ADVERTISEMENT

ಸ್ಮಾರ್ಟ್‌ಸಿಟಿ ಯೋಜನೆಯಲ್ಲಿ ಭಾರಿ ಭ್ರಷ್ಟಾಚಾರ: ಆರೋಪ

​ಪ್ರಜಾವಾಣಿ ವಾರ್ತೆ
Published 22 ಸೆಪ್ಟೆಂಬರ್ 2021, 4:43 IST
Last Updated 22 ಸೆಪ್ಟೆಂಬರ್ 2021, 4:43 IST

ದಾವಣಗೆರೆ: ನಗರದಲ್ಲಿ ನಡೆಯುತ್ತಿರುವ ಸ್ಮಾರ್ಟ್‍ಸಿಟಿ ಯೋಜನೆ ಕಾಮಗಾರಿಯಲ್ಲಿ ಭಾರಿ ಭ್ರಷ್ಟಾಚಾರ ನಡೆದಿದೆ. ಸ್ಮಾರ್ಟ್‍ಸಿಟಿ ಲಿಮಿಟೆಡ್ ವ್ಯವಸ್ಥಾಪಕರನ್ನು ಬೇರೆಡೆ ವರ್ಗಾವಣೆ ಮಾಡದೇ ರಾಜ್ಯ ಸರ್ಕಾರವು ಹೈಕೋರ್ಟ್‍ ನಿವೃತ್ತ ನ್ಯಾಯಮೂರ್ತಿಗಳಿಂದ ತನಿಖೆ ನಡೆಸಬೇಕು ಎಂದು ಯುವ ಭಾರತ್ ಗ್ರೀನ್ ಬ್ರಿಗೇಡ್ ಅಧ್ಯಕ್ಷ ನಾಗರಾಜ ಸೂರ್ವೆ ಒತ್ತಾಯಿಸಿದ್ದಾರೆ.

ನಗರದಲ್ಲಿ ನಡೆದಿರುವ ಕಾಮಗಾರಿಯಲ್ಲಿ ₹ 150 ಕೋಟಿಯಿಂದ ₹ 200 ಕೋಟಿ ರೂಪಾಯಿ ಭ್ರಷ್ಟಾಚಾರ ನಡೆದಿದೆ. ₹ 6 ಕೋಟಿ ವೆಚ್ಚದ ಇ-ಶೌಚಾಲಯ, ₹ 10 ಕೋಟಿ ವೆಚ್ಚದ ಪಬ್ಲಿಕ್ ಬೈಸಿಕಲ್ ಶೇರಿಂಗ್ ಸಿಸ್ಟಂ, ₹ 50 ಕೋಟಿ ವೆಚ್ಚದ ರಿಂಗ್ ರಸ್ತೆ ಕಾಮಗಾರಿ, ಸಿಸಿಟಿವಿ ಕ್ಯಾಮೆರಾ ಅಳವಡಿಕೆ ಕಾಮಗಾರಿ, ಮಳೆ ನೀರು ಚರಂಡಿ ಅಭಿವೃದ್ಧಿ ಕಾಮಗಾರಿ, ಫುಟ್‍ಪಾತ್ ಅಭಿವೃದ್ಧಿ ಕಾಮಗಾರಿ ಸೇರಿದಂತೆ ವಿವಿಧ ಕಾಮಗಾರಿಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.

ಸ್ಮಾರ್ಟ್‍ಸಿಟಿ ಯೋಜನೆಯಡಿ ಐಸಿಟಿ ಫೇಜ್-1 ಕಾಮಗಾರಿಯಲ್ಲಿ ನಗರದ ಕಣ್ಗಾವಲಿಗಾಗಿ ಅಳವಡಿಸಿರುವ ಸಿಸಿ ಟಿವಿ ಕ್ಯಾಮೆರಾಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ. ಶೇಖರಣಾ ದತ್ತಾಂಶ ಒಂದು ದಿನದ್ದಷ್ಟೇ ಇರುತ್ತದೆ ಎಂದು ಹಿಂದಿನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಅವರೇ ಸ್ಮಾರ್ಟ್ ಸಿಟಿ ಎಂ.ಡಿ.ಗೆ ಪತ್ರ ಬರೆದಿದ್ದರು. ಕಾಮಗಾರಿ ಟೆಂಡರ್ ಪಡೆದಿರುವ ಗುತ್ತಿಗೆದಾರರು ಕಾಮಗಾರಿಗಳನ್ನು ಕಳಪೆ ನಡೆಸಿದ್ದಾರೆ. ಅಲ್ಲದೇ ನಿಗದಿತ ಅವಧಿಯಲ್ಲಿ ಕೈಗೊಳ್ಳದಿದ್ದರೂ ಅವರ ವಿರುದ್ಧ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ. ಅಲ್ಲದೆ, ತಪ್ಪಿತಸ್ಥ ಗುತ್ತಿಗೆದಾರರಿಂದು ದಂಡ ವಸೂಲಿ ಮಾಡಿಲ್ಲ ಎಂದು ಆರೋಪಿಸಿದರು.

ADVERTISEMENT

ಸುದ್ದಿಗೋಷ್ಠಿಯಲ್ಲಿ ಬ್ರಿಗೇಡ್‍ನ ಕಾರ್ಯದರ್ಶಿ ಎ.ಎಸ್. ಪ್ರಭುಲಿಂಗಪ್ಪ, ಮಂಜುನಾಥ್ ನೆಲ್ಲಿ, ವಿಕಾಸ್ ಆರ್.ಎಚ್. ಅವರೂ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.