ADVERTISEMENT

ದಾವಣಗೆರೆ: ನ್ಯಾಮತಿಯಲ್ಲಿ ಬಸ್‌– ಕಾರು ಡಿಕ್ಕಿ, ಮೂವರು ಮಹಿಳೆಯರ ಸಾವು

​ಪ್ರಜಾವಾಣಿ ವಾರ್ತೆ
Published 17 ಡಿಸೆಂಬರ್ 2021, 8:30 IST
Last Updated 17 ಡಿಸೆಂಬರ್ 2021, 8:30 IST
ಅಪಘಾತದಲ್ಲಿ ನಜ್ಜುಗುಜ್ಜಾಗಿರುವ ವಾಹನಗಳು
ಅಪಘಾತದಲ್ಲಿ ನಜ್ಜುಗುಜ್ಜಾಗಿರುವ ವಾಹನಗಳು   

ನ್ಯಾಮತಿ (ದಾವಣಗೆರೆ ಜಿಲ್ಲೆ): ತಾಲ್ಲೂಕಿನ ಸವಳಂಗ–ಶಿವಮೊಗ್ಗ ಹೆದ್ದಾರಿಯಲ್ಲಿ ಶುಕ್ರವಾರ ಬೆಳಿಗ್ಗೆ ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಮೂವರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕಿನ ಎಡೆಹಳ್ಳಿ ಗ್ರಾಮದ ಶಾರದಮ್ಮ (70), ಸುಮಾ (50) ಹಾಗೂ ಆಶಾ (40) ಮೃತಪಟ್ಟಿದ್ದಾರೆ. ತೀವ್ರವಾಗಿ ಗಾಯಗೊಂಡಿರುವ ಕಾರಿನ ಚಾಲಕ ಹಾಗೂ ಮತ್ತೊಬ್ಬ ಮಹಿಳೆಯನ್ನು ಶಿವಮೊಗ್ಗದ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ.

ನ್ಯಾಮತಿ ತಾಲ್ಲೂಕಿನ ಹಳೆ ಜೋಗದಲ್ಲಿ ನಡೆಯಲಿದ್ದ ಮದುವೆಯ ಆರತಕ್ಷತೆಗೆ ಕಾರಿನಲ್ಲಿ ತೆರಳುತ್ತಿದ್ದರು. ಶಿಕಾರಿಪುರದಿಂದ ಶಿವಮೊಗ್ಗಕ್ಕೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಕಾರು ಮುಖಾಮುಖಿಯಾಗಿ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

ಅಪಘಾತದ ಪರಿಣಾಮ ಹೆದ್ದಾರಿಯಲ್ಲಿ ಸುಮಾರು ಒಂದು ಗಂಟೆ ಕಾಲ ವಾಹನ ಸಂಚಾರಕ್ಕೆ ತೊಂದರೆಯಾಗಿತ್ತು. ಸಿಪಿಐ ಟಿ.ವಿ. ದೇವರಾಜು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.