ADVERTISEMENT

ದಾವಣಗೆರೆ | ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪ್ರತಿಭಟನೆ

ಮಾದಿಗ ಸಮುದಾಯದ ಸಂಘಟನೆಗಳ ಒಗ್ಗಟ್ಟಿನ ಹೋರಾಟ, ಅಣಕು ಶವಯಾತ್ರೆ ನಡೆಸಿ ಆಕ್ರೋಶ

​ಪ್ರಜಾವಾಣಿ ವಾರ್ತೆ
Published 2 ಆಗಸ್ಟ್ 2025, 7:13 IST
Last Updated 2 ಆಗಸ್ಟ್ 2025, 7:13 IST
   

ದಾವಣಗೆರೆ: ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಸೌಲಭ್ಯವನ್ನು ತಕ್ಷಣ ಜಾರಿಗೆ ತರಬೇಕು ಎಂದು ಆಗ್ರಹಿಸಿ ಮಾದಿಗ ಸಮುದಾಯದ ಸಂಘಟನೆಗಳು ಶುಕ್ರವಾರ ಪ್ರತಿಭಟನೆ ನಡೆಸಿದವು. ರಾಜ್ಯ ಸರ್ಕಾರ ವಿಳಂಬ ನೀತಿ ಮುಂದುವರಿಸಿದರೆ ಹೋರಾಟ ತೀವ್ರ ಸ್ವರೂಪ ಪಡೆಯಲಿದೆ ಎಂಬ ಎಚ್ಚರಿಕೆ ನೀಡಿದವು.

ಮಾದಿಗ ಒಳಮೀಸಲಾತಿ ಹೋರಾಟ ಸಮಿತಿ, ಮಾದಿಗ ದಲಿತ ಸಂಘಟನೆಗಳ ಒಕ್ಕೂಟ, ಮಾದಿಗ ಮಹಾಸಭಾ ಕ್ಷೇಮಾಭಿವೃದ್ಧಿ ಸಂಘ, ಭೀಮ್‌ ಆರ್ಮಿ, ದಲಿತ ಸಂರಕ್ಷಣಾ ಸಮಿತಿ ಸೇರಿದಂತೆ ಹಲವು ಸಂಘಟನೆಗಳ ಕಾರ್ಯಕರ್ತರು ಒಗ್ಗೂಡಿ ಹೋರಾಟ ನಡೆಸಿದರು. ನಗರದ ಅಂಬೇಡ್ಕರ್‌ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಕಾರರು ರಾಜ್ಯ ಸರ್ಕಾರದ ಅಣಕು ಶವಯಾತ್ರೆ ನಡೆಸಿದರು.

ಅಂಬೇಡ್ಕರ್ ವೃತ್ತದಿಂದ ಮೆರವಣಿಗೆ ಹೊರಟ ಪ್ರತಿಭಟನಕಾರರು ಉಪವಿಭಾಗಾಧಿಕಾರಿ ಕಚೇರಿ, ಪಿ.ಬಿ ರಸ್ತೆ, ಸಂಗೊಳ್ಳಿ ರಾಯಣ್ಣ ವೃತ್ತದ ಮೂಲಕ ಜಿಲ್ಲಾಡಳಿತ ಭವನ ತಲುಪಿದರು. ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.

ADVERTISEMENT

ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಸೌಲಭ್ಯಕ್ಕೆ ಆಗ್ರಹಿಸಿ ಮಾದಿಗ ಸಮುದಾಯ 30 ವರ್ಷಗಳಿಂದ ಹೋರಾಟ ನಡೆಸಿದೆ. ಒಳಮೀಸಲು ಸೌಲಭ್ಯ ಕಲ್ಪಿಸುವ ಅಧಿಕಾರವನ್ನು ರಾಜ್ಯಕ್ಕೆ ನೀಡಿ ಸುಪ್ರೀಂ ಕೋರ್ಟ್‌ ತೀರ್ಪು ಪ್ರಕಟಿಸಿ ವರ್ಷ ಕಳೆದಿದೆ. ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್‌, ಒಳಮೀಸಲು ಸೌಲಭ್ಯ ಕಲ್ಪಿಸುವ ಆಸಕ್ತಿ ತೋರುತ್ತಿಲ್ಲ. ಇದರಿಂದ ಶೋಷಿತ ಸಮುದಾಯಕ್ಕೆ ನೋವುಂಟಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಸುಪ್ರೀಂ ಕೋರ್ಟ್‌ ತೀರ್ಪು ಆಧರಿಸಿ ತೆಲಂಗಾಣ, ಹರಿಯಾಣ, ಆಂಧ್ರಪ್ರದೇಶದಲ್ಲಿ ಒಳಮೀಸಲು ಸೌಲಭ್ಯ ಕಲ್ಪಿಸಿ ಮೇಲ್ಪಂಕ್ತಿ ಹಾಕಿವೆ. ಸಾಮಾಜಿಕ ನ್ಯಾಯ ಕಲ್ಪಿಸುವ ವಿಚಾರದಲ್ಲಿ ಕರ್ನಾಟಕದಲ್ಲಿ ವಿಳಂಬ ನೀತಿ ಅನುಸರಿಸಲಾಗುತ್ತಿದೆ. ನ್ಯಾಯಮೂರ್ತಿ ನಾಗಮೋಹನದಾಸ್‌ ಆಯೋಗಕ್ಕೆ ಸರ್ಕಾರ ಅಸಹಕಾರ ತೋರುತ್ತಿದೆ. ಉದ್ಯೋಗಾಕಾಂಕ್ಷಿಗಳು, ಮಾದಿಗ ಸಮುದಾಯದ ಉಪಜಾತಿಗಳಿಗೆ ಸಮಸ್ಯೆ ಆಗುತ್ತಿದೆ ಎಂದು ಕಿಡಿಕಾರಿದರು.

ಸಮುದಾಯದ ಮುಖಂಡರಾದ ಆಲೂರು ನಿಂಗರಾಜು, ಎಂ.ಹಾಲೇಶ್, ಎಸ್.ಎಚ್. ದುಗ್ಗಪ್ಪ, ರಾಜು ಶಾಮನುರು, ಅಂಜಿನಪ್ಪ ಶಾಮನೂರು, ಸಿ. ಬಸವರಾಜು, ಸದಾನಂದ ಚಿಕ್ಕನಹಳ್ಳಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.