ADVERTISEMENT

ಗೌಡಗೊಂಡನಹಳ್ಳಿಯಿಂದ ಜಗಳೂರುವರೆಗೆ ರೈತರ ಪಾದಯಾತ್ರೆ

ಅರಣ್ಯ ಒತ್ತುವರಿ ತೆರವು ಕಾರ್ಯಾಚರಣೆ ವಿರೋಧಿಸಿ ರೈತರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 20 ಜನವರಿ 2025, 16:18 IST
Last Updated 20 ಜನವರಿ 2025, 16:18 IST
ಜಗಳೂರು ತಾಲ್ಲೂಕಿನ ಗೌಡಗೊಂಡನಹಳ್ಳಿ ಗ್ರಾಮದಲ್ಲಿ ಅರಣ್ಯ ಪ್ರದೇಶದಲ್ಲಿ ಉಳುಮೆ ಮಾಡುತ್ತಿರುವ ರೈತರಿಗೆ ಹಕ್ಕುಪತ್ರ ನೀಡಬೇಕು ಎಂದು ಒತ್ತಾಯಿಸಿ ರಾಜ್ಯ ರೈತ ಸಂಘದ ಅಧ್ಯಕ್ಷ ಹುಚ್ಚವ್ವನಹಳ್ಳಿ ಮಂಜುನಾಥ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು
ಜಗಳೂರು ತಾಲ್ಲೂಕಿನ ಗೌಡಗೊಂಡನಹಳ್ಳಿ ಗ್ರಾಮದಲ್ಲಿ ಅರಣ್ಯ ಪ್ರದೇಶದಲ್ಲಿ ಉಳುಮೆ ಮಾಡುತ್ತಿರುವ ರೈತರಿಗೆ ಹಕ್ಕುಪತ್ರ ನೀಡಬೇಕು ಎಂದು ಒತ್ತಾಯಿಸಿ ರಾಜ್ಯ ರೈತ ಸಂಘದ ಅಧ್ಯಕ್ಷ ಹುಚ್ಚವ್ವನಹಳ್ಳಿ ಮಂಜುನಾಥ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು   

ಜಗಳೂರು: ಅರಣ್ಯ ಒತ್ತುವರಿ ನೆಪದಲ್ಲಿ ತಾಲ್ಲೂಕಿನ ಗೌಡಗೊಂಡನಹಳ್ಳಿ ಗ್ರಾಮದಲ್ಲಿ ರೈತರನ್ನು ಒಕ್ಕಲೆಬ್ಬಿಸುವುದನ್ನು ನಿಲ್ಲಿಸಬೇಕು. ರೈತರಿಗೆ ಉಳುಮೆ ಮಡಲು ಅವಕಾಶ ನೀಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ (ಹುಚ್ಚವ್ವನಹಳ್ಳಿ ಮಂಜುನಾಥ್ ಬಣ)ದ ನೇತೃತ್ವದಲ್ಲಿ ರೈತರು ಸೋಮವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.

ತಾಲ್ಲೂಕಿನ ಗೌಡಗೊಂಡನಹಳ್ಳಿ ಗ್ರಾಮದಿಂದ ಪಾದಯಾತ್ರೆ ಹೊರಟ ಪ್ರತಿಭಟನಕಾರರು ಪಟ್ಟಣದ ಮಹಾತ್ಮ ಗಾಂಧಿ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿದರು. ಬಳಿಕ ಅಂಬೇಡ್ಕರ್ ವೃತ್ತದ ಮೂಲಕ ತಹಶೀಲ್ದಾರ್ ಕಚೇರಿಗೆ ತೆರಳಿ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.

ಗೌಡಗೊಂಡನಹಳ್ಳಿ ಗ್ರಾಮಕ್ಕೆ ಸಮೀಪದ 11.40 ಹೆಕ್ಟೇರ್‌ ಪ್ರದೇಶದಲ್ಲಿ ರೈತರು ಉಳುಮೆ ಮಾಡುತ್ತಿರುವುದನ್ನು ತಡೆದು ಒಕ್ಕಲೆಬ್ಬಿಸಲಾಗುತ್ತಿದೆ. ಆದರೆ, ಈ ಕುರಿತು ಪಿಸಿಸಿಎಫ್ ಕೋರ್ಟ್‌ನಲ್ಲಿ ವ್ಯಾಜ್ಯ ನಡೆಯುತ್ತಿದ್ದು, ರೈತರ ಪರವಾಗಿ ಅಗತ್ಯ ಸಾಕ್ಷ್ಯಾಧಾರಗಳನ್ನು ಸಲ್ಲಿಸಲಾಗಿದೆ. ಅರಣ್ಯ ಪ್ರದೇಶದಲ್ಲಿರುವ ರೈತರ ಜಮೀನಿನಲ್ಲಿ ನೆಡುತೋಪು ನಿರ್ಮಿಸುವ ನಿರ್ಧಾರ ಕೈಬಿಟ್ಟು, ಅರ್ಜಿಗಳನ್ನು ವಿಲೇವಾರಿ ಮಾಡಿ ಹಕ್ಕುಪತ್ರ ವಿತರಿಸಬೇಕು. ಇಲ್ಲದಿದ್ದರೆ ಜ.24ರಂದು ಅರಣ್ಯ ಇಲಾಖೆ ಅಧೀನ ಕಾರ್ಯದರ್ಶಿಗಳ ಬಳಿ ನಿಯೋಗ ತೆರಳಿ ತೀವ್ರ ಹೋರಾಟ ನಡೆಸಲಾಗುವುದು ಎಂದು ರೈತ ಸಂಘದ ಅಧ್ಯಕ್ಷ ಹುಚ್ಚವ್ವನಹಳ್ಳಿ ಮಂಜುನಾಥ್ ಎಚ್ಚರಿಸಿದರು.

ಮನವಿ ಸ್ವೀಕರಿಸಿ ತಹಶೀಲ್ದಾರ್ ಸೈಯದ್ ಕಲೀಂ ಉಲ್ಲಾ, ‘ಉಪವಿಭಾಗಾಧಿಕಾರಿ ಅವರ ನಿರ್ದೇಶನದಂತೆ ಅರಣ್ಯ ಇಲಾಖೆಯೊಂದಿಗೆ ಸಮನ್ವಯ ಸಾಧಿಸಿ ಅರಣ್ಯ ಒತ್ತುವರಿ ತೆರವಿಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ರೈತರ ಮನವಿಯನ್ನು ಸರ್ಕಾರಕ್ಕೆ ರವಾನಿಸಲಾಗುವುದು’ ಎಂದು ತಿಳಿಸಿದರು.

ವಲಯ ಅರಣ್ಯಾಧಿಕಾರಿ ಶ್ರೀನಿವಾಸ್, ರೈತ ಮುಖಂಡರಾದ ಕಾನನಕಟ್ಟೆ ತಿಪ್ಪೇಸ್ವಾಮಿ, ಚಿರಂಜೀವಿ ಸಿಎಂ ಹೊಳೆ, ರಾಜು, ಗೌಡಗೊಂಡನಹಳ್ಳಿ ಸತೀಶ್, ಲೋಕೇಶ್, ಮಾರಪ್ಪ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.