
ಹೊನ್ನಾಳಿಗೆ ಆಗಮಿಸಲಿರುವ ಜಾತ್ರ ಮಹೋತ್ಸವದ ರಥದ ಭಾವಚಿತ್ರವನ್ನು ಬಿಡುಗಡೆ ಮಾಡಲಾಯಿತು.
ಹೊನ್ನಾಳಿ: ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ಡಿ. 16ರಿಂದ 21ರವರೆಗೆ ಶಿವರಾತ್ರೀಶ್ವರ ಶಿವಯೋಗಿ ಸ್ವಾಮೀಜಿಯ 1,066ನೇ ಜಯಂತಿ ಮಹೋತ್ಸವವನ್ನು ಆಚರಿಸಲಾಗುವುದು. 16ರಂದು ಮಧ್ಯಾಹ್ನ 3ಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಮಾರಂಭವನ್ನು ಉದ್ಘಾಟಿಸಲಿದ್ದಾರೆ ಎಂದು ಜಾತ್ರಾ ಮಹೋತ್ಸವದ ಶಿವಮೊಗ್ಗ ವಿಭಾಗದ ಮುಖ್ಯಸ್ಥ ಹೊಳಲೂರಿನ ಕೆ.ಜಿ. ನಿಂಗಪ್ಪ ಹೇಳಿದರು.
ಸುತ್ತೂರು ಮಠದ ಶ್ರೀಗಳು ಸಾನ್ನಿಧ್ಯ ವಹಿಸಲಿದ್ದಾರೆ. ರಾಜ್ಯಪಾಲ ಥಾವರಚಂದ್ ಗೆಹ್ಲೋತ್ ಅಧ್ಯಕ್ಷತೆ ವಹಿಸಲಿದ್ದಾರೆ. ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಎಚ್.ಡಿ. ಕುಮಾರಸ್ವಾಮಿ ನೆನಪಿನ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷ ಪಿ.ಎಂ. ನರೇಂದ್ರಸ್ವಾಮಿ ಪಾಲ್ಗೊಳ್ಳಲಿದ್ದಾರೆ ಎಂದರು.
ರಥಯಾತ್ರೆ ಡಿ. 13ಕ್ಕೆ ಹೊನ್ನಾಳಿಗೆ: ಸುತ್ತೂರು ಜಾತ್ರಾ ಮಹೋತ್ಸವದ ಪ್ರಚಾರದ ರಥಯಾತ್ರೆಯು ಡಿ. 13ರಂದು ಶಿವಮೊಗ್ಗ ಜಿಲ್ಲೆಯ ಹೊಳಲೂರು, ಹರಮಘಟ್ಟ, ಕೊಮ್ಮನಾಳು ಮಾರ್ಗವಾಗಿ ನ್ಯಾಮತಿ ತಾಲ್ಲೂಕಿನ ಸವಳಂಗ, ನ್ಯಾಮತಿ ಪಟ್ಟಣ ಹಾಗೂ ಸಂಜೆ 4.30ಕ್ಕೆ ಹೊನ್ನಾಳಿಯ ಹಿರೇಕಲ್ಮಠಕ್ಕೆ ಬರಲಿದೆ ಎಂದರು.
ಅಂದು ನಡೆಯುವ ಸ್ವಾಗತ ಸಮಾರಂಭದಲ್ಲಿ ಡಾ.ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ, ಶಾಸಕ ಡಿ.ಜಿ. ಶಾಂತನಗೌಡ, ಮಾಜಿ ಸಚಿವ ರೇಣುಕಾಚಾರ್ಯ, ಬಯಲು ಸೀಮೆ ಮಂಡಳಿಯ ಅಧ್ಯಕ್ಷ ಎಚ್.ಬಿ. ಮಂಜಪ್ಪ, ಎಚ್.ಎ. ಉಮಾಪತಿ ಹಾಗೂ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸಂಚಾಲಕ ಜ್ಯೋತಿ ಅಕ್ಕ ಭಾಗವಹಿಸಲಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ಜ್ಯೋತಿ ಅಕ್ಕ, ಮುಖಂಡ ಎಚ್.ಎ. ಉಮಾಪತಿ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.