ADVERTISEMENT

‘ಬೆಲೆ ಏರಿಕೆ ನಿಯಂತ್ರಿಸುವಲ್ಲಿ ಸರ್ಕಾರ ವಿಫಲ’

ಪೆಟ್ರೋಲ್, ಡಿಸೇಲ್, ಅಡುಗೆ ಅನಿಲ ದರ ಏರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 5 ಏಪ್ರಿಲ್ 2022, 5:35 IST
Last Updated 5 ಏಪ್ರಿಲ್ 2022, 5:35 IST
ಪೆಟ್ರೋಲ್, ಡಿಸೇಲ್, ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ದಾವಣಗೆರೆ ಜಿಲ್ಲಾ ಕಾಂಗ್ರೆಸ್‌ನಿಂದ ಸೋಮವಾರ ನಗರದ ಜಯದೇವ ವೃತ್ತದಲ್ಲಿ ಪ್ರತಿಭಟಿಸಲಾಯಿತು.
ಪೆಟ್ರೋಲ್, ಡಿಸೇಲ್, ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ದಾವಣಗೆರೆ ಜಿಲ್ಲಾ ಕಾಂಗ್ರೆಸ್‌ನಿಂದ ಸೋಮವಾರ ನಗರದ ಜಯದೇವ ವೃತ್ತದಲ್ಲಿ ಪ್ರತಿಭಟಿಸಲಾಯಿತು.   

ದಾವಣಗೆರೆ: ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಮತ್ತು ಔಷಧಗಳ ಬೆಲೆ ಏರಿಕೆ ಖಂಡಿಸಿ ದಾವಣಗೆರೆ ಜಿಲ್ಲಾ ಕಾಂಗ್ರೆಸ್‌ನಿಂದ ಸೋಮವಾರ ನಗರದಲ್ಲಿ ಪ್ರತಿಭಟಿಸಲಾಯಿತು.

ನಗರದ ಜಯದೇವ ವೃತ್ತದಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆ ಉಪವಿಭಾಗಾಧಿಕಾರಿ ಕಚೇರಿಗೆ ತೆರಳಿ ಪಕ್ಷದ ಮುಖಂಡರು ಮನವಿ ಸಲ್ಲಿಸಿದರು.

ಪ್ರತಿಭಟನೆಯ ನೇತೃತ್ವ ವಹಿಸಿದ್ದ ಕಾಂಗ್ರೆಸ್‌ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಬಿ. ಮಂಜಪ್ಪ, ‘ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಮತ್ತು ಔಷಧ ದರ ಏರಿಕೆಯನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನಿಯಂತ್ರಿಸದಿದ್ದರೆ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು’ ಎಂದು ಎಚ್ಚರಿಸಿದರು.

ADVERTISEMENT

ಕೆಪಿಸಿಸಿ ವಕ್ತಾರ ಡಿ.ಬಸವರಾಜ್, ‘ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಂದು ಪ್ರತಿ ಲೀಟರ್‌ಗೆ 80 ಪೈಸೆ ಏರಿಕೆಯಾಗಿದೆ. 10 ದಿನಗಳಲ್ಲಿ ಪ್ರತಿ ಲೀಟರ್‌ಗೆ ₹ 6.40 ಹೆಚ್ಚಾಗಿದೆ. ಬೆಲೆ ಏರಿಕೆ ನಿಯಂತ್ರಿಸುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ದಾವಣಗೆರೆ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಯೂಬ್ ಪೈಲ್ವಾನ್, ‘ದೇಶದಲ್ಲಿ ಹಿಂದೂ–ಮುಸ್ಲಿಂ ಸೇರಿ ಎಲ್ಲಾ ಧರ್ಮ–ಜಾತಿಯವರು ಸಹೋದರರಂತೆ ಜೀವನ ನಡೆಸುತ್ತಿದ್ದಾರೆ. ಆದರೆ, ಬಿಜೆಪಿಗರು ತಮ್ಮ ಆಡಳಿತ ವೈಫಲ್ಯವನ್ನು ಮುಚ್ಚಿಕೊಳ್ಳಲು ಹಿಜಾಬ್, ಹಲಾಲ್ ಎಂದು ಸಮಾಜದಲ್ಲಿ ಶಾಂತಿ ಕೆಡಿಸುತ್ತಿದ್ದಾರೆ’ ಎಂದು ದೂರಿದರು.

ದಾವಣಗೆರೆ ಉತ್ತರ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಾಗಾನಹಳ್ಳಿ ಪರಶುರಾಮ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ, ಕಾಂಗ್ರೆಸ್ ಪಕ್ಷದ ಜಿಲ್ಲಾ ವಕ್ತಾರರಾದ ನಾಗರತ್ನಮ್ಮ, ದಾವಣಗೆರೆ ಉತ್ತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಜಿ.ಶಿವಕುಮಾರ್, ಎಪಿಎಂಸಿ ಮಾಜಿ ಅಧ್ಯಕ್ಷ ಮುದೇಗೌಡ್ರು ಗಿರೀಶ್, ಪಾಲಿಕೆ ಸದಸ್ಯ ಎ.ನಾಗರಾಜ್, ಕೆ.ಚಮನ್ ಸಾಬ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಸ್.ಮಲ್ಲಿಕಾರ್ಜುನ್, ಉಪಾಧ್ಯಕ್ಷ ಎಚ್.ಜಯಣ್ಣ, ಯುವ ಕಾಂಗ್ರೆಸ್ ಅಧ್ಯಕ್ಷ ನಿಖಿಲ್ ಕೊಂಡಜ್ಜಿ, ಉಪಾಧ್ಯಕ್ಷ ಸಾಗರ್, ರಾಘವೇಂದ್ರ ಗೌಡ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.