ADVERTISEMENT

ನೈಜ ಕಾರ್ಮಿಕರಿಗೆ ನೆರವು ತಲುಪಲಿ: ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ

ಅಸಂಘಟಿತ ವಲಯದ ಕಾರ್ಮಿಕರಿಗೆ ಪರಿಹಾರ ನೀಡುವ ಬಗೆಗಿನ ಪೂರ್ವ ಪರಿಶೀಲನಾ ಸಭೆಯಲ್ಲಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ

​ಪ್ರಜಾವಾಣಿ ವಾರ್ತೆ
Published 16 ಜೂನ್ 2021, 5:27 IST
Last Updated 16 ಜೂನ್ 2021, 5:27 IST
ಮಹಾಂತೇಶ ಬೀಳಗಿ
ಮಹಾಂತೇಶ ಬೀಳಗಿ   

ದಾವಣಗೆರೆ: ಕೋವಿಡ್ 2ನೇ ಅಲೆ ಬಂದು ಲಾಕ್‍ಡೌನ್ ಘೋಷಣೆ ಮಾಡಿರುವುದರಿಂದ ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿರುವ ವಿವಿಧ ವಲಯದ ಅಸಂಘಟಿತ ಕಾರ್ಮಿಕರಿಗೆ ರಾಜ್ಯ ಸರ್ಕಾರವು ₹ 2 ಸಾವಿರ ನೆರವು ಘೋಷಿಸಿದೆ. ನೆರವು ಪಡೆಯಲು ಕಾರ್ಮಿಕ ಇಲಾಖೆ ಮಾರ್ಗಸೂಚಿ ಪ್ರಕಟಿಸಿದೆ. ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನವಾಗಿದೆ. ಸಂಕಷ್ಟದಲ್ಲಿರುವ ನೈಜ ಫಲಾನುಭವಿಗಳು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಅಸಂಘಟಿತ ವಲಯದ ಕಾರ್ಮಿಕರಿಗೆ ಪರಿಹಾರ ನೀಡುವ ಕುರಿತು ಪೂರ್ವಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಸರ್ಕಾರದ ಮಾರ್ಗಸೂಚಿಯಂತೆ ಅಗಸರು, ಕ್ಷೌರಿಕರು, ಟೈಲರ್‌ಗಳು, ಹಮಾಲಿಗಳು, ಚಿಂದಿ ಆಯುವವರು, ಕುಂಬಾರರು, ಭಟ್ಟಿ ಕಾರ್ಮಿಕರು, ಅಕ್ಕಸಾಲಿಗರು, ಮೆಕ್ಯಾನಿಕ್‌ಗಳು, ಕಮ್ಮಾರರು ಹಾಗೂ ಗೃಹ ಕಾರ್ಮಿಕರು ಈ 11 ವಲಯಗಳ ವೃತ್ತಿಯಲ್ಲಿ ತೊಡಗಿರುವ ಅಸಂಘಟಿತ ಕಾರ್ಮಿಕರಿಗೆ ಯೋಜನೆಯ ಮೂಲಕ ಒಂದು ಬಾರಿ ಪರಿಹಾರ ನೀಡಲಾಗುತ್ತದೆ ಎಂದರು.

ADVERTISEMENT

2020ನೇ ಸಾಲಿನ ಕೋವಿಡ್ ಲಾಕ್‍ಡೌನ್ ಸಂದರ್ಭದಲ್ಲಿ ಆರ್ಥಿಕ ನೆರವು ಪಡೆದ ಫಲಾನುಭವಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇಲ್ಲ. ಈ ಸಾಲಿನಲ್ಲಿ ನೆರವು ಪಡೆಯದ ಕುಟುಂಬದ ಒಬ್ಬ ಕಾರ್ಮಿಕ ಪರಿಹಾರಕ್ಕೆ ಅರ್ಜಿ ಸಲ್ಲಿಸಬಹುದು. ಅರ್ಜಿ ನೀಡಲು ಹಾಗೂ ಸಲ್ಲಿಸಲು ನಗರದಲ್ಲಿ ಪ್ರತ್ಯೇಕವಾಗಿ ವಿಶೇಷ ಕೌಂಟರ್ ಸ್ಥಾಪಿಸಬೇಕು. ಅಗತ್ಯ ಸಿಬ್ಬಂದಿಯನ್ನು ಇದಕ್ಕಾಗಿಯೇ ನೇಮಿಸಿ, ಜನರಿಗೆ ತೊಂದರೆಯಾಗದಂತೆ ಉದ್ಯೋಗ ಪ್ರಮಾಣ ಪತ್ರ ಕೊಡಬೇಕು ಎಂದು ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ತಿಳಿಸಿದರು.

ನಗರದಲ್ಲಿ ಮೂರು ಕಡೆ ವಿಶೇಷವಾಗಿ ಕೌಂಟರ್ ಸ್ಥಾಪಿಸಲಾಗಿದೆ. ರಾಜೀವ್ ಗಾಂಧಿ ನಗರ, ಮಹಾನಗರಪಾಲಿಕೆ ಕಾರ್ಯಾಲಯ ಹಾಗೂ ಶಾಮನೂರು ರಸ್ತೆಯಲ್ಲಿರುವ ಆಶ್ರಯ ರಸ್ತೆ ಪಕ್ಕದಲ್ಲಿ ಒಂದು ಕಚೇರಿಯನ್ನು ತೆರೆಯಲಾಗಿದೆ ಎಂದು ಪಾಲಿಕೆ ಆಯುಕ್ತ ವಿಶ್ವನಾಥ ಪಿ. ಮುದಜ್ಜಿ ತಿಳಿಸಿದರು.

ಕಟ್ಟಡ ಕಾರ್ಮಿಕರಿಗೆ ಈ ಯೋಜನೆಯಡಿ ಅವಕಾಶ ಇರುವುದಿಲ್ಲ. ಅವರಿಗಾಗಿ ಪ್ರತ್ಯೇಕ ಯೋಜನೆ ಇದೆ. ಅದನ್ನು ಸದುಪಯೋಗಪಡಿಸಿಕೊಳ್ಳಬೇಕು. ಒಂದು ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಮಂದಿ ವೃತ್ತಿಯಲ್ಲಿ ತೊಡಗಿದಲ್ಲಿ ಒಬ್ಬರು ಮಾತ್ರ ಪರಿಹಾರ ಪಡೆಯಲು ಅರ್ಹರಿರುತ್ತಾರೆ. ಒಂದು ಬಿಪಿಎಲ್ ಕಾರ್ಡ್‌ಗೆ ಒಬ್ಬರಿಗೆ ಮಾತ್ರ ಅವಕಾಶ ಎಂದು ಜಿಲ್ಲಾಧಿಕಾರಿ ಹೇಳಿದರು.

ಜಿಲ್ಲೆಯಲ್ಲಿ ಅಂಬೇಡ್ಕರ್ ಸಹಾಯ ಹಸ್ತ ಯೋಜನೆಯಲ್ಲಿ ಜೂನ್‌ 8ರ ವರೆಗೆ 7,306 ಅಸಂಘಟಿತ ಕಾರ್ಮಿಕರು ನೋಂದಾಯಿಸಿಕೊಂಡಿದ್ದಾರೆ. ಅವರು ಪ್ರತ್ಯೇಕವಾಗಿ ಅರ್ಜಿ ಸಲ್ಲಿಸುವ ಅವಶ್ಯಕತೆಯಿರುವುದಿಲ್ಲ. ಅವರ ಖಾತೆಗೆ ನೇರವಾಗಿ ಪರಿಹಾರವನ್ನು ಜಮಾ ಮಾಡಲಾಗುತ್ತದೆ. ಸೇವಾ ಸಿಂಧು ಪೋರ್ಟಲ್‍ನಲ್ಲಿ ಜಿಲ್ಲೆಗೆ ಸಂಬಂಧಿಸಿದಂತೆ ಜೂನ್‌ 13 ರವರೆಗೆ 6452 ಅರ್ಜಿಗಳು ಸ್ವೀಕೃತಗೊಂಡಿರುತ್ತವೆ ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ಜಿ. ಇಬ್ರಾಹಿಂ ಸಾಬ್ ಮಾಹಿತಿ ನೀಡಿದರು.

ಜಿಲ್ಲಾ ಪಂಚಾಯಿತಿ ಸಿಇಒ ಡಾ.ವಿಜಯ ಮಹಾಂತೇಶ ದಾನಮ್ಮನವರ್, ನಗರಾಭಿವೃದ್ಧಿ ಇಲಾಖೆ ಯೋಜನಾ ನಿರ್ದೇಶಕಿ ನಜ್ಮಾ ಜಿ., ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ರೇಷ್ಮಾ ಕೌಸರ್, ಹರಿಹರ ನಗರಸಭೆ ಪೌರಾಯುಕ್ತೆ ಲಕ್ಷ್ಮೀ ಎಸ್., ಎಪಿಎಂಸಿ ಕಾರ್ಯದರ್ಶಿ ಕೆ.ಸಿ. ದೊರೆಸ್ವಾಮಿ, ಕೃಷಿ ಮಾರಾಟ ಇಲಾಖೆ ಸಹಾಯಕ ನಿರ್ದೇಶಕ ಜೆ. ಪ್ರಭು ಅವರೂ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.