ADVERTISEMENT

ಅಸ್ಪೃಶ್ಯತೆ ವಿರುದ್ಧ ಹೋರಾಡಿದ ನಾರಾಯಣ ಗುರು: ಸುಮತಿ ಜಯಪ್ಪ

​ಪ್ರಜಾವಾಣಿ ವಾರ್ತೆ
Published 11 ಸೆಪ್ಟೆಂಬರ್ 2022, 2:28 IST
Last Updated 11 ಸೆಪ್ಟೆಂಬರ್ 2022, 2:28 IST
ದಾವಣಗೆರೆ ಜಿಲ್ಲಾಡಳಿತ ಕಚೇರಿಯಲ್ಲಿ ಶನಿವಾರ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮ ಆಯೋಜಿಸಲಾಯಿತು
ದಾವಣಗೆರೆ ಜಿಲ್ಲಾಡಳಿತ ಕಚೇರಿಯಲ್ಲಿ ಶನಿವಾರ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮ ಆಯೋಜಿಸಲಾಯಿತು   

ದಾವಣಗೆರೆ: ಒಂದೇ ಜಾತಿ, ಒಂದೇ ಧರ್ಮ, ಒಬ್ಬನೇ ದೇವರು ಎಂದು ಮನುಕುಲ ಕುಟುಂಬಕ್ಕೆ ಸಾರಿದವರು. ವಿಶ್ವ ಮಾನವ ಸಂದೇಶವನ್ನು ಕೇರಳದಿಂದ ಪ್ರಾರಂಭ ಮಾಡಿ ದೇಶದೆಲ್ಲೆಡೆ ಹಬ್ಬಿಸಿದವರು ನಾರಾಯಣ ಗುರುಗಳು ಎಂದು ಕುಂಬಳೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಧ್ಯಾಪಕಿ ಸುಮತಿ ಜಯಪ್ಪ ಹೇಳಿದರು.

ಜಿಲ್ಲಾಡಳಿತ ಕಚೇರಿಯಲ್ಲಿ ಶನಿವಾರ ಆಯೋಜಿಸಲಾಗಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಉಪನ್ಯಾಸ ನೀಡಿದರು.

ಯುರೋಪಿಯನ್ನರು ವಸಾಹತು ಸ್ಥಾಪಿಸಿ ನಮ್ಮನ್ನು ಗುಲಾಮರನ್ನಾಗಿ ಮಾಡಿದ್ದು ರಾಜಕೀಯರಂಗದ ಗೋಳು. ಇದೇ ಕಾಲದಲ್ಲಿ ಸಾಮಾಜಿಕ ಸ್ಥಿತಿ ಇನ್ನೂ ನೋವಿನ ಸಂಗತಿಯಾಗಿತ್ತು. ಆ ಕಾಲದಲ್ಲಿ ಜಾತಿಯಲ್ಲಿ ಹಿಂದುಳಿದವರನ್ನು ಶೋಷಣೆ ಮಾಡಲಾಗುತ್ತಿತ್ತು. ಕೇರಳದ ಬಹುಸಂಖ್ಯಾತ ಈಳವ ಜನಾಂಗ ಕೂಡಾ ಅಸ್ಪೃಶ್ಯ ವರ್ಗಕ್ಕೆ ಸೇರಿದ್ದರು. ದೇವಾಲಯದಲ್ಲಿ ಪ್ರವೇಶವಿರಲಿಲ್ಲ. ಮೇಲು ಜಾತಿಯವರು ನಡೆಯುವ ದಾರಿಯಲ್ಲಿ ನಡೆಯುವಂತಿಲ್ಲ. ಮಹಿಳೆಯರು ಕುಪ್ಪಸ ತೊಡುವಂತಿರಲಿಲ್ಲ. ಆಭರಣ ಧರಿಸುವಂತಿರಲಿಲ್ಲ. ಕಾಲಿಗೆ ಚಪ್ಪಲಿ ಹಾಕುವಂತಿರಲಿಲ್ಲ ಎಂದು ನೆನಪಿಸಿಕೊಂಡರು.

ADVERTISEMENT

ಇಂಥ ಸಂದರ್ಭದಲ್ಲಿ ಸಾಮಾಜಿಕ ಸುಧಾರಣೆಗಾಗಿ ಬಂದ ಗುರುಗಳು ಕಂದಾಚಾರ, ಮೂಢನಂಬಿಕೆಗಳನ್ನು, ಅವಿಚಾರಗಳನ್ನು ಟೀಕಿಸಿ ಸರಿಪಡಿಸಿದರು. ವಿದ್ಯೆಯನ್ನು ಪಡೆದು ಸ್ವತಂತ್ರರಾಗಿರಿ, ಸಂಘಟನೆಯಿಂದ ಶಕ್ತಿವಂತರಾಗಿರಿ ಎಂದು ಸಂದೇಶ ಸಾರಿದರು. ಮನುಷ್ಯ ಜಾತಿಯಿಂದ ದೊಡ್ಡವನಾಗುವುದಿಲ್ಲ ಬದಲಾಗಿ ಆತ ಬದುಕುವ ನೀತಿಯಿಂದ, ರೀತಿಯಿಂದ ದೊಡ್ಡವನಾಗುತ್ತಾನೆ ಎಂದು ತೋರಿಸಿಕೊಟ್ಟರು ಎಂದರು.

ನಾರಾಯಣ ಗುರುಗಳು ಕೇವಲ ಒಂದು ಜನಾಂಗದ ಗುರು ಅಲ್ಲ. ಮಾನವ ಜನಾಂಗದ ಗುರು, ಸಾಮಾಜಿಕ ಕ್ರಾಂತಿಯ ಹರಿಕಾರ. ಇವರು ಆಧ್ಯಾತ್ಮಿಕ ಚಿಂತನೆಯ ಮೂಲಕ ಮತಾಂತರವನ್ನು ತಪ್ಪಿಸಿದರು. ಸಮಾನತೆಯನ್ನು ತರುವ ನಿಟ್ಟಿನಲ್ಲಿ ಕ್ರಾಂತಿಕಾರಿ ಹೋರಾಟ ಮಾಡಿದರು ಎಂದು ಜಿಲ್ಲಾಧಿಕಾರಿ ಶಿವಾನಂದ್ ಕಾಪಶಿ ತಿಳಿಸಿದರು.

ಹಿಂದುಳಿದವರ ಉದ್ಧಾರಕ್ಕಾಗಿ ಜೀವನಪೂರ್ತಿ ಗುರುಗಳು ಕೆಲಸ ಮಾಡಿದ್ದರು. ಗಾಂಧೀಜಿಯ ಹರಿಜನೋದ್ಧಾರ ಕಾರ್ಯಕ್ರಮಕ್ಕೆ ಗುರುಗಳೇ ಸ್ಫೂರ್ತಿಯಾಗಿದ್ದರು ಎಂದು ಜಿಲ್ಲಾ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಎ. ಚನ್ನಪ್ಪ ಮಾಹಿತಿ ನೀಡಿದರು.

ಮೇಯರ್ ಜಯಮ್ಮ ಗೋಪಿನಾಯ್ಕ್, ಸಮಾಜದ ಅಧ್ಯಕ್ಷ ಶಂಕರ್, ಕಾರ್ಯದರ್ಶಿ ನಾಗರಾಜ್ ಮಾತನಾಡಿದರು. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಆರ್.ಬಿ. ಬಸರಗಿ, ಹೆಚ್ಚುವರಿ ಜಿಲ್ಲಾಧಿಕಾರಿ ಪಿ.ಎನ್. ಲೋಕೇಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರ, ಸಮಾಜದ ಮುಖಂಡರಾದ ದೇವೇಂದ್ರಪ್ಪ, ರವೀಂದ್ರ ಬಾಬು, ಸತೀಶ್, ಹನುಮಂತಪ್ಪ, ಸಂಘಟನೆಯ ಮಹಿಳಾ ಪದಾಧಿಕಾರಿಗಳು, ಇತರರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.