ಹೊನ್ನಾಳಿ: ಒಳಮೀಸಲಾತಿ ಜಾರಿಗೊಳಿಸಬೇಕು ಎಂದು ಸುಪ್ರೀಂ ಕೋರ್ಟ್ ಆದೇಶಿಸಿ ಆಗಸ್ಟ್ 1ಕ್ಕೆ ವರ್ಷ ತುಂಬಿದರೂ ರಾಜ್ಯ ಸರ್ಕಾರ ಅದನ್ನು ಜಾರಿಗೊಳಿಸುತ್ತಿಲ್ಲ ಎಂದು ಮುಖಂಡ ದಿಡಗೂರು ತಮ್ಮಣ್ಣ ಆರೋಪಿಸಿದರು.
ಹೊನ್ನಾಳಿ, ನ್ಯಾಮತಿ ಅವಳಿ ತಾಲ್ಲೂಕು ಒಳಮೀಸಲಾತಿ ಹೋರಾಟ ಸಮಿತಿಯಿಂದ ಶುಕ್ರವಾರ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮಾತನಾಡಿದರು.
ತೆಲಂಗಾಣ, ಆಂಧ್ರ ಪ್ರದೇಶ, ತಮಿಳುನಾಡು, ಹರಿಯಾಣ ಸೇರಿ ಇತರೆ ರಾಜ್ಯಗಳಲ್ಲಿ ಒಳಮೀಸಲಾತಿ ಜಾರಿ ಮಾಡಲಾಗಿದೆ. ಆದರೆ ರಾಜ್ಯ ಸರ್ಕಾರ ಅನಗತ್ಯವಾಗಿ ಆಯೋಗವನ್ನು ರಚಿಸಿ, ವಿಳಂಬ ಧೋರಣೆ ತಳೆದಿದೆ. ಎಲ್ಲ ಪಕ್ಷಗಳ ಸರ್ಕಾರಗಳೂ ಮಾದಿಗ ಸಮಾಜಕ್ಕೆ ಅನ್ಯಾಯ ಮಾಡಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಆಗಸ್ಟ್ 15ರೊಳಗೆ ಒಳಮೀಸಲಾತಿ ಆದೇಶ ಜಾರಿ ಮಾಡದಿದ್ದರೆ ರಾಜ್ಯದಾದ್ಯಂತ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.
‘ರಾಜ್ಯದಲ್ಲಿ ಒಂದು ಕೋಟಿಗೂ ಅಧಿಕ ಸಂಖ್ಯೆಯಲ್ಲಿರುವ ನಾವು ಸಂವಿಧಾನಬದ್ಧ ಹಕ್ಕನ್ನು ಬೇಡಿ ಪಡೆದುಕೊಳ್ಳುವ ಸ್ಥಿತಿಗೆ ಬಂದಿದೆ’ ಎಂದು ಪ್ರಜಾಪರಿವರ್ತನಾ ವೇದಿಕೆಯ ರಾಜ್ಯ ಘಟಕದ ಉಪಾಧ್ಯಕ್ಷ ಎ.ಡಿ. ಈಶ್ವರಪ್ಪ ಬೇಸರ ವ್ಯಕ್ತಪಡಿಸಿದರು.
ಮುಖಂಡರಾದ ಮಾರಿಕೊಪ್ಪ ಮಂಜಪ್ಪ, ಕುಂದೂರು ಶಾಂತರಾಜ್, ಅಣ್ಣಪ್ಪ, ರಾಜಪ್ಪ, ಕುರುವ ಮಂಜುನಾಥ್, ಬೀರಗೊಂಡನಹಳ್ಳಿ ಮಂಜು, ಒ. ಹನುಮಂತಪ್ಪ, ಮಂಜು ಕೆಂಚಿಕೊಪ್ಪ, ತ್ಯಾಗದಕಟ್ಟೆ ಹನುಮಂತಪ್ಪ ಸೇರಿದಂತೆ ನೂರಾರು ಜನ ಭಾಗವಹಿಸಿದ್ದರು.
ಉಪವಿಭಾಗಾಧಿಕಾರಿ ವಿ. ಅಭಿಷೇಕ್ ಅವರಿಗೆ ಮನವಿಪತ್ರವನ್ನು ಸಲ್ಲಿಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.