
ದಾವಣಗೆರೆ: ರಾಜ್ಯದಲ್ಲಿ ನಿತ್ಯ ಸರಾಸರಿ 12 ಪೋಕ್ಸೊ ಪ್ರಕರಣ ದಾಖಲಾಗುತ್ತಿವೆ. ಜಿಲ್ಲೆಯಲ್ಲಿ ನವೆಂಬರ್ ಅಂತ್ಯದವರೆಗೆ 154 ಪ್ರಕರಣಗಳು ದಾಖಲಾಗಿವೆ. ಇವುಗಳಲ್ಲಿ ಬಹುತೇಕವು ಪ್ರೇಮ ಸಂಬಂಧಿತ ಪ್ರಕರಣಗಳಾಗಿವೆ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯೆ ಅಪರ್ಣ ಎಂ.ಕೊಳ್ಳ ಹೇಳಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಪೊಲೀಸ್ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದೊಂದಿಗೆ ಶುಕ್ರವಾರ ಏರ್ಪಡಿಸಿದ್ದ ವಿಶೇಷ ಅರಿವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
‘ಪೋಕ್ಸೊ ಮತ್ತು ಬಾಲ್ಯವಿವಾಹ ತಡೆಗಟ್ಟುವ ನಿಟ್ಟಿನಲ್ಲಿ ಇಲಾಖೆಗಳ ನಡುವೆ ಸಮನ್ವಯದ ಕೊರತೆ ಇದೆ. ಮಾರ್ಚ್, ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಶಾಲೆಗಳಿಗೆ ರಜೆ ಇರುವ ಕಾರಣ ಬಾಲ್ಯವಿವಾಹಗಳು ಹೆಚ್ಚಾಗಿ ನಡೆಯುವ ಸಾಧ್ಯತೆ ಇದೆ. ಈ ಅವಧಿಯಲ್ಲಿ ಬಾಲ್ಯವಿವಾಹ ತಡೆಗಟ್ಟಲು ಎಲ್ಲಾ ಇಲಾಖೆಗಳು ಹೆಚ್ಚಿನ ನಿಗಾವಹಿಸಬೇಕು’ ಎಂದರು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಮಹಾವೀರ ಕರೆಣ್ಣನವರ, ‘ಮಕ್ಕಳು ದೇಶದ ಆಸ್ತಿ. ಅವರ ಆರೋಗ್ಯ ಮತ್ತು ಶಿಕ್ಷಣದ ವಿಷಯದಲ್ಲಿ ರಾಜಿ ಸಲ್ಲದು. ಸರ್ಕಾರಿ ಸೌಲಭ್ಯಗಳು ಮಕ್ಕಳಿಗೆ ತಲುಪುವಂತೆ ನೋಡಿಕೊಳ್ಳುವುದು ಪ್ರತಿಯೊಬ್ಬ ಅಧಿಕಾರಿಯ ಕರ್ತವ್ಯ’ ಎಂದರು.
ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಟಿ. ಶೇಖರ್, ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕಿ ರೇಷ್ಮಾ ಕೌಸರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ರಾಜಾ ನಾಯ್ಕ, ಡಿಡಿಪಿಐ ಜಿ. ಕೊಟ್ರೇಶ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಷಣ್ಮುಖಪ್ಪ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕವಿತಾ ಟಿ.ಎನ್ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.