
ದಾವಣಗೆರೆ: ಸರ್ಕಾರಿ ಹಾಸ್ಟೆಲ್ ಹಾಗೂ ವಸತಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ‘ವಿದ್ಯಾರ್ಥಿ ಆರೋಗ್ಯ ಕಾರ್ಡ್’ ವ್ಯವಸ್ಥೆಯನ್ನು ಜನವರಿ ಮೊದಲ ವಾರದಿಂದ ಅನುಷ್ಠಾನಕ್ಕೆ ತರಲಾಗುತ್ತಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್ ಹೇಳಿದರು.
ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಮಕ್ಕಳ ರಕ್ಷಣಾ ನಿರ್ದೇಶನಾಲಯದ ವತಿಯಿಂದ ಗ್ರಾಮೀಣ ಮತ್ತು ನಗರ ಅಂಗವಿಕಲ ಪುನರ್ವಸತಿ ಕಾರ್ಯಕರ್ತರಿಗೆ ಮಕ್ಕಳ ರಕ್ಷಣೆ ಕುರಿತು ಸೋಮವಾರ ಏರ್ಪಡಿಸಿದ್ದ ಅರಿವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
‘ರಾಜ್ಯದ ವಿವಿಧೆಡೆ ಹಾಸ್ಟೆಲ್ ವಿದ್ಯಾರ್ಥಿಗಳ ಮೇಲೆ ಲೈಂಗಿಕ ದೌರ್ಜನ್ಯಗಳು ನಡೆದಿರುವ ಬಗ್ಗೆ ವರದಿಗಳಾಗಿವೆ. ಜಿಲ್ಲೆಯ ಹಾಸ್ಟೆಲ್‌ಗಳಲ್ಲಿ 20,000ಕ್ಕೂ ಅಧಿಕ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ವಿದ್ಯಾರ್ಥಿ ಕಾರ್ಡ್ ಮೂಲಕ ಅವರ ಆರೋಗ್ಯದ ಮೇಲೆ ನಿಗಾ ಇಡಲಾಗುತ್ತದೆ. ಆರೋಗ್ಯ ಸಮಸ್ಯೆ ಪತ್ತೆ ಹಾಗೂ ದೌರ್ಜನ್ಯ ನಡೆದಿದ್ದರೆ ತ್ವರಿತವಾಗಿ ಗಮನಕ್ಕೆ ಬರಲಿದೆ’ ಎಂದರು.
‘ತಾಯಿ ಕಾರ್ಡ್ ಮಾದರಿಯ ವಿದ್ಯಾರ್ಥಿ ಕಾರ್ಡ್‌ನ್ನು ಹಾಸ್ಟೆಲ್‌ನ ಪ್ರತಿ ವಿದ್ಯಾರ್ಥಿಗೆ ನೀಡಲಾಗುತ್ತದೆ. ಹಾಸ್ಟೆಲ್ ವ್ಯಾಪ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರ ಅಥವಾ ಸಮುದಾಯ ಆರೋಗ್ಯ ಕೇಂದ್ರದ ವೈದ್ಯರು ಪ್ರತಿ ತಿಂಗಳು ವಿದ್ಯಾರ್ಥಿನಿಲಯಗಳಿಗೆ ಭೇಟಿ ನೀಡಿ ಆರೋಗ್ಯ ತಪಾಸಣೆ ಮಾಡಲಿದ್ದಾರೆ. ವಿದ್ಯಾರ್ಥಿಯ ಆರೋಗ್ಯದ ಸ್ಥಿತಿಯನ್ನು ಕಾರ್ಡ್‌ನಲ್ಲಿ ನಮೂದಿಸಿ ಸಹಿ ಹಾಕಲಿದ್ದಾರೆ. ಬಾಲಗರ್ಭಿಣಿಯರ ಪತ್ತೆಗೂ ಇದು ನೆರವಾಗಲಿದೆ’ ಎಂದು ವಿವರಿಸಿದರು.
‘ಬಾಲಕಾರ್ಮಿಕ ಪದ್ಧತಿ, ಬಾಲ್ಯವಿವಾಹ ಸಮಸ್ಯೆ ಹೆಚ್ಚಾಗಿದೆ. ಪೋಕ್ಸೊ ಕಾಯ್ದೆಯಡಿ ದಾಖಲಾದ ಪ್ರಕರಣಗಳ ಶಿಕ್ಷೆಯ ಪ್ರಮಾಣ ತೃಪ್ತಿದಾಯಕವಾಗಿಲ್ಲ. ಇಂತಹ ಪ್ರಕರಣಗಳಲ್ಲಿಯೂ ರಾಜಿ, ಹೊಂದಾಣಿಕೆ ನಡೆಯುತ್ತಿರುವುದು ವಿಪರ್ಯಾಸ. ಶಿಕ್ಷಣಕ್ಕೆ ಒತ್ತು ನೀಡಿದರೆ, ಶಾಲೆ–ಕಾಲೇಜುಗಳಿಂದ ಹೊರಗೆ ಉಳಿದ ವಿದ್ಯಾರ್ಥಿಗಳ ಪತ್ತೆಗೆ ಗಮನ ಹರಿಸಿದರೆ ದೌರ್ಜನ್ಯಗಳಿಗೆ ಕಡಿವಾಣ ಹಾಕಲು ಸಾಧ್ಯವಿದೆ’ ಎಂದು ಅಭಿಪ್ರಾಯಪಟ್ಟರು.
‘ದಾವಣಗೆರೆ ತಾಲ್ಲೂಕಿನ ಹೆಬ್ಬಾಳ, ಗಡಿಗುಡಾಳು ಸೇರಿ ಹಲವು ಗ್ರಾಮಗಳಿಗೆ ಭೇಟಿ ನೀಡಿ ಅಂಗನವಾಡಿ, ಶಾಲೆಗಳನ್ನು ಪರಿಶೀಲಿಸಿದ್ದೇನೆ. ಬಾಡಿಗೆ ಕಟ್ಟಡದಲ್ಲಿರುವ ಅಂಗನವಾಡಿಯೊಂದು ಅಪಾಯಕಾರಿ ಸ್ಥಿತಿಯಲ್ಲಿರುವುದು ಕಂಡು ಬೇಸರವಾಯಿತು. ಮಕ್ಕಳ ಹಕ್ಕುಗಳ ರಕ್ಷಣೆಗೆ ಪ್ರತಿಯೊಬ್ಬರೂ ಗಮನ ಹರಿಸಬೇಕು’ ಎಂದು ಸಲಹೆ ನೀಡಿದರು.
ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಮಂಜುಳಾ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಪರಮೇಶ್ವರ ಹೆಗಡೆ, ಡಿಡಿಪಿಐ ಕೊಟ್ರೇಶ್, ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿ ಕೆ.ಕೆ. ಪ್ರಕಾಶ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಟಿ.ಎನ್. ಕವಿತಾ, ಸಂಪನ್ಮೂಲ ವ್ಯಕ್ತಿಗಳಾದ ಮಲ್ಲಪ್ಪ ಆರ್. ಜಲಗಾರ್, ಗುರುಪ್ರಸಾದ್ ಹಾಜರಿದ್ದರು.
‘ಅರಿವಿಲ್ಲದವರು ಅಂಗವಿಕಲರು’
ದೈಹಿಕ ನ್ಯೂನತೆ ಹೊಂದಿವರು ಅಂಗವಿಕಲರಲ್ಲ. ಕಾನೂನು ತಿಳಿವಳಿಕೆ, ಸೌಲಭ್ಯಗಳ ಬಗ್ಗೆ ಮಾಹಿತಿ ಕೊರತೆ ಇರುವವರು ಅಂಗವಿಕಲರು ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಕರೆಣ್ಣವರ್ ಅಭಿಪ್ರಾಯಪಟ್ಟರು.
‘ಅಪಾಯಕಾರಿ ಕೆಲಸಕ್ಕೆ ಮಕ್ಕಳನ್ನು ಬಳಸಿಕೊಳ್ಳಲಾಗುತ್ತಿದೆ. ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಯುತ್ತಿದೆ. ಮಕ್ಕಳನ್ನು ರಕ್ಷಣೆ ಮಾಡುವ ಹೊಣೆಗಾರಿಕೆ ಪ್ರತಿಯೊಬ್ಬರ ಮೇಲಿದೆ. ಮಕ್ಕಳ ಹಕ್ಕುಗಳ ರಕ್ಷಣೆಯ ಕಾರ್ಯಕ್ಕೆ ಅಂಗವಿಕಲರು ಕೈಜೋಡಿಸಿದ್ದು ಶ್ಲಾಘನೀಯ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.