ಚನ್ನಗಿರಿ: ‘ದಶಕಗಳಿಂದಲೂ ಬಗರ್‌ಹುಕುಂ ಸಾಗುವಳಿ ಮಾಡಿಕೊಂಡು ಬಂದಿರುವ ಬಡ ರೈತರಿಗೆ ಶೀಘ್ರದಲ್ಲಿ ಸಾಗುವಳಿ ಪತ್ರ ನೀಡಬೇಕು. ಬಡ ರೈತರಿಗೆ ಅನ್ಯಾಯವಾಗಲು ನಾನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ’ ಎಂದು ಶಾಸಕ ಬಸವರಾಜು ವಿ. ಶಿವಗಂಗಾ ಅಧಿಕಾರಿಗಳಿಗೆ ಸೂಚಿಸಿದರು.
ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಬಗರ್‌ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪಕ್ಷ, ಜಾತಿ, ಧರ್ಮ ಎಂದು ನೋಡದೇ ಅರ್ಹ ರೈತರಿಗೆ ಸಾಗುವಳಿ ಪತ್ರ ವಿತರಿಸಬೇಕು. ಸರ್ಕಾರದ ನಿಯಮದ ಅಡಿ ಸಾಗುವಳಿ ಪತ್ರಕ್ಕೆ ಅರ್ಜಿ ಸಲ್ಲಿಸಿದ ರೈತರ ದಾಖಲೆಗಳನ್ನು ಪರಿಶೀಲಿಸಿ ಮುಂದಿನ ಸಭೆಯಲ್ಲಿ ಮಾಹಿತಿ ನೀಡಬೇಕು. ಒಂದು, ಎರಡು ಎಕರೆ ಭೂಮಿಯನ್ನು ಉಳುಮೆ ಮಾಡಿಕೊಂಡು ಬಡ ರೈತರು ತಮ್ಮ ಜೀವನ ಸಾಗಿಸುತ್ತಿದ್ದಾರೆ. ಇಂತಹ ರೈತರಿಗೆ ಅರಣ್ಯ ಇಲಾಖೆ ಅಧಿಕಾರಿಗಳು ವಿನಾಕಾರಣ ತೊಂದರೆ ಹಾಗೂ ನೋಟಿಸ್ ಜಾರಿಗೊಳಿಸುತ್ತಿದ್ದಾರೆ. ಇದನ್ನು ಕೈ ಬಿಡಬೇಕು. ರೈತರಿಗೆ ನ್ಯಾಯ ಒದಗಿಸಲು ಅರಣ್ಯ ಇಲಾಖೆಯ ಅಧಿಕಾರಿಗಳು ಸೂಕ್ತ, ಸಲಹೆ, ಸಹಕಾರ ಹಾಗೂ ಮಾರ್ಗದರ್ಶನ ನೀಡಬೇಕು ಎಂದು ಹೇಳಿದರು.
ತಹಶೀಲ್ದಾರ್ ಜಿ.ಎಸ್. ಶಂಕರಪ್ಪ, ತಾಲ್ಲೂಕು ಪಂಚಾಯಿತಿ ಇಒ ಬಿ.ಕೆ. ಉತ್ತಮ, ಚನ್ನಗಿರಿ ವಲಯ ಅರಣ್ಯಾಧಿಕಾರಿ ಶ್ವೇತಾ, ಮಾವಿನಕಟ್ಟೆ ವಲಯದ ಹನುಮಂತಪ್ಪ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.