ADVERTISEMENT

ಎಂಇಎಸ್- ಶಿವಸೇನೆ ಸಂಘಟನೆ ನಿಷೇಧಕ್ಕೆ ಆಗ್ರಹಿಸಿ ದಾವಣಗೆರೆಯಲ್ಲಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 2 ಜನವರಿ 2020, 9:09 IST
Last Updated 2 ಜನವರಿ 2020, 9:09 IST
ಬೆಳಗಾವಿಯಲ್ಲಿನ ಮಹಾರಾಷ್ಟ್ರ ಏಕೀಕರಣ ಸಮಿತಿಯನ್ನು ನಿಷೇಧಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ನವನಿರ್ಮಾಣ ಸೇನೆ ಸದಸ್ಯರು ದಾವಣಗೆರೆಯ ಜಯದೇವ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು –ಪ್ರಜಾವಾಣಿ ಚಿತ್ರ
ಬೆಳಗಾವಿಯಲ್ಲಿನ ಮಹಾರಾಷ್ಟ್ರ ಏಕೀಕರಣ ಸಮಿತಿಯನ್ನು ನಿಷೇಧಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ನವನಿರ್ಮಾಣ ಸೇನೆ ಸದಸ್ಯರು ದಾವಣಗೆರೆಯ ಜಯದೇವ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು –ಪ್ರಜಾವಾಣಿ ಚಿತ್ರ   

ದಾವಣಗೆರೆ: ಬೆಳಗಾವಿಯಲ್ಲಿ ಬೇರು ಬಿಟ್ಟಿರುವ ಮಹಾರಾಷ್ಟ್ರ ಏಕೀಕರಣ ಸಮಿತಿ ಮತ್ತು ಶಿವಸೇನೆ ಸಂಘಟನೆಗಳನ್ನು ಕರ್ನಾಟಕದಿಂದ ನಿಷೇಧಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ನವನಿರ್ಮಾಣ ಸೇನೆಯ ಕಾರ್ಯಕರ್ತರು ಜಯದೇವ ವೃತ್ತದಲ್ಲಿ ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.

ಬೆಳಗಾವಿಯಲ್ಲಿ ಪದೇ ಪದೇ ಕನ್ನಡಿಗರನ್ನು ಕೆರಳಿಸುವ ಹೇಳಿಕೆ ನೀಡುತ್ತಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿಕೆ ಖಂಡನೀಯ. ಕೂಡಲೇ ಗಡಿ ಉಸ್ತುವಾರಿ ಸಚಿವರು ಹಾಗೂ ಗಡಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಅಧ್ಯಕ್ಷರನ್ನು ನೇಮಕ ಮಾಡಬೇಕು. ಗಡಿ ಅಭಿವೃದ್ದಿ ಪ್ರಾಧಿಕಾರವನ್ನು ಬೆಳಗಾವಿಗೆ ಸ್ಥಳಾಂತರಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

‘ದೇಶದ ಬಹುತೇಕ ರಾಜ್ಯಗಳು ಗಡಿ, ಜಲ ವಿವಾದಗಳಿಂದಲೇ ತುಂಬಿವೆ. ರಾಜ್ಯ ರಾಜ್ಯಗಳ ಮಧ್ಯೆ ಒಡಕನ್ನು ತಂದಿಟ್ಟು ಇದನ್ನೇ ತಮ್ಮ ರಾಜಕೀಯ ಲಾಭಕ್ಕಾಗಿ ರಾಜಕಾರಣಿಗಳು ಬಳಸಿಕೊಳ್ಳುತ್ತಿದ್ದಾರೆ. ಬೆಳಗಾವಿಯಲ್ಲಿ ಬೇರು ಬಿಟ್ಟಿರುವ ಎಂಇಎಸ್ ಸಂಘಟನೆಯನ್ನು ಕರ್ನಾಟಕದಿಂದಲೇ ಬೇರು ಸಮೇತ ಕಿತ್ತು ಹಾಕಬೇಕು. ಗಡಿವಿಚಾರದಲ್ಲಿ ಸರ್ಕಾರ ಸೂಕ್ತ ಕ್ರಮಕೈಗೊಳ್ಳಬೇಕು. ಈ ವಿಚಾರದಲ್ಲಿ ರಮೇಶ್ ಜಾರಕಿಹೊಳಿ ಹೇಳಿಕೆ ನೀಡಿರುವುದು ಖಂಡನೀಯ’ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು.

ADVERTISEMENT

ಜಯದೇವ ವೃತ್ತದಿಂದ ಮೆರವಣಿಗೆ ಹೊರಟ ಪ್ರತಿಭಟನಾಕಾರರು ಉಪವಿಭಾಗಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎನ್. ವೆಂಕಟೇಶ್, ಶೇರ್ ಅಲಿ, ಎಕ್ಕೆಗೊಂದಿ ಎಚ್.ಬಿ. ರುದ್ರೇಗೌಡ್ರು, ಮಂಜುನಾಥ್, ಬಿ, ಗಿರೀಶ್ ಗಿರಿ, ಅರುಣ್ ಕುಮಾರ್, ಆನಂದ್, ಅಶ್ಫಕ್, ಶ್ರೀನಿವಾಸ್, ಇಮ್ತಿಯಾಜ್, ಆಂಜನೇಯ, ರಾಘವೇಂದ್ರ, ಕುಮಾರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.