ದಾವಣಗೆರೆ: ಮಹಾನಗರ ಪಾಲಿಕೆಗಳು ಸೇರಿದಂತೆ ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರಿಗೆ ಹೊರಗುತ್ತಿಗೆಯಿಂದ ಮುಕ್ತಿ ಸಿಗಬೇಕಿದೆ. ಎಲ್ಲ ಸಿಬ್ಬಂದಿಯನ್ನು ನೇರ ಪಾವತಿ ವ್ಯವಸ್ಥೆಗೆ ತರುವ ಅಗತ್ಯವಿದೆ ಎಂದು ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಅಭಿಪ್ರಾಯಟ್ಟರು.
ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ಮಹಾನಗರ ಪಾಲಿಕೆ ನೌಕರರ ಸಂಘದ ವತಿಯಿಂದ ಇದೇ ಮೊದಲ ಬಾರಿಗೆ ಏರ್ಪಡಿಸಿರುವ ರಾಜ್ಯ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಿಗೆ ಶುಕ್ರವಾರ ಚಾಲನೆ ನೀಡಿ ಅವರು ಮಾತನಾಡಿದರು.
‘ನಗರ ಸ್ಥಳೀಯ ಸಂಸ್ಥೆಗಳಲ್ಲಿ ಪೌರಕಾರ್ಮಿಕರು ಸೇರಿದಂತೆ ಅನೇಕರು ಹೊರಗುತ್ತಿಗೆಯಡಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರನ್ನು ನೇರ ಪಾವತಿ ವ್ಯವಸ್ಥೆಗೆ ತರುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒಲವು ತೋರಿದ್ದಾರೆ. ಈ ಕಾರ್ಯ ತ್ವರಿತಗತಿಯಲ್ಲಿ ನಡೆಯಬೇಕಿದೆ. ಈ ಕುರಿತು ಮುಖ್ಯಮಂತ್ರಿ ಜೊತೆಗೆ ಚರ್ಚಿಸಲಿದ್ದೇನೆ’ ಎಂದು ಭರವಸೆ ನೀಡಿದರು.
‘ಕಸ ಎತ್ತುವುದು, ಸ್ವಚ್ಛತೆ ಕಾಪಾಡುವುದು ಹಾಗೂ ಕಂದಾಯ ವಸೂಲಿಗೆ ಮಾತ್ರವೇ ನಗರ ಸ್ಥಳೀಯ ಸಂಸ್ಥೆಗಳ ಸಿಬ್ಬಂದಿ ಸೀಮಿತ ಎನ್ನುವಂತಾಗಿದೆ. ನಿತ್ಯ ನಸುಕಿನಿಂದ ಆರಂಭವಾಗುವ ಕಾರ್ಯ ರಾತ್ರಿ ಕಳೆದರೂ ಮುಗಿಯುವುದಿಲ್ಲ. ಜನರ ಹಿತ ಮತ್ತು ಸ್ವಚ್ಛತೆ ಕಾಪಾಡುವ ನೌಕರರು, ನಗರ ಆರೋಗ್ಯವಾಗಿರುವಂತೆ ನೋಡಿಕೊಳ್ಳುತ್ತಿದ್ದಾರೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
‘ಮಹಾನಗರ ಪಾಲಿಕೆ ಸಿಬ್ಬಂದಿಯ ಮೇಲೆ ಒತ್ತಡ ಹೆಚ್ಚಾಗಿದೆ. ಆದರೂ ಕಚೇರಿಗೆ ಬರುವ ಸಾರ್ವಜನಿಕರೊಂದಿಗೆ ಉತ್ತಮ ಬಾಂಧವ್ಯ ಬೆಳೆಸಿಕೊಳ್ಳಬೇಕು. ನಗರದ ಸುಧಾರಣೆಗೆ ನೌಕರರ ವರ್ತನೆಯೂ ಮುಖ್ಯವಾಗುತ್ತದೆ’ ಎಂದರು.
‘ಮಾನಸಿಕ ಒತ್ತಡ ಕಡಿಮೆ ಮಾಡಿಕೊಳ್ಳಲು ಕ್ರೀಡೆ ಸಹಕಾರಿ. ನಿತ್ಯ ಕ್ರೀಡೆಯಲ್ಲಿ ತೊಡಗಿದರೆ ಕೆಲಸದ ದಕ್ಷತೆ ಕೂಡ ಸುಧಾರಣೆಯಾಗಲಿದೆ. ದೈಹಿಕ ಮತ್ತು ಮಾನಸಿಕ ಆರೋಗ್ಯದ ದೃಷ್ಟಿಯಿಂದ ಪ್ರತಿಯೊಬ್ಬರೂ ಕ್ರೀಡೆಯಲ್ಲಿ ತೊಡಗಿಕೊಳ್ಳುವುದು ಒಳಿತು’ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಸಲಹೆ ನೀಡಿದರು.
‘ದೈಹಿಕ ಚಟುವಟಿಕೆ ಕಡಿಮೆಯಾಗುತ್ತಿರುವ ಪರಿಣಾಮ ಆರೋಗ್ಯ ಸಮಸ್ಯೆಗಳು ಕಾಡುತ್ತಿವೆ. ನಿತ್ಯ ಕ್ರೀಡೆಯಲ್ಲಿ ತೊಡಗಿಸಿಕೊಂಡರೆ ಆರೋಗ್ಯವೂ ಉತ್ತಮವಾಗಿರುತ್ತದೆ. ಉದ್ಯೋಗದ ಜೊತೆಗೆ ಆರೋಗ್ಯದ ಕಡೆಗೆ ಗಮನ ಹರಿಸುವುದು ಮುಖ್ಯ. ಆರೋಗ್ಯಕರ ಜೀವನ ಶೈಲಿಯನ್ನು ರೂಢಿಸಿಕೊಳ್ಳಬೇಕಿದೆ’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್ ಕಿವಿಮಾತು ಹೇಳಿದರು.
ದಾವಣಗೆರೆ–ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘದ ಅಧ್ಯಕ್ಷ ಅಮೃತ್‌ರಾಜ್, ಮಹಾನಗರ ಪಾಲಿಕೆ ಆಯುಕ್ತೆ ರೇಣುಕಾ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಎನ್. ಮಹಾಂತೇಶ್, ಮಹಾನಗರ ಪಾಲಿಕೆ ಮಾಜಿ ಸದಸ್ಯ ಎ. ನಾಗರಾಜ್ ಹಾಜರಿದ್ದರು.
ನಗರ ಸ್ವಚ್ಛವಾಗಿದ್ದರೆ ಜನರ ಆರೋಗ್ಯವೂ ಚೆನ್ನಾಗಿರುತ್ತದೆ. ಮಹಾನಗರ ಪಾಲಿಕೆ ಸ್ವಚ್ಛತೆಗೆ ಒತ್ತು ನೀಡುತ್ತಿದೆ. ಸಾರ್ವಜನಿಕರು ಕೈಜೋಡಿಸಿದರೆ ನಗರದ ಆರೋಗ್ಯವೂ ಚೆನ್ನಾಗಿರುತ್ತದೆ– ಅಬ್ದುಲ್ ಜಬ್ಬಾರ್, ವಿಧಾನಪರಿಷತ್ ಸದಸ್ಯ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.