ADVERTISEMENT

ಜಗಳೂರು: ಬಹುತೇಕ ಅಧಿಕಾರಿಗಳು ಗೈರು; ನೋಟಿಸ್‌ಗೆ ಸೂಚನೆ

​ಪ್ರಜಾವಾಣಿ ವಾರ್ತೆ
Published 31 ಮೇ 2025, 16:33 IST
Last Updated 31 ಮೇ 2025, 16:33 IST
ಜಗಳೂರಿನಲ್ಲಿ ಶನಿವಾರ ನಡೆದ ತಾಲ್ಲೂಕು ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಆಡಳಿತಾಧಿಕಾರಿಯೂ ಆಗಿರುವ ಡಿಡಿಪಿಇ ಕೊಟ್ರೇಶ್, ಇಒ ಕೆಂಚಪ್ಪ ಭಾಗವಹಿಸಿದ್ದರು
ಜಗಳೂರಿನಲ್ಲಿ ಶನಿವಾರ ನಡೆದ ತಾಲ್ಲೂಕು ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಆಡಳಿತಾಧಿಕಾರಿಯೂ ಆಗಿರುವ ಡಿಡಿಪಿಇ ಕೊಟ್ರೇಶ್, ಇಒ ಕೆಂಚಪ್ಪ ಭಾಗವಹಿಸಿದ್ದರು   

ಜಗಳೂರು: ತಾಲ್ಲೂಕಿನಲ್ಲಿ ಮುಂಗಾರು ಪೂರ್ವ ಉತ್ತಮ ಮಳೆಯಾಗಿದೆ. ಹತ್ತಿ, ಮೆಕ್ಕೆಜೋಳ ಬಿತ್ತನೆ ಕಾರ್ಯ ನಡೆಯುತ್ತಿದ್ದು, ರಿಯಾಯಿತಿ ದರದಲ್ಲಿ ಬಿತ್ತನೆ ಬೀಜ ಪೂರೈಸಲಾಗುತ್ತಿದೆ. ರಸಗೊಬ್ಬರದ ಕೊರತೆ ಇಲ್ಲ ಎಂದು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕಿ ಶ್ವೇತಾ ಹೇಳಿದರು.

ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ನಡೆದ ತಾಲ್ಲೂಕು ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಅವರು ಇಲಾಖಾವಾರು ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದರು.

ತಾಲ್ಲೂಕಿನ ಎಲ್ಲಾ ಶಾಲೆಗಳಲ್ಲಿ ಶೇ 84ರಷ್ಟು ಪಠ್ಯಪುಸ್ತಕ ಹಾಗೂ ಸಮವಸ್ತ್ರ ವಿತರಣೆ ಮಾಡಲಾಗಿದೆ. 71 ಅತಿಥಿ ಶಿಕ್ಷಕರು ನೇಮಕವಾಗಿದ್ದಾರೆ. ತಾಲ್ಲೂಕಿನಲ್ಲಿ ಎಲ್ಲಾ ಶಾಲೆಗಳಿಗೆ ಶೌಚಾಲಯದ ವ್ಯವಸ್ಥೆ ಇದ್ದು, ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಹೆಚ್ಚುವರಿ ಶೌಚಾಲಯಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ ಎಂದು ಬಿಇಒ ಹಾಲಮೂರ್ತಿ ಸಭೆಯ ಗಮನಕ್ಕೆ ತಂದರು.

ADVERTISEMENT

ಸರ್ಕಾರದ ಸೌಲಭ್ಯಗಳನ್ನು ಜನಸಾಮಾನ್ಯರಿಗೆ ಸಕಾಲಕ್ಕೆ ತಲುಪಿಸುವ ಕೆಲಸವನ್ನು ಅನುಷ್ಠಾನಾಧಿಕಾರಿಗಳು ಮಾಡಬೇಕು. ಪ್ರತಿ ಇಲಾಖೆಯ ಯೋಜನೆಗಳ ಬಗ್ಗೆ ವಿವರವಾದ ಮಾಹಿತಿ ಇರುವ ಕರಪತ್ರಗಳನ್ನು ಮುದ್ರಿಸಿ ಸಾರ್ವಜನಿಕರಿಗೆ ತಿಳಿಸುವ ಕೆಲಸ ಮಾಡಬೇಕು ಎಂದು ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಜಿ. ಕೊಟ್ರೇಶ್ ಸೂಚನೆ ನೀಡಿದರು.

ಸಮಾಜ ಕಲ್ಯಾಣ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ನಡೆಯುತ್ತಿರುವ ವಿದ್ಯಾರ್ಥಿ ನಿಲಯಗಳಲ್ಲಿರುವ ವಿದ್ಯಾರ್ಥಿಗಳ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಫಲಿತಾಂಶ ಕುಸಿತವಾಗಿದೆ. ನಿಲಯ ಮೇಲ್ವಿಚಾರಕರು ಸಮರ್ಪಕವಾಗಿ ಕೆಲಸ ಮಾಡುತ್ತಿಲ್ಲ ಎಂಬ ದೂರುಗಳು ಕೇಳಿ ಬರುತ್ತಿವೆ ಎಂದು ಹರಿಹಾಯ್ದರು. 

ಕಾರ್ಮಿಕ ಇಲಾಖೆ, ವಲಯ ಅರಣ್ಯ ಇಲಾಖೆ, ಅಂಬೇಡ್ಕರ್ ಅಭಿವೃದ್ಧಿ ನಿಗಮ, ತಾಂಡಾ ಅಭಿವೃದ್ದಿ ನಿಗಮ, ಭೋವಿ ಅಭಿವೃದ್ದಿ ನಿಗಮ, ಭೂ ಸೇನನಾ ನಿಗಮ, ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು ಸಭೆಗೆ ಗೈರು ಹಾಜರಿದ್ದರು. ಗೈರಾಗಿರುವ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿ ಎಂದು ಆಡಾಳಿತಾಧಿಕಾರಿ ಕೊಟ್ರೇಶ್ ಅವರು ಇ.ಒ ಕೆಂಚಪ್ಪ ಅವರಿಗೆ ಸೂಚಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.