ದಾವಣಗೆರೆ: ಸ್ವಾತಂತ್ರ್ಯ ದಿನಾಚರಣೆಯ ಪಥಸಂಚಲನದಲ್ಲಿ ಪೌರಕಾರ್ಮಿಕರು ಹಾಗೂ ಗ್ರಾಮ ಆಡಳಿತ ಅಧಿಕಾರಿಗಳು ಹೆಜ್ಜೆ ಹಾಕುವ ಮೂಲಕ ಇನ್ನಷ್ಟು ಆಕರ್ಷಣೀಯಗೊಳಿಸಲು ಜಿಲ್ಲಾಡಳಿತ ಮುಂದಾಗಿದೆ. ಇವರನ್ನು ಪಥಸಂಚಲನಕ್ಕೆ ಸಜ್ಜುಗೊಳಿಸುವಂತೆ ಸೂಚನೆ ನೀಡಿದೆ.
ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ ನಡೆದ 79ನೇ ಸ್ವಾತಂತ್ರ್ಯ ದಿನಾಚರಣೆಯ ಪೂರ್ವಭಾವಿ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಯಿತು.
‘ಸ್ವಾತಂತ್ರ್ಯ ದಿನಾಚರಣೆಯ ಪಥಸಂಚಲನದಲ್ಲಿ ಪೊಲೀಸ್, ಗೃಹ ರಕ್ಷಕದಳ, ಅಗ್ನಿಶಾಮಕ ದಳ, ಸೇವಾದಳ, ಎನ್‌ಸಿಸಿ ಹಾಗೂ ಶಾಲಾ–ಕಾಲೇಜು ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ. ಪ್ರಸಕ್ತ ವರ್ಷದ ಸ್ವಾತಂತ್ರ್ಯೋತ್ಸವವನ್ನು ವಿಭಿನ್ನವಾಗಿ ನಡೆಸಲು ಪೌರಕಾರ್ಮಿಕರು ಹಾಗೂ ಗ್ರಾಮ ಆಡಳಿತ ಅಧಿಕಾರಿಗಳಿಗೂ ಅವಕಾಶ ಕಲ್ಪಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ತಿಳಿಸಿದರು.
‘ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಆ.14 ಮತ್ತು 15ರಂದು ಸರ್ಕಾರಿ ಕಟ್ಟಡಗಳು ವಿದ್ಯುತ್ ದೀಪಾಲಂಕಾರದಲ್ಲಿ ಕಂಗೊಳಿಸಲಿವೆ. ಗ್ರಾಮ, ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದ ಸರ್ಕಾರಿ ಕಚೇರಿಗಳ ಮೇಲೆ ರಾಷ್ಟ್ರ ಧ್ವಜಾರೋಹಣವನ್ನು ತಪ್ಪದೇ ನೆರವೇರಿಸಬೇಕು’ ಎಂದು ಸೂಚನೆ ನೀಡಿದರು.
‘ಆ. 15 ರಂದು ಬೆಳಿಗ್ಗೆ 7.50 ಕ್ಕೆ ಜಿಲ್ಲಾಡಳಿತ ಭವನದ ಆವರಣದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಜಿಲ್ಲಾ ಕ್ರೀಡಾಂಗಣದಲ್ಲಿ ಬೆಳಿಗ್ಗೆ 9ಕ್ಕೆ ರಾಷ್ಟ್ರ ಧ್ವಜಾರೋಹಣ ನೆರವೇರಿಸುವರು. ಶಿಷ್ಟಾಚಾರ ಪಾಲನೆ, ವೇದಿಕೆ ನಿರ್ಮಾಣ, ಅಲಂಕಾರಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳಬೇಕು’ ಎಂದರು.
‘ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ಆಯೋಜಿಸಬೇಕು. ಸ್ವಾತಂತ್ರ್ಯೋತ್ಸವದಲ್ಲಿ ಪಾಲ್ಗೊಳ್ಳುವ ಸಾರ್ವಜನಿಕರಿಗೆ ಕುಡಿಯುವ ನೀರು, ಆಸನ ಸೇರಿ ಇತರ ವ್ಯವಸ್ಥೆ ಕಲ್ಪಿಸಬೇಕು. ಪ್ರತಿಯೊಬ್ಬರು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು’ ಎಂದು ಹೇಳಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್, ಪಾಲಿಕೆ ಆಯುಕ್ತೆ ರೇಣುಕಾ, ಉಪವಿಭಾಗಾಧಿಕಾರಿ ಸಂತೋಷ್ ಪಾಟೀಲ್, ನಗರಾಭಿವೃದ್ದಿ ಪ್ರಾಧಿಕಾರದ ಆಯುಕ್ತ ಹುಲಿಮನಿ ತಿಮ್ಮಣ್ಣ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.