ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್
– ಪ್ರಜಾವಾಣಿ ಚಿತ್ರ
ದಾವಣಗೆರೆ: ಮುಂದಿನ ಐದು ವರ್ಷಗಳಲ್ಲಿ ದೇಶದಲ್ಲಿ 10,023 ಹೊಸ ವೈದ್ಯಕೀಯ ಸೀಟುಗಳು ಲಭ್ಯವಾಗಲಿವೆ. ಇದಕ್ಕೆ ₹ 15,000 ಕೋಟಿ ಅನುದಾನ ಮಂಜೂರಾಗಿದ್ದು, ವೈದ್ಯಕೀಯ ಕ್ಷೇತ್ರ ಹೊಸ ಶಕ್ತಿ ಪಡೆಯಲಿದೆ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಅಭಿಪ್ರಾಯಪಟ್ಟರು.
ಇಲ್ಲಿನ ಜೆಜೆಎಂ ವೈದ್ಯಕೀಯ ಕಾಲೇಜಿನಲ್ಲಿ ಶನಿವಾರ ನಡೆದ ಸ್ನಾತಕೋತ್ತರ ವಿದ್ಯಾರ್ಥಿಗಳ ಪ್ರಥಮ ಘಟಿಕೋತ್ಸವದಲ್ಲಿ ಅವರು ಮಾತನಾಡಿದರು.
‘ಹೆಚ್ಚಳವಾಗಲಿರುವ ವೈದ್ಯಕೀಯ ಸೀಟುಗಳಲ್ಲಿ 5,023 ಎಂಬಿಬಿಎಸ್ ಹಾಗೂ 5,000 ಸ್ನಾತಕೋತ್ತರ ಸೀಟುಗಳಿವೆ. ಟೆಲಿಮೆಡಿಸಿನ್ ಮತ್ತು ಕೃತಕ ಬುದ್ಧಿಮತ್ತೆ ಭವಿಷ್ಯದ ವೈದ್ಯಕೀಯ ಸೇವೆಯ ಕೇಂದ್ರವಾಗಲಿವೆ. ವೈದ್ಯಕೀಯ ಕ್ಷೇತ್ರದಲ್ಲಿ ತಂತ್ರಜ್ಞಾನದ ಬಳಕೆ ಹೆಚ್ಚಾಗುತ್ತಿದೆ. ಹೊಸ ಸಂಶೋಧನೆಗಳು ನಡೆಯುತ್ತಿವೆ’ ಎಂದರು.
‘ವೈದ್ಯಕೀಯ ವೃತ್ತಿ ಕೇವಲ ಉದ್ಯೋಗವಲ್ಲ. ದಯೆ, ನಿಷ್ಠೆ ಮತ್ತು ನೈಪುಣ್ಯತೆಯ ಸೇವೆ. ವೈದ್ಯರಿಗೆ ಸಮಾಜದಲ್ಲಿ ಗೌರವದ ಸ್ಥಾನವಿದೆ. ಆತ್ಮಸಾಕ್ಷಿಗೆ ಬದ್ಧವಾಗಿ ಕೆಲಸ ಮಾಡಬೇಕು. ಮಾನವೀಯ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.
‘1965ರಲ್ಲಿ ಆರಂಭವಾದ ಜೆಜೆಎಂ ವೈದ್ಯಕೀಯ ಕಾಲೇಜು ವಿಶಿಷ್ಟ ಛಾಪು ಮೂಡಿಸಿದೆ. ವೈದ್ಯಕೀಯ ಶಿಕ್ಷಣ, ಸಂಶೋಧನೆ ಹಾಗೂ ಸಾಮಾಜಿಕ ಸೇವೆಯಲ್ಲಿ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿದೆ. ಗ್ರಾಮೀಣ, ನಗರ ಪ್ರದೇಶಗಳಲ್ಲಿ ಆರೋಗ್ಯ ಶಿಬಿರಗಳನ್ನು ನಡೆಸಿದೆ. ಕ್ಲಿನಿಕ್‌ಗಳನ್ನು ತೆರೆದು ಸಮಾಜ ಸೇವೆ ಮಾಡುತ್ತಿದೆ. ಅಂತರರಾಷ್ಟ್ರೀಯ ಮಟ್ಟದ ಸಂಶೋಧನಾ ಅವಕಾಶಗಳನ್ನು ಕಲ್ಪಿಸಿದೆ’ ಎಂದರು.
‘ಜೆಜೆಎಂ ವೈದ್ಯಕೀಯ ಕಾಲೇಜಿನಲ್ಲಿ ಪದವಿ ಪಡೆದ ವೈದ್ಯರು ರೋಗಿಗಳಿಗೆ ಆಶಾಕಿರಣವಾಗಬೇಕು. ಸಮಾಜಕ್ಕೆ ಸ್ಫೂರ್ತಿ ಮತ್ತು ರಾಷ್ಟ್ರಕ್ಕೆ ಆರೋಗ್ಯ ಭರವಸೆ ಆಗಬೇಕು. ಶ್ರೇಷ್ಠ ಹಾಗೂ ಮಾನವೀಯ ಮಾರ್ಗದಲ್ಲಿ ಸಾಗಬೇಕು’ ಎಂದು ಕಿವಿಮಾತು ಹೇಳಿದರು.
ಘಟಿಕೋತ್ಸವದಲ್ಲಿ 15 ವಿಭಾಗಗಳ 173 ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು.
ಮಣಿಪಾಲ್ ಆಸ್ಪತ್ರೆಗಳ ಅಧ್ಯಕ್ಷ ಡಾ.ಎಚ್. ಸುದರ್ಶನ ಬಲ್ಲಾಳ್, ಪ್ರಾಂಶುಪಾಲೆ ಡಾ.ಶುಕ್ಲಾ ಎಸ್.ಶೆಟ್ಟಿ, ಬಾಪೂಜಿ ವಿದ್ಯಾ ಸಂಸ್ಥೆಯ ಕಿರುವಾಡಿ ಗಿರಿಜಮ್ಮ, ಡಾ.ಬಕ್ಕಪ್ಪ, ಡಾ.ಶ್ರೀನಿವಾಸ್ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.