ADVERTISEMENT

ಗ್ರಾಮ ಪಂಚಾಯಿತಿಯೇ ಕಾಮಗಾರಿ ನಿರ್ಧರಿಸಲಿ

ಮನರೇಗಾ ಕಾಮಗಾರಿ ಸ್ಥಳದಲ್ಲಿ ಆರೋಗ್ಯ ತಪಾಸಣೆ ಶಿಬಿರದಲ್ಲಿ ಸಂಸದೆ ಪ್ರಭಾ ಮಲ್ಲಿಕಾರ್ಜುನ್

​ಪ್ರಜಾವಾಣಿ ವಾರ್ತೆ
Published 7 ಜನವರಿ 2026, 4:08 IST
Last Updated 7 ಜನವರಿ 2026, 4:08 IST
ದಾವಣಗೆರೆ ತಾಲ್ಲೂಕಿನ ಮಾಯಕೊಂಡ ಕ್ಷೇತ್ರ ವ್ಯಾಪ್ತಿಯ ಹೊನ್ನೂರು ಗ್ರಾಮದಲ್ಲಿ ನಡೆದ ಕಾರ್ಯಕ್ರಮವನ್ನು ಪ್ರಭಾ ಮಲ್ಲಿಕಾರ್ಜುನ್ ಉದ್ಘಾಟಿಸಿದರು
ದಾವಣಗೆರೆ ತಾಲ್ಲೂಕಿನ ಮಾಯಕೊಂಡ ಕ್ಷೇತ್ರ ವ್ಯಾಪ್ತಿಯ ಹೊನ್ನೂರು ಗ್ರಾಮದಲ್ಲಿ ನಡೆದ ಕಾರ್ಯಕ್ರಮವನ್ನು ಪ್ರಭಾ ಮಲ್ಲಿಕಾರ್ಜುನ್ ಉದ್ಘಾಟಿಸಿದರು   

ದಾವಣಗೆರೆ: ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಯಾವೆಲ್ಲಾ ಅಭಿವೃದ್ಧಿ ಕಾಮಗಾರಿಗಳು ನಡೆಯಬೇಕು ಎಂಬುದನ್ನು ಕೇಂದ್ರ ಸರ್ಕಾರ ನಿರ್ಧರಿಸಬೇಕಿಲ್ಲ. ಸ್ಥಳೀಯ ಮಟ್ಟದಲ್ಲಿ ಯಾವೆಲ್ಲಾ ಕಾಮಗಾರಿಗಳು ಅವಶ್ಯ ಎಂಬುದನ್ನು ಗ್ರಾಮ ಪಂಚಾಯಿತಿ ಸದಸ್ಯರೇ ನಿರ್ಧರಿಸಬೇಕು ಎಂದು ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಅಭಿಪ್ರಾಯಪಟ್ಟರು. 

ಮಾಯಕೊಂಡ ಕ್ಷೇತ್ರ ವ್ಯಾಪ್ತಿಯ ಹೊನ್ನೂರು ಗ್ರಾಮದಲ್ಲಿ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ಮಂಗಳವಾರ ಆಯೋಜಿಸಿದ್ದ ‘ಮನರೇಗಾ ಕಾಮಗಾರಿ ಸ್ಥಳದಲ್ಲಿ ಆರೋಗ್ಯ ತಪಾಸಣೆ ಶಿಬಿರ ಮತ್ತು ಕೂಲಿಕಾರರ ಕುಂದುಕೊರತೆಗಳ ಪರಿಶೀಲನೆ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.  

‘ಗ್ರಾಮದಲ್ಲಿ ಎಷ್ಟು ಶೌಚಾಲಯ ನಿರ್ಮಿಸಬೇಕು, ಎಷ್ಟು ಶಾಲೆಗಳನ್ನು ಅಭಿವೃದ್ಧಿ ಪಡಿಸಬೇಕು, ಯಾವ ಹೊಲದ ರಸ್ತೆಗಳು ಅಭಿವೃದ್ಧಿ ಆಗಬೇಕು ಎಂಬುದನ್ನು ಗ್ರಾಮ ಪಂಚಾಯಿತಿ ಸಭೆಗಳಲ್ಲೇ ನಿರ್ಧರಿಸಬೇಕು. ಜಲಮೂಲಗಳ ಶುದ್ಧೀಕರಣ, ಅಂತರ್ಜಲ ಹೆಚ್ಚಳದಂತಹ ಕಾಮಗಾರಿಗಳನ್ನೂ ಕೈಗೊಂಡು ಗ್ರಾಮೀಣ ಜನರ ಬದುಕನ್ನು ಹಸಿರಾಗಿಸಬೇಕು’ ಎಂದು ಹೇಳಿದರು. 

ADVERTISEMENT

‘ಉದ್ಯೋಗ ಖಾತ್ರಿ ಯೋಜನೆ ಅನುಷ್ಠಾನದಲ್ಲಿ ಹೊನ್ನೂರು ಗ್ರಾಮ ಪಂಚಾಯಿತಿ ಅಧಿಕಾರಿಗಳು, ಸಿಬ್ಬಂದಿ ಉತ್ತಮ ಕೆಲಸ ಮಾಡಿದ್ದಾರೆ. ಹೀಗಾಗಿ ಗ್ರಾಮ ಪಂಚಾಯಿತಿಗೆ ಉತ್ತಮ ಸ್ಥಾನ ದೊರೆತಿದೆ’ ಎಂದು ತಿಳಿಸಿದರು. 

‘ಮನರೇಗಾದಿಂದ ದೇಶದಲ್ಲಿ 5 ರಿಂದ 6 ಕೋಟಿ ಜನ ಕೂಲಿ ಕಾರ್ಮಿಕರು ಆರ್ಥಿಕವಾಗಿ ಸಬಲರಾಗಿದ್ದಾರೆ. 2005ರಿಂದ 2026ರ ವರೆಗೆ ಗ್ರಾಮಗಳ ಅಭಿವೃದ್ಧಿಗೆ ಮನರೇಗಾ ಯೋಜನೆ ಕಾರಣವಾಗಿತ್ತು. ಈಗ ಇದನ್ನು ಕೇಂದ್ರ ಸರ್ಕಾರ ಬದಲಿಸಿದ್ದು, ಗ್ರಾಮ ಪಂಚಾಯಿತಿಗಳ ಅಧಿಕಾರವನ್ನು ಕಸಿದುಕೊಂಡಿದೆ’ ಎಂದು ದೂರಿದರು. 

‘ಕೇಂದ್ರ ಸರ್ಕಾರದ ನಡೆಯಿಂದ ಗ್ರಾಮೀಣ ಆರ್ಥಿಕತೆಗೆ ಪೆಟ್ಟು ಬೀಳಲಿದೆ. ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ಮಹಾಪುರುಷನ ಹೆಸರನ್ನೇ ಅಳಿಸುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡಿದೆ’ ಎಂದು ಟೀಕಿಸಿದರು. 

ಜಿಲ್ಲಾ ಪಂಚಾಯಿತಿ ಸಿಇಒ ಗಿತ್ತೆ ಮಾಧವ ವಿಠ್ಠಲ್ ರಾವ್, ತಾಲ್ಲೂಕು ಪಂಚಾಯಿತಿ ಇಒ ರಾಮಭೋವಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಷಣ್ಮುಖಪ್ಪ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು. 

ಗ್ರಾಮೀಣ ಜನರ ಆರ್ಥಿಕತೆಗೆ ಕೊಡಲಿ ಪೆಟ್ಟು

’ ‘ಉದ್ಯೋಗ ಖಾತ್ರಿ ಯೋಜನೆ ಜಾರಿಗೂ ಮುನ್ನ ಈ ಭಾಗದ ಸಾಕಷ್ಟು ಸಂಖ್ಯೆಯ ಜನರು ರಾಜ್ಯದ ಕಾಫಿನಾಡು ಹಾಗೂ ಮಹಾರಾಷ್ಟ್ರ ಕೇರಳ ಸೇರಿದಂತೆ ಹೊರ ರಾಜ್ಯಗಳಿಗೆ ಉದ್ಯೋಗ ಅರಸಿ ವಲಸೆ ಹೋಗುತ್ತಿದ್ದರು. ಯುಪಿಎ ಸರ್ಕಾರ ‘ಮನರೇಗಾ’ ಯೋಜನೆ ಜಾರಿಗೊಳಿಸಿದ ಬಳಿಕ ಗ್ರಾಮೀಣ ಭಾಗದ ಜನರು ಬದುಕು ಕಂಡುಕೊಂಡು ಆರ್ಥಿಕವಾಗಿ ಸಬಲರಾದರು’ ಎಂದು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಹೇಳಿದರು.  ‘ಉದ್ಯೋಗ ಖಾತ್ರಿ ಯೋಜನೆಯಿಂದ ದೇಶದ ಗ್ರಾಮೀಣ ಪ್ರದೇಶಗಳು ಅಭಿವೃದ್ಧಿ ಪಥದಲ್ಲಿ ಸಾಗುತ್ತಿವೆ. ಇದೀಗ ಕೇಂದ್ರ ಸರ್ಕಾರ ಯೋಜನೆಯ ಸ್ವರೂಪವನ್ನೇ ಬದಲಾಯಿಸಿ ಗ್ರಾಮೀಣ ಜನರ ಆರ್ಥಿಕತೆಗೆ ಕೊಡಲಿ ಪೆಟ್ಟು ನೀಡುತ್ತಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.