ADVERTISEMENT

ಲಿಂಗಾಯತ ಧರ್ಮ ಮಾನ್ಯತೆಗಾಗಿ ಸುಪ್ರೀಂ ಕೋರ್ಟ್‌ಗೆ: ಜಯಮೃತ್ಯುಂಜಯ ಸ್ವಾಮೀಜಿ

​ಪ್ರಜಾವಾಣಿ ವಾರ್ತೆ
Published 16 ಡಿಸೆಂಬರ್ 2018, 13:15 IST
Last Updated 16 ಡಿಸೆಂಬರ್ 2018, 13:15 IST
   

ದಾವಣಗೆರೆ: ಪ್ರತ್ಯೇಕ ಲಿಂಗಾಯತ ಧರ್ಮದ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮೊರೆಹೋಗಲು ಚಿಂತನೆ ನಡೆಸಲಾಗುತ್ತಿದೆ ಎಂದು ಕೂಡಲಸಂಗಮ ಪಂಚಮಸಾಲಿ ಗುರುಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು.

‘ರಾಜ್ಯ ಸರ್ಕಾರದ ಪ್ರಸ್ತಾವವನ್ನು ಕೇಂದ್ರ ಸರ್ಕಾರ ಈಗಾಗಲೇ ತಿರಸ್ಕರಿಸಿದೆ. ಇದು ಪ್ರಧಾನಿ ನರೇಂದ್ರ ಮೋದಿ ಅವರಿಗೂ ಗೊತ್ತಿಲ್ಲ. ಚಳಿಗಾಲದ ಅಧಿವೇಶನದಲ್ಲಿ ಈ ಪ್ರಸ್ತಾವವನ್ನು ಪುನರ್‌ ಪರಿಶೀಲಿಸುವುದಾಗಿ ಕೇಂದ್ರ ಧಾರ್ಮಿಕ ಸಚಿವರು ಭರವಸೆ ನೀಡಿದ್ದಾರೆ. ಅವರು ಹೇಳಿದಂತೆ ನಡೆದುಕೊಳ್ಳದಿದ್ದರೆ ಮತ್ತೆ ಹೋರಾಟ ಮಾಡಲಾಗುವುದು’ ಎಂದು ಸುದ್ದಿಗಾರರಿಗೆ ಭಾನುವಾರ ತಿಳಿಸಿದರು.

‘ಲಿಂಗಾಯತ ಧರ್ಮ ಮಾನ್ಯತೆ ಪ್ರಸ್ತಾವ ತಿರಸ್ಕರಿಸಲು ಕೇಂದ್ರ ಸರ್ಕಾರ ನೀಡಿರುವ ಕಾರಣ ವಿಚಿತ್ರವಾಗಿದೆ. ನಮ್ಮ ಹೋರಾಟ ನಿಲ್ಲಲ್ಲ. ಜೈನರು ಸುಪ್ರೀಂ ಕೋರ್ಟ್ ಮೊರೆಹೋಗಿ ನ್ಯಾಯ ಪಡೆದುಕೊಂಡಂತೆ ನಾವೂ ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸುತ್ತೇವೆ. ಪ್ರತ್ಯೇಕ ಧರ್ಮದ ಮಾನ್ಯತೆ ಪಡೆಯುತ್ತೇವೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ADVERTISEMENT

ಸುಪ್ರೀಂ ಕೋರ್ಟ್‌ನಲ್ಲೂ ತಿರಸ್ಕೃತವಾಗಲಿದೆ: ಶಾಮನೂರು

ಸ್ವತಂತ್ರ ಧರ್ಮದ ವಿಚಾರವಾಗಿ ಸುಪ್ರೀಂ ಕೋರ್ಟ್‌ಗೆ ಹೋದರೂ ಈಗ ಏನಾಗಿದೆಯೋ ಅದೇ ಆಗಲಿದೆ ಎಂದು ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಪ್ರತಿಕ್ರಿಯಿಸಿದರು.

ನಗರದಲ್ಲಿ ಸುದ್ದಿಗಾರರ ಜತೆಗೆ ಅವರು ಮಾತನಾಡಿ, ‘ವೀರಶೈವ ಲಿಂಗಾಯತ ಎಂಬ ಸ್ಥಾನಮಾನ ನೀಡುವುದನ್ನು ನಾವು ವಿರೋಧಿಸಿಲ್ಲ. ಬಡವರ ಶಿಕ್ಷಣದ ಹಿತದೃಷ್ಟಿಯಿಂದ ಸ್ವತಂತ್ರ ಧರ್ಮವಾಗಬೇಕು. ಅದು ಶಾಂತಿಯುತ ಹೋರಾಟದಿಂದ ಸಾಧ್ಯವಾಗಬೇಕು. ಆದರೆ, ವೀರಶೈವ ಬೇರೆ, ಲಿಂಗಾಯತ ಬೇರೆ ಎಂದು ಅವರು ಬೊಬ್ಬೆ ಹೊಡೆಯುತ್ತಿದ್ದಾರೆ. ಅದಕ್ಕೆ ನಮ್ಮ ವಿರೋಧವಿದೆ’ ಎಂದು ಸ್ಪಷ್ಟಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.