಾಡಲಾಗುವುದು. ಬಳಿಕ ಜ.26ರಿಂದ ರಾಜ್ಯಕ್ಕೆ ವಿಸ್ತರಣೆ ಗೊಳಿಸಲಾಗುವುದು ಎಂದರು.
ಸ್ವಚ್ಛ, ದಕ್ಷ, ಜನಪರ ಆಡಳಿತ ಕೊಡುತ್ತೇವೆ. ಅದರ ಲಾಭವನ್ನು ನೀವು ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.
ದಿನಕ್ಕೆ 20 ತಾಸು ಕೆಲಸ ಮಾಡಲು ತಯಾರಿದ್ದೇನೆ. ಉತ್ತಮ ಸಚಿವ ಸಂಪುಟ ಇದೆ. ಬದಲಾವಣೆ ನಿಮ್ಮ ಊರಲ್ಲಿ, ನಿಮ್ಮ ಬದುಕಲ್ಲಿ ತರಬೇಕು ಎಂದರು.
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಅಧ್ಯಕ್ಷತೆ ವಹಿಸಿದ್ದರು.
ಕಂದಾಯ ಸಚಿವ ಆರ್. ಅಶೋಕ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಕೆ.ಎಸ್. ಈಶ್ವರಪ್ಪ, ‘ಸಂಸದ ಜಿ.ಎಂ. ಸಿದ್ದೇಶ್ವರ, ಶಾಸಕರಾದ ಮಾಡಾಳ್ ವಿರೂಪಾಕ್ಷಪ್ಪ, ಪ್ರೊ.ಎನ್.ಲಿಂಗಣ್ಣ, ವಿಧಾನಪರಿಷತ್ ಸದಸ್ಯ ಆಯನೂರು ಮಂಜುನಾಥ್, ಮಾಜಿ ಶಾಸಕ ಬಸವರಾಜ ನಾಯ್ಕ್, ಮೇಯರ್ ಎಸ್.ಟಿ. ವೀರೇಶ್, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ವೀರೇಶ್ ಹನಗವಾಡಿ, ಸುಮಾ ರೇಣುಕಾಚಾರ್ಯ, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿಲ್ಲಾ ಪಂಚಾಯಿತಿ ಸಿಇಒ ಡಾ. ವಿಜಯ ಮಹಾಂತೇಶ್ ದಾನಮ್ಮನವರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್, ಉಪ ವಿಭಾಗಾಧಿಕಾರಿ ಮಮತಾ ಹೊಸಗೌಡರ್, ಗ್ರಾಮ ಪಂಚಾಯಿತಿ ಅಧ್ಯಕ್ಷ ಹಾಲೇಶ್ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.