ದಾವಣಗೆರೆ: ಮಾದಕ ವಸ್ತುಗಳ ಸಾಗಣೆಯನ್ನು ಪತ್ತೆ ಮಾಡಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ಮತ್ತು ರೈಲ್ವೆ ನಿಲ್ದಾಣದಲ್ಲಿ ಸ್ಕ್ಯಾನರ್ ಅಳವಡಿಸಿ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶೆ ಡಿ.ಕೆ. ವೇಲಾ ಸೂಚನೆ ನೀಡಿದರು.
ಇಲ್ಲಿನ ಜಿಲ್ಲಾ ನ್ಯಾಯಾಲಯದಲ್ಲಿ ಬುಧವಾರ ಏರ್ಪಡಿಸಿದ್ದ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ದ್ವೈಮಾಸಿಕ ಸಭೆಯಲ್ಲಿ ಮಾದಕ ವಸ್ತು, ಪೋಕ್ಸೊ, ಭಿಕ್ಷಾಟನೆ ತಡೆ ಸೇರಿದಂತೆ ಬಾಲನ್ಯಾಯ ಕುರಿತು ಪ್ರಗತಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು.
‘ಮಾದಕ ವಸ್ತುವಿನಿಂದ ಯುವ ಸಮೂಹವನ್ನು ದೂರ ಇಡಬೇಕಿದೆ. ಮಾದಕವಸ್ತು ಸಾಗಣೆ ಮತ್ತು ಮಾರಾಟದ ಮೇಲೆ ತೀವ್ರ ನಿಗಾ ಇಡುವ ಅಗತ್ಯವಿದೆ. ಇದಕ್ಕೆ ಕಟ್ಟುನಿಟ್ಟಿನ ಕ್ರಮ ಜರುಗಿಸುವುದು ಅನಿವಾರ್ಯವಾಗಿದೆ’ ಎಂದು ಹೇಳಿದರು.
ಸ್ಕ್ಯಾನರ್ ಅಳವಡಿಕೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಅವರೊಂದಿಗೆ ಚರ್ಚೆ ನಡೆಸಿದರು. ‘ಅಗತ್ಯ ಅನುದಾನ ಒದಗಿಸಿ ಸಾಧನ ಅಳವಡಿಕೆಗೆ ಕ್ರಮ ಕೈಗೊಳ್ಳುವುದಾಗಿ’ ಜಿಲ್ಲಾಧಿಕಾರಿ ಭರವಸೆ ನೀಡಿದರು.
‘ಬಾಲ್ಯ ವಿವಾಹ ಮತ್ತು ಪೋಕ್ಸೊ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಜಿಲ್ಲೆಯಲ್ಲಿ 18 ಪೋಕ್ಸೊ ಪ್ರಕರಣ ದಾಖಲಾಗಿವೆ. ದಾವಣಗೆರೆ ತಾಲ್ಲೂಕಿನಲ್ಲಿ 9, ಹರಿಹರ 1, ಹೊನ್ನಾಳಿ 2, ಚನ್ನಗಿರಿ 6 ಪ್ರಕರಣ ದಾಖಲಾಗಿವೆ. ವಿದ್ಯಾರ್ಥಿಗಳಲ್ಲಿ ಈ ಕುರಿತು ಜಾಗೃತಿ ಮೂಡಿಸುವ ಕೆಲಸ ನಿರಂತರವಾಗಿ ಮಾಡಬೇಕಾಗಿದೆ’ ಎಂದು ಶಿಕ್ಷಣ ಇಲಾಖೆಗೆ ಸೂಚಿಸಿದರು.
‘ಹಾಸ್ಟೆಲ್‌ನಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಶಿಕ್ಷಣ ಮುಂದುವರಿಸಿರುವುದನ್ನು ಅಧಿಕಾರಿಗಳು ಖಚಿತಪಡಿಸಿಕೊಳ್ಳಬೇಕು. ವಿದ್ಯಾರ್ಥಿನಿಯರು ಶಿಕ್ಷಣ ಮುಂದುವರಿಸಿ ಅಥವಾ ಉದ್ಯೋಗಕ್ಕೆ ಸೇರಿದ ಕುರಿತು ಮಾಹಿತಿ ಸಂಗ್ರಹಿಸಬೇಕು’ ಎಂದು ಹೇಳಿದರು.
ಬಾಲ ಭವನ, ಸಂಘರ್ಷಕ್ಕೆ ಒಳಗಾಗಿರುವ ಮಕ್ಕಳ ಪೋಷಣೆ ಕೈಗೊಂಡಿರುವ ಕ್ರಮ, ನಿರಾಶ್ರಿತ ಪರಿಹಾರ ಕೇಂದ್ರದಲ್ಲಿನ ನಿವಾಸಿಗಳ ಕುಟುಂಬಸ್ಥರ ಪತ್ತೆ ಕುರಿತು ಮಾಹಿತಿ ಪಡೆದರು. ಪೋಷಕರನ್ನು ನೋಡಿಕೊಳ್ಳದವರ ವಿರುದ್ಧ ಹಿರಿಯ ನಾಗರಿಕರ ಕಾಯ್ದೆಯಡಿ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಕರೆಣ್ಣವರ, ಹೆಚ್ಚುವರಿ ಜಿಲ್ಲಾಧಿಕಾರಿ ಪಿ.ಎನ್. ಲೋಕೇಶ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಜಿ.ಮಂಜುನಾಥ್, ವಕೀಲರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎಲ್.ಎಚ್. ಅರುಣ್‍ಕುಮಾರ್, ಕಾರ್ಯದರ್ಶಿ ಬಸವರಾಜ್, ಸರ್ಕಾರಿ ವಕೀಲ ಶಾಮನೂರು ಪ್ರಕಾಶ್ ಹಾಜರಿದ್ದರು.
ಜುಲೈ 12 ಕ್ಕೆ ಲೋಕ ಅದಾಲತ್
ರಾಜಿಯಾಗಬಲ್ಲ ಪ್ರಕರಣಗಳ ಇತ್ಯರ್ಥಕ್ಕೆ ಜುಲೈ 12ರಂದು ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶೆ ಡಿ.ಕೆ. ವೇಲಾ ತಿಳಿಸಿದರು. ‘ಲೋಕ ಅದಾಲತ್‌ಗೆ ಎಲ್ಲ ಇಲಾಖೆಗಳು ಸಹಕಾರ ನೀಡಬೇಕು. ತಮ್ಮ ವ್ಯಾಪ್ತಿಯ ಪ್ರಕರಣಗಳನ್ನು ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಒಲವು ತೋರಬೇಕು. ಕಕ್ಷಿದಾರರಿಗೆ ಶೀಘ್ರ ನ್ಯಾಯದಾನ ನೀಡಲು ಸಹಕರಿಸಬೇಕು’ ಎಂದು ಹೇಳಿದರು.
ಶ್ರೀರಾಮನಗರದ ಬಿಸಿಎಂ ಹಾಸ್ಟೆಲ್‍ಗೆ ರಾತ್ರಿ ವೇಳೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲಿಸಿದೆ. ವಾರ್ಡನ್ ಕರ್ತವ್ಯಲೋಪ ಎಸಗಿದ್ದು ಗಮನಕ್ಕೆ ಬಂದಿದೆ. ಇಂತಹ ತಪ್ಪುಗಳು ಪುನರಾವರ್ತನೆ ಆಗಬಾರದು-ಗಿಟ್ಟೆ ಮಾಧವ ವಿಠ್ಠಲರಾವ್, ಸಿಇಒ ಜಿಲ್ಲಾ ಪಂಚಾಯಿತಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.