ಹೊನ್ನಾಳಿ: ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆ ಉದ್ದೇಶದೊಂದಿಗೆ ರಾಜ್ಯ ಸಂಪನ್ಮೂಲ ತರಬೇತುದಾರ ನಂದೀಶ್ ಬಿ. ಶೆಟ್ಟರ್ ಅವರಿಂದ ವಿದ್ಯಾರ್ಥಿಗಳಿಗೆ ಪರೀಕ್ಷಾ ಸಿದ್ಧತೆ ಕುರಿತು ತರಬೇತಿ ನೀಡಲು ಪ್ರೇರಣಾ ಶಿಬಿರಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಸಿ. ನಂಜರಾಜ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪರೀಕ್ಷೆ ಬರೆಯುವ ವಿಧಾನ, ನೆನಪಿಟ್ಟುಕೊಳ್ಳುವ ವಿಧಾನ ಇತ್ಯಾದಿ ಕುರಿತು ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕಿನಲ್ಲಿ ಪ್ರತ್ಯೇಕವಾಗಿ ಶಿಬಿರಗಳು ನಡೆಯಲಿವೆ. ಹೊನ್ನಾಳಿಯಲ್ಲಿ ಜ.19 ರಂದು ಎಚ್. ಕಡದಕಟ್ಟೆ ಸಮೀಪದ ಸಾಯಿ ಗುರುಕುಲ ವಿದ್ಯಾಸಂಸ್ಥೆಯಲ್ಲಿ ಬೆಳಿಗ್ಗೆ 9 ಗಂಟೆಗೆ ಹಾಗೂ ಅದೇ ದಿನ ನ್ಯಾಮತಿಯ ಎಪಿಎಂಸಿ ಸಭಾಂಗಣದಲ್ಲಿ ಮಧ್ಯಾಹ್ನ 1.30ಕ್ಕೆ ಶಿಬಿರ ನಡೆಯಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಅವಳಿ ತಾಲ್ಲೂಕಿನ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಸಮಯಕ್ಕೆ ಸರಿಯಾಗಿ ಕಡ್ಡಾಯವಾಗಿ ಹಾಜರಾಗಬೇಕು. ಇಬ್ಬರು ಶಿಕ್ಷಕರನ್ನು ನಿಯೋಜಿಸಿ, ಅವರು ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆದುಕೊಂಡು ಬಂದು ಶಿಬಿರ ಮುಗಿದ ನಂತರ ವಾಪಸ್ ಕರೆದುಕೊಂಡು ಹೋಗತಕ್ಕದ್ದು ಎಂದು ಅವರು ಮುಖ್ಯ ಶಿಕ್ಷಕರಿಗೆ ಸೂಚನೆ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.