ADVERTISEMENT

ಎರಡು ತಾಸು ಕಾದರೂ ಅಂಗನವಾಡಿಗೆ ಬಾರದ ಕಾರ್ಯಕರ್ತೆ: ಶಾಸಕ ಗರಂ

​ಪ್ರಜಾವಾಣಿ ವಾರ್ತೆ
Published 24 ಸೆಪ್ಟೆಂಬರ್ 2024, 15:33 IST
Last Updated 24 ಸೆಪ್ಟೆಂಬರ್ 2024, 15:33 IST
ಮಾಯಕೊಂಡ ಸಮೀಪದ ಕೋಲ್ಕುಂಟೆ ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ಶಾಸಕ ಕೆ.ಎಸ್.ಬಸವಂತಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು
ಮಾಯಕೊಂಡ ಸಮೀಪದ ಕೋಲ್ಕುಂಟೆ ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ಶಾಸಕ ಕೆ.ಎಸ್.ಬಸವಂತಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು    

ಮಾಯಕೊಂಡ: ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಹಾಜರಾತಿ ಇಲ್ಲ. ಮಕ್ಕಳು ಬಂದರೂ ಹಾಜರಾತಿ ಹಾಕಿಲ್ಲ. ಕಾರ್ಯಕರ್ತೆ ಬೆಳಿಗ್ಗೆ ಮಕ್ಕಳಿಗೆ ಊಟ ಕೊಟ್ಟು ಹಾಜರಿ ಪುಸ್ತಕದಲ್ಲಿ ಸಹಿ ಮಾಡಿ ಹೊರಗೆ ಹೋದವರು ಎರಡು ತಾಸು ಕಾದರು ಬರಲೇ ಇಲ್ಲ. ಇದನ್ನು ಕಂಡು ಶಾಸಕ ಕೆ.ಎಸ್.ಬಸವಂತಪ್ಪ ಗರಂ ಆದರು.

ಮಾಯಕೊಂಡ ಸಮೀಪದ ಕೋಲ್ಕುಂಟೆ ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ಮಂಗಳವಾರ ಶಾಸಕರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮಕ್ಕಳಿಗೆ ಕೊಡುವ ಊಟ, ಆಹಾರ ಧಾನ್ಯ ದಾಸ್ತಾನು, ಮಕ್ಕಳ ಸಂಖ್ಯೆಯನ್ನು ಪರಿಶೀಲಿಸಿದರು. ಈ ವೇಳೆ ಅಂಗನವಾಡಿ ಕಾರ್ಯಕರ್ತೆ ಹಾಜರಿ ಹಾಕಿ ಹೊರ ಹೋಗಿದ್ದರು. ಶಾಸಕರು ಕಾರ್ಯಕರ್ತೆ ಬರುವವರೆಗೂ ಕೇಂದ್ರದಲ್ಲಿ ಎರಡು ತಾಸು ಕಾದರು. ಆದರೆ, ಕಾರ್ಯಕರ್ತೆ ಬರಲಿಲ್ಲ. ಇದರಿಂದ ಸಹಾಯಕಿಯನ್ನು ಶಾಸಕರು ತರಾಟೆಗೆ ತೆಗೆದುಕೊಂಡರು.

ADVERTISEMENT

ಬಳಿಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಅಂಗನವಾಡಿ ಕೇಂದ್ರದಲ್ಲಿರುವ ಸಮಸ್ಯೆ ಬಗ್ಗೆ ವಿವರಿಸಿ ಕಾರ್ಯಕರ್ತೆ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಜಯಮ್ಮ, ಚಂದ್ರಪ್ಪ, ಅಣ್ಣಪ್ಪ, ಮಂಜಪ್ಪ, ಬಸಣ್ಣ, ಮುಖ್ಯಶಿಕ್ಷಕ ಚಂದ್ರಪ್ಪ ಹಾಗೂ ಗ್ರಾಮಸ್ಥರು ಇದ್ದರು.

ಸರ್ಕಾರಿ ಶಾಲೆಗೆ ಭೇಟಿ: ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿದ ಶಾಸಕ ಕೆ.ಎಸ್.ಬಸವಂತಪ್ಪ, ಶಿಕ್ಷಣದ ಗುಣಮಟ್ಟ ಪರಿಶೀಲಿಸಿದರು. ಇದೇ ವೇಳೆ ಸೆ. 25ರಿಂದ ವಿದ್ಯಾರ್ಥಿಗಳಿಗೆ ಪ್ರತಿನಿತ್ಯ ಮೊಟ್ಟೆ ಮತ್ತು ಬಾಳೆಹಣ್ಣು ಕೊಡಬೇಕು ಎಂದು ಶಿಕ್ಷಕರಿಗೆ ಸೂಚನೆ ನೀಡಿದರು.

ಸರ್ಕಾರಿ ಶಾಲೆಯಲ್ಲಿ ಎಲ್‌ಕೆಜಿ ಮತ್ತು ಯುಕೆಜಿ ಆರಂಭಿಸಿದ್ದು, ಶಿಕ್ಷಕರು ವಿದ್ಯಾರ್ಥಿಗಳ ಹಾಜರಾತಿ ಹೆಚ್ಚಳ ಮಾಡಬೇಕು. ಯಾವುದೇ ಕಾರಣಕ್ಕೂ ಬಡ ಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ ಶಿಕ್ಷಣ ಕೊಡುವ ಕೆಲಸವನ್ನು ಶಿಕ್ಷಕರು ಮಾಡಬೇಕು ಎಂದು ತಾಕೀತು ಮಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.