ದಾವಣಗೆರೆ: ಬ್ಯಾಂಕೇತರ ಹಣಕಾಸು ಕಂಪನಿಗಳು (ಎನ್‌ಬಿಎಫ್‌ಸಿ) ಗ್ರಾಮೀಣ ಪ್ರದೇಶದ ಜನರಿಗೆ ಕಿರುಕುಳ ನೀಡುತ್ತಿವೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಯಿತು.
ಇಲ್ಲಿನ ಜಯದೇವ ವೃತ್ತದಲ್ಲಿ ಜಮಾಯಿಸಿದ ರೈತರು ಎನ್‌ಬಿಎಫ್‌ಸಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಇಲ್ಲಿಂದ ದ್ವಿಚಕ್ರ ವಾಹನದಲ್ಲಿ ಮೆರವಣಿಗೆ ಹೊರಟ ಪ್ರತಿಭಟನಕಾರರು ಅಶೋಕ ರಸ್ತೆ, ಪಿ.ಬಿ. ರಸ್ತೆ ಮೂಲಕ ಉಪವಿಭಾಗಾಧಿಕಾರಿ ಕಚೇರಿ ತಲುಪಿ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಬ್ಯಾಂಕೇತರ ಹಣಕಾಸು ಕಂಪನಿಗಳು ‘ಸರ್ಫೇಸಿ’ (ಆರ್ಥಿಕ ಸ್ವತ್ತುಗಳ ಭದ್ರತೆ, ಪುನಾರಚನೆ ಹಾಗೂ ಭದ್ರತೆ) ಕಾಯ್ದೆಯನ್ನು ದುರುಪಯೋಗ ಮಾಡಿಕೊಂಡು ರೈತರಿಗೆ ಕಿರುಕುಳ ನೀಡುತ್ತಿವೆ. ಈ ಕಾಯ್ದೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಿದ್ದುಪಡಿ ತಂದು ಜನಸ್ನೇಹಿಯಾಗಿ ರೂಪಿಸಬೇಕು ಎಂದು ಆಗ್ರಹಿಸಿದರು.
‘ಎನ್‌ಬಿಎಫ್‌ಸಿ’ ಸಂಸ್ಥೆಗಳು ಗ್ರಾಮೀಣ ಪ್ರದೇಶದ ರೈತರು ಮತ್ತು ಕೂಲಿ ಕಾರ್ಮಿಕರಿಗೆ ಗೃಹ ಸಾಲ ನೀಡುತ್ತಿವೆ. ಈ ವೇಳೆ ಖಾಲಿ ಅರ್ಜಿಗಳಿಗೆ ಸಹಿ ಮಾಡಿಸಿಕೊಳ್ಳಲಾಗುತ್ತದೆ. ಸಾಲ ವಸೂಲಾತಿಯ ಸಂದರ್ಭದಲ್ಲಿ ಇವುಗಳನ್ನು ಬ್ಯಾಂಕುಗಳು ದುರುಪಯೋಗ ಮಾಡಿಕೊಳ್ಳುತ್ತಿವೆ. ಒತ್ತಡದ ಮೂಲಕ ಸಾಲ ವಸೂಲಿ ಮಾಡುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಂಘದ ಅಧ್ಯಕ್ಷ ಹುಚ್ಚವನಹಳ್ಳಿ ಮಂಜುನಾಥ್, ಮುಖಂಡರಾದ ಯಲೋದಳ್ಳಿ ರವಿಕುಮಾರ್, ಹೂವಿನಮಡು ನಾಗರಾಜ್, ಆಲೂರು ಪರಶುರಾಮ, ಹುಚ್ಚವನಹಳ್ಳಿ ಪ್ರಕಾಶ್, ರಾಜು ರಾಜನಹಟ್ಟಿ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.