ADVERTISEMENT

ದಾವಣಗೆರೆ: 10,000 ಪ್ರಕರಣ ವಿಲೇವಾರಿ ಗುರಿ

12 ರಂದು ರಾಷ್ಟ್ರೀಯ ಲೋಕ ಅದಾಲತ್‌: ನ್ಯಾಯಾಧೀಶೆ ಡಿ.ಕೆ. ವೇಲಾ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 10 ಜುಲೈ 2025, 4:33 IST
Last Updated 10 ಜುಲೈ 2025, 4:33 IST
<div class="paragraphs"><p>ಕಡತ</p></div>

ಕಡತ

   

(ಸಾಂದರ್ಭಿಕ ಚಿತ್ರ)

ದಾವಣಗೆರೆ: ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಜುಲೈ 12ರಂದು ರಾಷ್ಟ್ರೀಯ ಲೋಕ ಅದಾಲತ್‌ ಹಮ್ಮಿಕೊಳ್ಳಲಾಗಿದ್ದು, 10,000 ಪ್ರಕರಣಗಳ ವಿಲೇವಾರಿಯ ಗುರಿ ಹೊಂದಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶೆ ಡಿ.ಕೆ. ವೇಲಾ ತಿಳಿಸಿದರು.

ADVERTISEMENT

‘ರಾಷ್ಟ್ರೀಯ ಕಾನೂನು ಸೇವಾ ಪ್ರಾಧಿಕಾರ ಹಾಗೂ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಲೋಕ ಅದಾಲತ್‌ ಹಮ್ಮಿಕೊಳ್ಳಲಾಗಿದೆ. ರಾಜಿಯಾಗಬಲ್ಲ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯದಲ್ಲಿ ವಿಚಾರಣೆಗೆ ಬಾಕಿ ಇರುವ ಪ್ರಕರಣಗಳನ್ನು ಅದಾಲತ್‌ಗೆ ಗುರುತಿಸಲಾಗಿದೆ’ ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

‘ರಾಜಿಯಾಗಬಲ್ಲ ಅಪರಾಧಿಕ ಪ್ರಕರಣ, ಚೆಕ್ಕು ಅಮಾನ್ಯ, ಮೋಟಾರು ಅಪಘಾತ ಪರಿಹಾರ, ಕಾರ್ಮಿಕ ವಿವಾದ, ಕಾರ್ಮಿಕರ ವೇತನ, ವಿದ್ಯುತ್, ನೀರಿನ ಶುಲ್ಕ, ವೈವಾಹಿಕ, ಕೌಟುಂಬಿಕ ನ್ಯಾಯಾಲಯ ಪ್ರಕರಣ, ಭೂಸ್ವಾಧೀನ, ಕಂದಾಯ, ಪಿಂಚಣಿ ಸೇರಿದಂತೆ ಹಲವು ಬಗೆಯ ಪ್ರಕರಣಗಳನ್ನು ಲೋಕ ಅದಾಲತ್‍ನಲ್ಲಿ ಬಗೆಹರಿಸಲಾಗುವುದು. ಅದಾಲತ್‍ನಲ್ಲಿ ಇತ್ಯರ್ಥ ಮಾಡಿಕೊಂಡ ಬಳಿಕ ಮೇಲ್ಮನವಿ ಸಲ್ಲಿಸಲು ಅವಕಾಶ ಇರುವುದಿಲ್ಲ’ ಎಂದು ಸ್ಪಷ್ಟಪಡಿಸಿದರು.

45,508 ಬಾಕಿ ಪ್ರಕರಣ:

‘ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ 45,508 ಪ್ರಕರಣಗಳು ವಿಚಾರಣೆಗೆ ಬಾಕಿ ಇವೆ. ಇದರಲ್ಲಿ ರಾಜಿಯಾಗಬಲ್ಲ 12,853 ಪ್ರಕರಣಗಳನ್ನು ಅದಾಲತ್‌ಗೆ ಗುರುತಿಸಲಾಗಿದೆ. ಇದರಲ್ಲಿ 10,000ಕ್ಕೂ ಹೆಚ್ಚು ಪ್ರಕರಣ ಇತ್ಯರ್ಥಪಡಿಸುವ ಗುರಿ ಹೊಂದಲಾಗಿದೆ’ ಎಂದು ಮಾಹಿತಿ ನೀಡಿದರು.

‘ಸಣ್ಣ ವಿಚಾರ, ಪ್ರತಿಷ್ಠೆಗಾಗಿ ನ್ಯಾಯಾಲಯಕ್ಕೆ ಅಲೆದಾಡುವುದು ತಪ್ಪಬೇಕಿದೆ. ಸಂಬಂಧಗಳನ್ನು ಬೆಸೆದು ಸಮಾಜದಲ್ಲಿ ಶಾಂತಿ ನೆಲೆಸಲು ಇದೊಂದು ಉತ್ತಮ ಮಾರ್ಗ. ಅದಾಲತ್‌ನಲ್ಲಿ ಪಾಲ್ಗೊಳ್ಳಲು ದೂರವಾಣಿ ಸಂಖ್ಯೆ ದಾವಣಗೆರೆ– 08192-296364, ಹರಿಹರ– 08192-296885, ಹೊನ್ನಾಳಿ – 08188-251732, ಚನ್ನಗಿರಿ– 08189-229195, ಜಗಳೂರು –08196-227600 ಸಂಪರ್ಕಿಸಬಹುದು’ ಎಂದು ತಿಳಿಸಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಾಹಾವೀರ ಕರೆಣ್ಣವರ, ವಕೀಲರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎಲ್.ಎಚ್.ಅರುಣ್ ಕುಮಾರ್, ಕಾರ್ಯದರ್ಶಿ ಬಸವರಾಜ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.