ADVERTISEMENT

ದಾವಣಗೆರೆ: ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆಗೆ ವಿರೋಧ

​ಪ್ರಜಾವಾಣಿ ವಾರ್ತೆ
Published 4 ಡಿಸೆಂಬರ್ 2020, 16:37 IST
Last Updated 4 ಡಿಸೆಂಬರ್ 2020, 16:37 IST
ಮರಾಠ ಅಭಿವೃದ್ದಿ ನಿಗಮ ಸ್ಥಾಪನೆ ವಿರೋಧಿಸಿ ಹಾಗೂ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿ ಜಿಲ್ಲಾ ಕನ್ನಡಪರ ಸಂಘಟನೆಗಳ ಒಕ್ಕೂಟ ಸದಸ್ಯರು ದಾವಣಗೆರೆಯ ಜಯದೇವ ವೃತ್ತದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು
ಮರಾಠ ಅಭಿವೃದ್ದಿ ನಿಗಮ ಸ್ಥಾಪನೆ ವಿರೋಧಿಸಿ ಹಾಗೂ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿ ಜಿಲ್ಲಾ ಕನ್ನಡಪರ ಸಂಘಟನೆಗಳ ಒಕ್ಕೂಟ ಸದಸ್ಯರು ದಾವಣಗೆರೆಯ ಜಯದೇವ ವೃತ್ತದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು   

ದಾವಣಗೆರೆ: ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ವಿರೋಧಿಸಿ ಹಾಗೂ ‘ಕನ್ನಡಪರ ಹೋರಾಟಗಾರರು ವಸೂಲಿಗಾರರು’ ಎಂಬ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ಖಂಡಿಸಿ ನಗರದಲ್ಲಿ ಶುಕ್ರವಾರ ಜಿಲ್ಲಾ ಕನ್ನಡಪರ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ ನಡೆಸಲಾಯಿತು.

ಅಂಬೇಡ್ಕರ್ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ನಡೆಸಿದ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಜಯದೇವ ವೃತ್ತದಲ್ಲಿ ಜಮಾಯಿಸಿದರು. ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.

ಬಸವಕಲ್ಯಾಣ ಉಪ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಮರಾಠಿಗರ ಮತಗಳನ್ನು ಸೆಳೆಯುವ ಉದ್ದೇಶದಿಂದ ರಾಜ್ಯ ಸರ್ಕಾರ ಮರಾಠ ಅಭಿವೃದ್ಧಿ ನಿಗಮ ಸ್ಥಾಪಿಸಿದೆ. ಇಷ್ಟು ದಿನ ಇಲ್ಲದ ಈ ನಿಗಮ ಈಗ ಯಾಕೆ ಬೇಕಿತ್ತು.ಕರ್ನಾಟಕದಲ್ಲಿರುವ ಮರಾಠಿಗರು ರಾಜ್ಯ ಸರ್ಕಾರಕ್ಕೆ ಏನಾದರೂ ಅರ್ಜಿ ಸಲ್ಲಿಸಿದ್ದರೇ? ಸರ್ಕಾರ ನಿಗಮ ಘೋಷಿಸಿ ನೆಮ್ಮದಿಯಿಂದ ಬದುಕುತ್ತಿರುವ ಕನ್ನಡಿಗರು ಮತ್ತು ಮರಾಠಿಗರ ಮಧ್ಯೆ ಬೆಂಕಿ ಹಚ್ಚಿದೆ ಎಂದು ಆರೋಪಿಸಿದರು.

ADVERTISEMENT

ಈಗ ರಾಜ್ಯದಲ್ಲಿರುವ ಎಲ್ಲ ಹಿಂದುಳಿದ ಜಾತಿಗಳ ಮುಖಂಡರು ತಮ್ಮ ಜಾತಿಗೆ ಒಂದು ಅಭಿವೃದ್ಧಿ ಪ್ರಾಧಿಕಾರ ಅಥವಾ ನಿಗಮಗಳನ್ನು ಸ್ಥಾಪಿಸಿ ಎಂದು ಒತ್ತಾಯಿಸಿ ಹೋರಾಟಗಳನ್ನು ಮಾಡುತ್ತಿದ್ದಾರೆ. ಹೀಗಿರುವಾಗ ರಾಜ್ಯ ಸರ್ಕಾರ ಯಾವ ಜಾತಿ ಮತ್ತು ಜನಾಂಗಗಳಿಗೆ ನ್ಯಾಯ ಒದಗಿಸಲು ಸಾಧ್ಯ. ಕೂಡಲೇ ಮರಾಠ ಅಭಿವೃದ್ಧಿ ನಿಗಮವನ್ನು ರದ್ದುಪಡಿಸಬೇಕು ಎಂದು ಆಗ್ರಹಿಸಿದರು.

ಕನ್ನಡಪರ ಹೋರಾಟಗಾರರು ವಸೂಲಿಗಾರರು ಎಂದು ಹೇಳಿಕೆ ನೀಡಿರುವ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಒಕ್ಕೂಟದ ಗೌರವಾಧ್ಯಕ್ಷ ಕೆ.ಜಿ. ಯಲ್ಲಪ್ಪ, ಅಧ್ಯಕ್ಷ ಎನ್.ಎಚ್. ಹಾಲೇಶ್, ಕಾರ್ಯಾಧ್ಯಕ್ಷ ವಿ. ಅನಿನಾಶ್, ಎಸ್. ರಾಜು, ನಾಗರಾಜ, ಡಾ. ಬಿ. ವಾಸುದೇವ್, ಎಂ.ಎ. ಸಾದಿಕ್, ಬೋಜರಾಜು, ಐಗೂರು ಸುರೇಶ್, ಡಿ. ಬಸವರಾಜು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.