ADVERTISEMENT

ಹೊನ್ನಾಳಿ | ಸುಸಜ್ಜಿತ ವಸತಿ ಶಾಲೆ ನಿರ್ಮಾಣ: ಶಾಸಕ ಶಾಂತನಗೌಡ

​ಪ್ರಜಾವಾಣಿ ವಾರ್ತೆ
Published 3 ಆಗಸ್ಟ್ 2025, 6:30 IST
Last Updated 3 ಆಗಸ್ಟ್ 2025, 6:30 IST
ಹೊನ್ನಾಳಿ ತಾಲ್ಲೂಕಿನ ಅರಬಗಟ್ಟೆ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ಚಿಗುರು ಕಾರ್ಯಕ್ರಮವನ್ನು ಶಾಸಕ ಡಿ.ಜಿ. ಶಾಂತನಗೌಡ ಉದ್ಘಾಟಿಸಿದರು
ಹೊನ್ನಾಳಿ ತಾಲ್ಲೂಕಿನ ಅರಬಗಟ್ಟೆ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ಚಿಗುರು ಕಾರ್ಯಕ್ರಮವನ್ನು ಶಾಸಕ ಡಿ.ಜಿ. ಶಾಂತನಗೌಡ ಉದ್ಘಾಟಿಸಿದರು   

ಹೊನ್ನಾಳಿ: ‘ಸಿದ್ದರಾಮಯ್ಯ ಅವರು 2013ರಲ್ಲಿ ಮುಖ್ಯಮಂತ್ರಿಯಾಗಿದ್ದಾಗ ನನ್ನ ಬೇಡಿಕೆಗೆ ಸ್ಪಂದಿಸಿ ನಾಲ್ಕು ವಸತಿ ಶಾಲೆಗಳನ್ನು ಮಂಜೂರು ಮಾಡಿದ್ದರು. ತಲಾ ₹25 ಕೋಟಿಯಂತೆ ₹100 ಕೋಟಿ ಅನುದಾನ ಬಿಡುಗಡೆ ಮಾಡಿದ್ದರು. ಹೀಗಾಗಿ ಅವಳಿ ತಾಲ್ಲೂಕಿನಲ್ಲಿ ಸುಸಜ್ಜಿತ ವಸತಿ ಶಾಲೆಗಳು ನಿರ್ಮಾಣ ಸಾಧ್ಯವಾಗಿದೆ’ ಎಂದು ಶಾಸಕ ಡಿ.ಜಿ. ಶಾಂತನಗೌಡ ಹೇಳಿದರು.

ತಾಲ್ಲೂಕಿನ ಅರಬಗಟ್ಟೆ ಗ್ರಾಮದಲ್ಲಿ ಇಂದಿರಾಗಾಂಧಿ ವಸತಿ ಶಾಲೆ (ಪ.ಜಾ) ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಚಿಗುರು–2025 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಪರೀಕ್ಷೆ ಬರೆದು ವಸತಿ ಶಾಲೆಗೆ ಆಯ್ಕೆಯಾಗಿರುವ ಎಲ್ಲ ವಿದ್ಯಾರ್ಥಿಗಳು ಪ್ರತಿಭಾವಂತರು. ಉತ್ತಮ ಫಲಿತಾಂಶ ಪಡೆದು ಉನ್ನತ ಮಟ್ಟಕ್ಕೆ ಹೋಗಬೇಕು. ಅರಬಗಟ್ಟೆ ವಸತಿ ಶಾಲೆಗೆ ತೆರಳುವ ರಸ್ತೆ ಹಾಳಾಗಿದ್ದು, ವಿದ್ಯಾರ್ಥಿಗಳ ಬೇಡಿಕೆಯಂತೆ ಎರಡು ಮೂರು ತಿಂಗಳಲ್ಲಿ ಸಿಮೆಂಟ್ ರಸ್ತೆ ನಿರ್ಮಿಸಲಾಗುವುದು ಎಂದರು. 

ADVERTISEMENT

ಬಾಲಪ್ರತಿಭೆಗಳಿಗೆ ವೇದಿಕೆ ಒದಗಿಸುವ ಮೂಲಕ ಅವರ ಪ್ರತಿಭೆ ಅನಾವರಣಕ್ಕೆ ಚಿಗುರು ಕಾರ್ಯಕ್ರಮ ಸಹಕಾರಿಯಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರವಿಚಂದ್ರ ತಿಳಿಸಿದರು.

ವಸತಿ ಶಾಲೆಯ ಪ್ರಾಂಶುಪಾಲರಾದ ಹಸನಸಾಬ ಸೋಮಲಾಪುರ, ರಾಮನಗೌಡ, ಗ್ರಾ.ಪಂ. ಸದಸ್ಯರಾದ ಕೆ.ವಿ. ಮಲ್ಲೇಶ್, ಶ್ರೀನಾಥ್ ಹಾಗೂ ಶಿಕ್ಷಕರು ಉಪಸ್ಥಿತರಿದ್ದರು. 250ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.