ADVERTISEMENT

ಜೆಜೆಎಂ ಯೋಜನೆ: 46 ಕಾಮಗಾರಿ ಪೂರ್ಣಗೊಳಿಸಿ: ಶಾಸಕ ಕೆ.ಎಸ್.ಬಸವಂತಪ್ಪ ಸೂಚನೆ

ಮಾಯಕೊಂಡ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಎಸ್.ಬಸವಂತಪ್ಪ ಸೂಚನೆ

​ಪ್ರಜಾವಾಣಿ ವಾರ್ತೆ
Published 1 ಆಗಸ್ಟ್ 2024, 15:39 IST
Last Updated 1 ಆಗಸ್ಟ್ 2024, 15:39 IST
ದಾವಣಗೆರೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನಾ ಸಭೆಯಲ್ಲಿ ಮಾಯಕೊಂಡ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಎಸ್.ಬಸವಂತಪ್ಪ ಮಾತನಾಡಿದರು
ದಾವಣಗೆರೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನಾ ಸಭೆಯಲ್ಲಿ ಮಾಯಕೊಂಡ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಎಸ್.ಬಸವಂತಪ್ಪ ಮಾತನಾಡಿದರು   

ದಾವಣಗೆರೆ: ಜಲಜೀವನ್‌ ಮಿಷನ್‌ ಯೋಜನೆಯಡಿ (ಜೆಜೆಎಂ) ಬಾಕಿ ಉಳಿದಿರುವ 46 ಕಾಮಗಾರಿಗಳನ್ನು ಪೂರ್ಣಗೊಳಿಸಲು ತ್ವರಿತವಾಗಿ ಕೆಲಸ ಮಾಡಬೇಕು ಎಂದು ಮಾಯಕೊಂಡ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಎಸ್.ಬಸವಂತಪ್ಪ ಸೂಚನೆ ನೀಡಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಕ್ಷೇತ್ರ ವ್ಯಾಪ್ತಿಯ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ಕಾಮಗಾರಿ ಪೂರ್ಣಗೊಳಿಸಲು ಒಂದೂವರೆ ತಿಂಗಳ ಕಾಲಮಿತಿಯನ್ನು ನಿಗದಿಪಡಿಸಿದರು. ಪೂರ್ಣಗೊಂಡಿರುವ ಸ್ಥಳಗಳಲ್ಲಿ ನೀರು ಪೂರೈಕೆ ಮಾಡಬೇಕು ಎಂದು ತಾಕೀತು ಮಾಡಿದರು.

‘ಕಾಮಗಾರಿಯ ಟೆಂಡರ್‌ ಪ್ರಕ್ರಿಯೆ ಪೂರ್ಣಗೊಂಡಿದ್ದರೂ ಕಾರ್ಯಾರಂಭಗೊಂಡಿಲ್ಲ. ಮನೆ–ಮನೆಗೆ ನಳ (ನಲ್ಲಿ) ಸಂಪರ್ಕ ಕಲ್ಪಿಸುವಾಗ ಎಚ್ಚರಿಕೆ ವಹಿಸಬೇಕು. ಪ್ರತಿ ಮನೆಯ ಸಮೀಕ್ಷೆ ನಡೆಸಿ ಯೋಜನಾಬದ್ಧವಾಗಿ ಕೊಳವೆ ಮಾರ್ಗ ನಿರ್ಮಿಸಬೇಕು. ಗುಣಮಟ್ಟದ ಪೈಪ್‌ಗಳನ್ನು ಅಳವಡಿಸಬೇಕು. ಪೈಪ್‌ಲೈನ್ ಮಾಡಿದ ನಂತರ ಗುಂಡಿಯನ್ನು ಸರಿಯಾಗಿ ಮುಚ್ಚಬೇಕು. ಕಾಂಕ್ರೀಟ್ ರಸ್ತೆಗಳಾಗಿದ್ದರೆ ನಿಯಮಬದ್ಧವಾಗಿ ಕಾಂಕ್ರೀಟ್ ಹಾಕಬೇಕು. ಕಳಪೆ ಕಾಮಗಾರಿ ಕೈಗೊಂಡಲ್ಲಿ ಸಂಬಂಧಿಸಿದ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ಮೇಲೆ ಕ್ರಮಕೈಗೊಳ್ಳಲಾಗುವುದು’ ಎಂದು ಎಚ್ಚರಿಕೆ ನೀಡಿದರು.

ADVERTISEMENT

‘ಕ್ಷೇತ್ರದಲ್ಲಿ ವಿವಿಧ ಇಲಾಖೆಗಳಿಂದ ಅನುಷ್ಠಾನಗೊಳಿಸುತ್ತಿರುವ ಕುಡಿಯುವ ನೀರು, ಚರಂಡಿ, ಶಾಲಾ ಕಟ್ಟಡ, ರಸ್ತೆ, ಅಂಗನವಾಡಿ ಸೇರಿ ಅಗತ್ಯ ಕಾಮಗಾರಿ ಕೈಗೆತ್ತಿಕೊಂಡಾಗ ಕ್ಷೇತ್ರದ ಶಾಸಕರಿಗೆ ಮಾಹಿತಿ ನೀಡಬೇಕು. ಶಿಥಿಲಗೊಂಡಿರುವ ಅಂಗನವಾಡಿ, ಶಾಲಾ ಕಟ್ಟಡ, ಶೌಚಾಲಯಗಳ ಕಾಮಗಾರಿಗಳನ್ನು ತಿಂಗಳಲ್ಲಿ ಪೂರ್ಣಗೊಳಿಸಿ ಜನ ಬಳಕೆಗೆ ಮುಕ್ತಗೊಳಿಸಬೇಕು. ನರೇಗಾ ಯೋಜನೆಯಡಿ ಶಾಲೆಯಲ್ಲಿನ ಮಕ್ಕಳ ಭೋಜನಾಲಯ ಮತ್ತು ನೀರು ನಿರ್ವಹಣಾ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು’ ಎಂದರು.

ಜಿಲ್ಲಾ ಪಂಚಾಯತಿ ಉಪಕಾರ್ಯದರ್ಶಿ ಕೃಷ್ಣನಾಯ್ಕ, ಮುಖ್ಯ ಯೋಜನಾಧಿಕಾರಿ ಮಲ್ಲನಾಯ್ಕ ಇದ್ದರು.

ಗ್ರಾಮ ಪಂಚಾಯಿತಿಯ ಬ್ಯಾಂಕ್‌ ಖಾತೆಗಳನ್ನು ಪರಿಶೀಲಿಸಬೇಕು. ಠೇವಣಿ ಉಳಿತಾಯದಲ್ಲಿರುವ ಹಣ ದುರುಪಯೋಗ ಆಗುವುದನ್ನು ತಡೆಯಬೇಕು.

-ಸುರೇಶ್ ಬಿ.ಇಟ್ನಾಳ್ ಸಿಇಒ ಜಿಲ್ಲಾ ಪಂಚಾಯಿತಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.