ದಾವಣಗೆರೆ: ನ್ಯಾಮತಿ ಪಟ್ಟಣದ ಭಾರತೀಯ ಸ್ಟೇಟ್ ಬ್ಯಾಂಕ್ (ಎಸ್‌ಬಿಐ)ನಲ್ಲಿ ನಡೆದಿದ್ದ ಚಿನ್ನಾಭರಣ ದರೋಡೆ ಪ್ರಕರಣದ ಶಂಕಿತರನ್ನು ವಶಕ್ಕೆ ಪಡೆಯುವ ಸಂದರ್ಭದಲ್ಲಿ ಪರಾರಿಯಾಗಲು ಯತ್ನಿಸಿದ ಆರೋಪಿ ಕಾಲಿಗೆ ಪೊಲೀಸರು ಗುಂಡೇಟು ನೀಡಿದ್ದಾರೆ.
ಹೊನ್ನಾಳಿ ತಾಲ್ಲೂಕಿನ ಅರಬಗಟ್ಟೆ ಬಳಿ ಭಾನುವಾರ ನಸುಕಿನಲ್ಲಿ ಈ ಘಟನೆ ನಡೆದಿದೆ. ಆರೋಪಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದು, ಪೊಲೀಸ್ ಕಾನ್‌ಸ್ಟೆಬಲ್ ಗಾಯಗೊಂಡಿದ್ದಾರೆ.
ದರೋಡೆಕೋರರ ಖಚಿತ ಮಾಹಿತಿ ಅರಿತ ಪೊಲೀಸರು ಶನಿವಾರ ಮಧ್ಯರಾತ್ರಿ ಅರಬಗಟ್ಟೆ ಸಮೀಪ ನಾಕಾಬಂಧಿ ಹಾಕಿದ್ದರು. ಭಾನುವಾರ ನಸುಕಿನಲ್ಲಿ ಅನುಮಾನಾಸ್ಪದವಾಗಿ ಸಂಚರಿಸುತ್ತಿದ್ದ ಮೂರು ಕಾರುಗಳನ್ನು ತಡೆದು ತಪಾಸಣೆಗೆ ಮುಂದಾಗಿದ್ದಾರೆ. ಪೊಲೀಸರನ್ನು ಕಂಡ ದುಷ್ಕರ್ಮಿಗಳು ಪರಾರಿಯಾಗಲು ಯತ್ನಿಸಿದ್ದಾರೆ. ಈ ವೇಳೆ ಒಂದು ಕಾರು ಬೆನ್ನಟ್ಟಿ ಆರೋಪಿಗಳನ್ನು ಹಿಡಿದ ಪೊಲೀಸರ ಮೇಲೆ ಪ್ರತಿ ದಾಳಿ ನಡೆದಿದೆ.
ಕಾರಿನಲ್ಲಿದ್ದ ನಾಲ್ವರ ಪೈಕಿ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಒಬ್ಬ ಆರೋಪಿ ಪೊಲೀಸರ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ್ದು, ಕಾನ್‌ಸ್ಟೆಬಲ್‌ವೊಬ್ಬರು ಗಾಯಗೊಂಡಿದ್ದಾರೆ. ಇನ್ನೂ ಎರಡು ಕಾರುಗಳಲ್ಲಿದ್ದ ಆರೋಪಿಗಳು ಪರಾರಿಯಾಗಿದ್ದಾರೆ. ದುಷ್ಕರ್ಮಿಗಳ ಬಂಧನಕ್ಕೆ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಗಾಯಗೊಂಡ ಶಂಕಿತ ಹಾಗೂ ಪೊಲೀಸ್ ಕಾನ್‌ಸ್ಟೆಬಲ್‌ಗೆ ನ್ಯಾಮತಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಚಿಗಟೇರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ವಶಕ್ಕೆ ಪಡೆದ ಎಲ್ಲರೂ ಉತ್ತರ ಭಾರತೀಯರಾಗಿದ್ದಾರೆ.
ನ್ಯಾಮತಿ ಪಟ್ಟಣದ ಎಸ್‌ಬಿಐ ಬ್ಯಾಂಕಿನಲ್ಲಿ ಅ.26ರಂದು ಚಿನ್ನಾಭರಣ ದರೋಡೆ ನಡೆದಿತ್ತು. ಪ್ರಕರಣದ ತನಿಖೆ ನಡೆಸಿದ ಪೊಲೀಸರು, ಆರೋಪಿಗಳ ಜಾಡು ಹಿಡಿದು ಉತ್ತರಪ್ರದೇಶ ಹಾಗೂ ಮಧ್ಯಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.