ಹರಿಹರ: ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿ ಗ್ರೇಡ್-2 ತಹಶೀಲ್ದಾರ್ ಪುಷ್ಪಾವತಿ ಅವರ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಸಲ್ಲಿಸಿದರು.
ಶಿವಮೊಗ್ಗ ರಸ್ತೆಯ ಪಕ್ಕೀರಸ್ವಾಮಿ ಮಠದಿಂದ ಮೆರವಣಿಗೆ ಮೂಲಕ ತಾಲ್ಲೂಕು ಕಚೇರಿಗೆ ಆಗಮಿಸಿದ ಪ್ರತಿಭಟನಕಾರರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಆರಂಭದಲ್ಲಿ ಜಿಎಸ್‌ಟಿ ಮೂಲಕ ಹಾಲು, ಮೊಸರಿನ ದರ ಏರುವಂತೆ ಮಾಡಿತು. ಈಗ ಅಡುಗೆ ಅನಿಲ, ಇಂಧನ ಬೆಲೆಯನ್ನು ಏರಿಸುವ ಮೂಲಕ ಬಡ, ಮಧ್ಯಮ ವರ್ಗದವರ ಮೇಲೆ ಆರ್ಥಿಕ ಹೊರೆಯನ್ನು ಹೇರಿದೆ ಎಂದು ಮಾಜಿ ಶಾಸಕ ಎಸ್.ರಾಮಪ್ಪ ಆರೋಪಿಸಿದರು.
ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ವಾಹನ ಸವಾರರಿಗೆ ಟೊಲ್ ದರ ಏರಿಸಿ ಕೇಂದ್ರ ಸರ್ಕಾರ ಬಿಸಿ ಮುಟ್ಟಿಸಿದೆ ಎಂದು ಕಾಂಗ್ರೆಸ್ ಮುಖಂಡ ನಂದಿಗಾವಿ ಶ್ರೀನಿವಾಸ್ ಆರೋಪಿಸಿದರು.
ಏರಿಸಿರುವ ಅಗತ್ಯ ವಸ್ತುಗಳ ಬೆಲೆಗಳನ್ನು ತಕ್ಷಣ ಇಳಿಸಬೇಕು. ತಪ್ಪಿದಲ್ಲಿ ಜನ ಸಾಮಾನ್ಯರೊಂದಿಗೆ ಸೇರಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.
ಯುವ ಕಾಂಗ್ರೆಸ್ ಹರಿಹರ ಘಟಕದ ಅಧ್ಯಕ್ಷ ಅಬ್ದುಲ್ ನಸೀರ್, ಉಪಾಧ್ಯಕ್ಷ ಅಬ್ದುಲ್ ಕರೀಂ, ರಾಜ್ಯ ಕಾರ್ಯದರ್ಶಿ ಅಬು ತಾಹೀರ್, ಜಿಲ್ಲಾ ಕಾರ್ಯದರ್ಶಿಗಳಾದ ನಿಧಿ, ಶಾಹಿದ್, ಸುಲೈಮಾನ್, ಸೈಯದ್ ಸನಾಉಲ್ಲಾ, ವೈ.ರಘುಪತಿ, ಮಲ್ಲಿಕ್, ಕೆ.ಎಸ್.ಅಬ್ದುಲ್ಲಾ, ಅಚ್ಚು, ಪ್ರಶಾಂತ, ರಾಜು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.