ಹೊನ್ನಾಳಿ: ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಭರವಸೆ ನೀಡಿದ್ದ 5 ಗ್ಯಾರಂಟಿಗಳನ್ನು ಯಶಸ್ವಿಯಾಗಿ ಅನುಷ್ಠಾನ ಮಾಡಿದೆ. ಆದರೆ ಸರ್ಕಾರ ಅಭಿವೃದ್ಧಿ ಕೆಲಸಗಳಿಗೆ ಅನುದಾನ ನೀಡುತ್ತಿಲ್ಲ ಎಂದು ಅಧಾರರಹಿತ ಆರೋಪ ಮಾಡಲಾಗುತ್ತಿದೆ. ಇದು ಸರಿಯಲ್ಲ. ಶೀಘ್ರದಲ್ಲಿಯೇ ರಾಜ್ಯ ಸರ್ಕಾರ ಪ್ರತಿ ಕ್ಷೇತ್ರಕ್ಕೆ ₹ 50 ಕೋಟಿ ಅನುದಾನ ನೀಡಲಿದೆ’ ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಹೇಳಿದರು.
ಮೇ 20ರಂದು ವಿಜಯನಗರದಲ್ಲಿ ನಡೆಯಲಿರುವ ರಾಜ್ಯ ಸರ್ಕಾರದ ಎರಡು ವರ್ಷಗಳ ಸಾಧನಾ ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ದೇಶದ ರಕ್ಷಣೆ ವಿಚಾರದಲ್ಲಿ ಕೇಂದ್ರ ಸರ್ಕಾರ ತೆಗೆದುಕೊಳ್ಳುವ ಎಲ್ಲಾ ನಿರ್ಧಾರಗಳಿಗೂ ಕಾಂಗ್ರೆಸ್ ಪಕ್ಷ ಬೆಂಬಲ ನೀಡಲಿದೆ. ಈ ವಿಚಾರದಲ್ಲಿ ಯಾರೂ ರಾಜಕಾರಣ ಮಾಡಬಾರದು ಎಂದರು.
ಇಲ್ಲಿನ ಡಿಪ್ಲೊಮಾ ಕಾಲೇಜಿಗೆ ಹೆಚ್ಚುವರಿ ವಿಭಾಗಗಳನ್ನು ತೆರೆಯಲು ಪ್ರಸ್ತಾವನೆ ಸಲ್ಲಿಸಿದರೆ, ಬರುವ ಶೈಕ್ಷಣಿಕ ವರ್ಷದಲ್ಲಿ ಮಂಜೂರಾತಿ ನೀಡಲಾಗುವುದು ಎಂದು ಭರವಸೆ ನೀಡಿದರು.
‘ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದು ವಿರೋಧ ಪಕ್ಷಗಳ ಟೀಕೆಗೆ ತಿರುಗೇಟು ನೀಡಿದೆ. ಗ್ಯಾರಂಟಿಗಳ ಬಗ್ಗೆ ಟೀಕೆ ಮಾಡುತ್ತಿದ್ದ ಬಿಜೆಪಿಯೇ ಅವುಗಳನ್ನು ನಕಲು ಮಾಡುತ್ತಿದೆ’ ಎಂದು ಶಾಸಕ ಡಿ.ಜಿ.ಶಾಂತನಗೌಡ ಹೇಳಿದರು.
ಹೊಸಪೇಟೆ ಸಮಾವೇಶಕ್ಕೆ ಹೊನ್ನಾಳಿ, ನ್ಯಾಮತಿ ಅವಳಿ ತಾಲ್ಲೂಕಿನಿಂದ 15 ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ. ಸಾವಿರಕ್ಕೂ ಹೆಚ್ಚಿನ ಫಲಾನುಭವಿಗಳು ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷದ ಕಾರ್ಯಕರ್ತರು ಭಾಗವಹಿಸುವಂತೆ ಮನವಿ ಮಾಡಿದರು.
ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಬಿ.ಮಂಜಪ್ಪ ಮಾತನಾಡಿದರು. ನಂತರ, ಸಚಿವ ಸುಧಾಕರ್ ಅವರು ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಭೇಟಿ ನೀಡಿದರು.
ವೇದಿಕೆಯಲ್ಲಿ ಮಾಜಿ ಶಾಸಕ ಡಿ.ಬಿ, ಗಂಗಪ್ಪ, ಜಿ.ಪಂ. ಮಾಜಿ ಸದಸ್ಯ ಡಿ.ಜಿ. ವಿಶ್ವನಾಥ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಣ್ಣಕ್ಕಿ ಬಸವನಗೌಡ, ಸಾಸ್ವೆಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆರ್. ನಾಗಪ್ಪ, ಮುಖಂಡರಾದ ಬಿ. ಸಿದ್ದಪ್ಪ, ನುಚ್ಚಿನ್ ವಾಗೀಶ್, ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷ ಮನುವಾಲಜ್ಜಿ, ಜಿಲ್ಲಾ ಮುಖಂಡ ಎಚ್.ಎಸ್.ರಂಜಿತ್, ಎಚ್.ಬಿ. ಶಿವಯೋಗಿ, ಚಂದ್ರಶೇಖರಪ್ಪ, ಎಚ್.ಎ. ಗದ್ದಿಗೇಶ್ ಉಪಸ್ಥಿತರಿದ್ದರು.
ಶಾಸಕ ಡಿ.ಜಿ.ಶಾಂತಗೌಡ ಅವರು ಉತ್ತಮ ಕೆಲಸ ಮಾಡುತ್ತಿದ್ದರೂ ಅವರಿಗೆ ಪ್ರಚಾರ ಸಿಗುತ್ತಿಲ್ಲ ಆದರೆ ಕ್ಷೇತ್ರದ ಮಾಜಿ ಸಚಿವರು ಏನೇನೋ ವಿಚಾರಕ್ಕೆ ಸಾಕಷ್ಟು ಪ್ರಚಾರ ಪಡೆದುಕೊಳ್ಳುತ್ತಿದ್ದಾರೆಡಾ. ಎಂ.ಸಿ. ಸುಧಾಕರ್ ಉನ್ನತ ಶಿಕ್ಷಣ ಸಚಿವ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.