ADVERTISEMENT

ಸರ್ಕಾರಿ ಉದ್ಯೋಗ ನೀಡಲು ಒತ್ತಾಯ: ಶ್ರವಣದೋಷವುಳ್ಳವರ ಸಂಘದಿಂದ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 20 ಆಗಸ್ಟ್ 2024, 15:39 IST
Last Updated 20 ಆಗಸ್ಟ್ 2024, 15:39 IST
   

ದಾವಣಗೆರೆ: ಸರ್ಕಾರಿ, ಅರೆ ಸರ್ಕಾರಿ ಕಚೇರಿಗಳಿಗೆ ಸಿಬ್ಬಂದಿ ನೇಮಕಾತಿಯಲ್ಲಿ ಶ್ರವಣದೋಷವುಳ್ಳವರನ್ನು ಪರಿಗಣಿಸಬೇಕು ಎಂದು ಒತ್ತಾಯಿಸಿ ಜಿಲ್ಲಾ ಶ್ರವಣದೋಷವುಳ್ಳವರ ಸಂಘದ ಸದಸ್ಯರು ಮಂಗಳವಾರ ಪ್ರತಿಭಟನೆ ನಡೆಸಿದರು.

ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಪ್ರತಿಭಟನಕಾರರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಲೋಕಸಭಾ ಚುನಾವಣೆಗೂ ಮುನ್ನ ನೀಡಿದ ಆಶ್ವಾಸನೆಯನ್ನು ಅಧಿಕಾರಿಗಳು ಈಡೇರಿಸಿಲ್ಲ ಎಂದು ಅಸಮಾಧಾನ ಹೊರಹಾಕಿದರು.

ಸರ್ಕಾರಿ ಮತ್ತು ಅರೆ ಸರ್ಕಾರಿ ಕಚೇರಿಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳುವಾಗ ಶ್ರವಣದೋಷವುಳ್ಳ ವ್ಯಕ್ತಿಗಳನ್ನು ಪರಿಗಣಿಸುವಂತೆ ಸರ್ಕಾರ ಸೂಚನೆ ನೀಡಿದೆ. ನೇಮಕಾತಿಯಲ್ಲಿ ಅಂಗವಿಕಲರಿಗೆ ಶೇ 5ರಷ್ಟು ಮೀಸಲಾತಿ ಕಲ್ಪಿಸಲಾಗಿದೆ. ಆದರೆ, ಬಹುತೇಕ ಸರ್ಕಾರಿ ಕಚೇರಿಗಳಲ್ಲಿ ಶ್ರವಣದೋಷವುಳ್ಳವರನ್ನು ನೇಮಕಾತಿಗೆ ಪರಿಗಣಿಸುತ್ತಿಲ್ಲ. ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳಲ್ಲಿ ಸಂಪೂರ್ಣ ನಿರ್ಲಕ್ಷ್ಯ ಮಾಡಲಾಗಿದೆ ಎಂದು ಆರೋಪಿಸಿದರು.

ADVERTISEMENT

ಅಂಗವಿಕಲರ ಕಲ್ಯಾಣ ಇಲಾಖೆ ಸರಿಯಾಗಿ ಸ್ಪಂದಿಸುತ್ತಿಲ್ಲ. ಸರ್ಕಾರಿ ಸಾಲ ಸೌಲಭ್ಯಗಳನ್ನು ತಲುಪಿಸುವಲ್ಲಿ ವಿಫಲವಾಗಿದೆ. ಅನರ್ಹರು ಸರ್ಕಾರಿ ಸೌಲಭ್ಯ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಶ್ರವಣದೋಷವುಳ್ಳ ಮಕ್ಕಳಿಗೆ ಉತ್ತಮ ಶಿಕ್ಷಣ ಸಿಗುತ್ತಿಲ್ಲ. ಇಂತಹ ಶಿಕ್ಷಣ ಸಂಸ್ಥೆಗಳಿಗೆ ನೀಡುತ್ತಿರುವ ಅನುದಾನ ಸದ್ಬಳಕೆ ಆಗುತ್ತಿಲ್ಲ. ಈ ಕುರಿತು ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ನೀಡಿದ ಆಶ್ವಾಸನೆ ಈಡೇರಿಸುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾ ಶ್ರವಣದೋಷವುಳ್ಳವರ ಸಂಘದ ಅಧ್ಯಕ್ಷ ಎಸ್‌.ಆಸೀಫ್‌, ಪ್ರಧಾನ ಕಾರ್ಯದರ್ಶಿ ಬಿ.ಕೆ.ಪಿ.ರಾಜಶೇಖರ್‌, ಖಜಾಂಚಿ ಎಸ್‌.ಪ್ರದೀಪ್‌, ರೇಣುಕಾ, ಗಿರೀಶ್‌, ದುರುಗೇಶ್‌ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.