ADVERTISEMENT

ಫಲಾನುಭವಿಗಳಿಗೆ ಯೋಜನೆ ತಲುಪಿಸಿ: ಶಾಸಕ ಶಾಂತನಗೌಡ

​ಪ್ರಜಾವಾಣಿ ವಾರ್ತೆ
Published 1 ಜೂನ್ 2025, 16:30 IST
Last Updated 1 ಜೂನ್ 2025, 16:30 IST
ಹೊನ್ನಾಳಿ ತಾ.ಪಂ. ಕಚೇರಿಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಕಚೇರಿಯನ್ನು ಶಾಸಕ ಡಿ.ಜಿ. ಶಾಂತನಗೌಡ ಉದ್ಘಾಟಿಸಿದರು
ಹೊನ್ನಾಳಿ ತಾ.ಪಂ. ಕಚೇರಿಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಕಚೇರಿಯನ್ನು ಶಾಸಕ ಡಿ.ಜಿ. ಶಾಂತನಗೌಡ ಉದ್ಘಾಟಿಸಿದರು   

ಹೊನ್ನಾಳಿ: ಚುನಾವಣೆ ಪೂರ್ವದಲ್ಲಿ ಪಕ್ಷ ನೀಡಿದ್ದ 5 ಗ್ಯಾರಂಟಿಗಳನ್ನು ಸರ್ಕಾರ ಈಡೇರಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೊಟ್ಟ ಮಾತನ್ನು ಉಳಿಸಿಕೊಂಡಿದ್ದಾರೆ ಎಂದು ಶಾಸಕ ಡಿ.ಜಿ. ಶಾಂತನಗೌಡ ಹೇಳಿದರು.

ಶನಿವಾರ ತಾ.ಪಂ. ಆವರಣದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಕಚೇರಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಗೃಹಲಕ್ಷ್ಮಿ, ಯುವನಿಧಿ, ಗೃಹಜ್ಯೋತಿ, ಅನ್ನಭಾಗ್ಯ, ಹಾಗೂ ಶಕ್ತಿ ಯೋಜನೆಗಳ ಬಗ್ಗೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳೊಂದಿಗೆ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರು ಚರ್ಚಿಸಬೇಕು. ಜನರ ನಂಬಿಕೆ ಮತ್ತು ವಿಶ್ವಾಸಕ್ಕೆ ಧಕ್ಕೆ ಬಾರದ ರೀತಿಯಲ್ಲಿ ಯೋಜನೆಗಳನ್ನು ತಲುಪಿಸುವ ಕೆಲಸ ಮಾಡಬೇಕು ಎಂದು ಸೂಚಿಸಿದರು.

ADVERTISEMENT

ಜನರು ಪಕ್ಷದ ಮೇಲೆ ವಿಶ್ವಾಸವಿಟ್ಟು ಅಧಿಕಾರಕ್ಕೆ ತಂದಿದ್ದಾರೆ. ಈ ನಂಬಿಕೆಯನ್ನು ಉಳಿಸಿಕೊಂಡು ಜನರ ಆಶೋತ್ತರಗಳಿಗೆ ಸ್ಪಂದಿಸಬೇಕು ಎಂದು ಕಾಂಗ್ರೆಸ್ ಜಿಲ್ಲಾ ಘಟಕದ  ಅಧ್ಯಕ್ಷ ಎಚ್.ಬಿ. ಮಂಜಪ್ಪ ಹೇಳಿದರು. 

ತಾಲ್ಲೂಕಿನಲ್ಲಿ 36,275 ಮಹಿಳೆಯರು ಗೃಹಲಕ್ಷ್ಮಿ ಯೋಜನೆಗೆ ನೋಂದಣಿಯಾಗಿದ್ದು, ಈ ಪೈಕಿ 35,193 ಮಹಿಳೆಯರಿಗೆ ಪ್ರತಿ ತಿಂಗಳು ಹಣ ನೀಡಲಾಗುತ್ತಿದೆ. ಇದಕ್ಕಾಗಿ ₹7.38 ಕೋಟಿ ಮೊತ್ತ ವಿನಿಯೋಗಿಸಲಾಗುತ್ತಿದೆ. ಇನ್ನುಳಿದ 1,083 ಫಲಾನುಭಗಳಿಗೆ ಕೆವೈಸಿ ಸೇರಿದಂತೆ ಇತರೆ ತಾಂತ್ರಿಕ ಕಾರಣಗಳಿಂದ ಜಮಾ ಅಗುತ್ತಿಲ್ಲ. ಈ ಬಗ್ಗೆ ಕ್ರಮ ವಹಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿ ಜ್ಯೋತಿ ತಿಳಿಸಿದರು. 

ಯೋಜನೆಗಳ ಅನುಷ್ಠಾನದಲ್ಲಿ ಸಮಸ್ಯೆ ಕಂಡುಬಂದಲ್ಲಿ ಸದಸ್ಯರು ತಮ್ಮ ಗಮನಕ್ಕೆ ತಂದರೆ ಸರಿಪಡಿಸಲಾಗುವುದು ಎಂದು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಎ.ಗದ್ದಿಗೇಶ್ ಹೇಳಿದರು. 

ಉಪ ವಿಭಾಗಾಧಿಕಾರಿ ವಿ. ಅಭಿಷೇಕ್, ತಹಶೀಲ್ದಾರ್ ಪಟ್ಟರಾಜಗೌಡ, ತಾ.ಪಂ. ಅಧಿಕಾರಿ ಪ್ರಕಾಶ್, ಪುರಸಭೆ ಅಧ್ಯಕ್ಷ ಎ.ಕೆ. ಮೈಲಪ್ಪ ಉಪಸ್ಥಿತರಿದ್ದರು. ಸಮಿತಿಯ ನೂತನ ಸದಸ್ಯರಾದ ಎಚ್.ಬಿ.ಅಣ್ಣಪ್ಪ, ಶೇಖರಪ್ಪ, ರುದ್ರೇಶ್, ಫಯಾಜ್‍ಖಾನ್, ಕೃಷ್ಣಮೂರ್ತಿ ಎಸ್.ಎಚ್. ಎನ್.ಕೆ. ಬಸವರಾಜಪ್ಪ, ಆಶಾ, ಎಚ್.ಬಿ.ಪ್ರಶಾಂತ, ಕೃಷ್ಣಾಚಾರ್, ತಿಪ್ಪಳ್ಳಿ ರಂಗಪ್ಪ, ಶಿವಮೂರ್ತಿ, ಶೋಭ, ಮಂಜುನಾಥ ಅವರನ್ನು ಅಭಿನಂದಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.