ಹೊನ್ನಾಳಿ: ತಾಲ್ಲೂಕಿನಾದ್ಯಂತ ಹದ ಮಳೆಯಾಗುತ್ತಿದ್ದು, ರೈತರಿಗೆ ಉತ್ತಮ ಗುಣಮಟ್ಟದ ಕೃಷಿ ಪರಿಕರಗಳನ್ನು ಮಾರಾಟ ಮಾಡಬೇಕು ಎಂದು ಹೊನ್ನಾಳಿ ಉಪವಿಭಾಗದ ಉಪ ಕೃಷಿ ನಿರ್ದೇಶಕ ರೇವಣಸಿದ್ದನಗೌಡ ಹೇಳಿದರು.
ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಕೃಷಿ ಪರಿಕರ ದಾಸ್ತಾನು ವಿತರಣೆ ಕುರಿತು ತರಬೇತಿ ಹಾಗೂ ಸುರಕ್ಷಿತ ಕೀಟ ನಾಶ ಬಳಕೆ ಮತ್ತು ಬೀಜೋಪಚಾರ ಆಂದೋಲನ ಕಾರ್ಯಕ್ರಮವನ್ನು ಸೋಮವಾರ ಉದ್ಗಾಟಿಸಿ ಮಾತನಾಡಿದರು.
‘ಸರಿಯಾದ ಕ್ರಮದಲ್ಲಿ ಅಗತ್ಯ ದಾಖಲೆಗಳನ್ನು ನಿರ್ವಹಿಸಿ ಕೃಷಿ ಪರಿಕರಗಳ ವ್ಯವಹಾರ ಮಾಡಬೇಕು, ಒಂದು ವೇಳೆ ಕಾನೂನು ಬಾಹಿರವಾಗಿ ರಸಗೊಬ್ಬರ ಮತ್ತು ಬಿತ್ತನೆ ಬೀಜಗಳನ್ನು ಮಾರಾಟ ಮಾಡಿದರೆ ಅಂತಹ ಮಾರಾಟಗಾರರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಜೊತೆಗೆ ಪರವಾನಗಿಯನ್ನು ರದ್ದುಪಡಿಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.
ಸಹಾಯಕ ಕೃಷಿ ನಿರ್ದೇಶಕ ಬಿ.ಎನ್. ವಿಶ್ವನಾಥ್, ‘ಉತ್ತಮ ಗುಣಮಟ್ಟದ ಬಿತ್ತನೆ ಬೀಜ, ಕೀಟನಾಶಕ ಮತ್ತು ರಸಗೊಬ್ಬರಗಳನ್ನು ರೈತರಿಗೆ ನಿಗದಿತ ಬೆಲೆಯಲ್ಲಿ ಸಕಾಲಕ್ಕೆ ಪೂರೈಸಬೇಕು. ರಸಗೊಬ್ಬರ ಬಳಕೆಯ ಮಹತ್ವವನ್ನು ರೈತರಿಗೆ ತಿಳಿಸಬೇಕು’ ಎಂದು ಕೃಷಿ ಪರಿಕರ ಮಾರಾಟಗಾರರಿಗೆ ಸೂಚನೆ ನೀಡಿದರು.
ಕೃಷಿ ಇಲಾಖೆ ಜಾರಿ ದಳ ಸಹಾಯಕ ಕೃಷಿ ನಿರ್ದೇಶಕ ಗೋವರ್ಧನ್, ಕೃಷಿ ಪರಿಕರ ಮಾರಾಟಗಾರರಿಗೆ ಬಿತ್ತನೆ ಬೀಜ, ಕೀಟನಾಶಕ ಮತ್ತು ರಸಗೊಬ್ಬರ ಕಾಯ್ದೆ ಬಗ್ಗೆ ಅರಿವು ಮೂಡಿಸುವ ಉಪನ್ಯಾಸ ನೀಡಿದರು.
ಹೊನ್ನಾಳಿ ಹಾಗೂ ನ್ಯಾಮತಿ ತಾಲ್ಲೂಕಿನ ಕೃಷಿ ಪರಿಕರ ಮಾರಾಟಗಾರರ ಸಂಘದ ಅಧ್ಯಕ್ಷ ಪುಟ್ಟಣ್ಣ ಹಾಗೂ ವಾಗೀಶ್ ಮಾತನಾಡಿದರು. ಹೊನ್ನಾಳಿ, ನ್ಯಾಮತಿ ತಾಲ್ಲೂಕಿನ ಕೃಷಿ ಅಧಿಕಾರಿಗಳು, ಸಿಬ್ಬಂದಿ ವರ್ಗ ಹಾಗೂ ರೈತರು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.