ADVERTISEMENT

ದಾವಣಗೆರೆ | ‘ಯೋಜನೆ ಯಶಸ್ಸಿನಲ್ಲಿ ಕಾರ್ಯಕರ್ತೆಯರ  ಪಾತ್ರ ದೊಡ್ಡದು’

ರಾಷ್ಟ್ರೀಯ ಪೋಷಣ್ ಅಭಿಯಾನ ಮಾಸಾಚರಣೆ

​ಪ್ರಜಾವಾಣಿ ವಾರ್ತೆ
Published 19 ಅಕ್ಟೋಬರ್ 2025, 5:30 IST
Last Updated 19 ಅಕ್ಟೋಬರ್ 2025, 5:30 IST
ಹರಿಹರದಲ್ಲಿ ಶುಕ್ರವಾರ ಆಯೋಜಿಸಿದ್ದ ಪೋಷಣ್ ಅಭಿಯಾನ ಕಾರ್ಯಕ್ರಮವನ್ನು ಶಾಸಕ ಬಿ.ಪಿ.ಹರೀಶ್ ಉದ್ಘಾಟಿಸಿದರು
ಹರಿಹರದಲ್ಲಿ ಶುಕ್ರವಾರ ಆಯೋಜಿಸಿದ್ದ ಪೋಷಣ್ ಅಭಿಯಾನ ಕಾರ್ಯಕ್ರಮವನ್ನು ಶಾಸಕ ಬಿ.ಪಿ.ಹರೀಶ್ ಉದ್ಘಾಟಿಸಿದರು   

ಹರಿಹರ: ‘ರಾಷ್ಟ್ರೀಯ ಪೋಷಣ್ ಅಭಿಯಾನ ಸೇರಿದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಯಶಸ್ಸಿನಲ್ಲಿ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರ ಪಾತ್ರ ಮಹತ್ವದ್ದಾಗಿದೆ’ ಎಂದು ಶಾಸಕ ಬಿ.ಪಿ. ಹರೀಶ್ ಅಭಿಪ್ರಾಯಪಟ್ಟರು.

ನಗರದ ಗುರುಭವನದಲ್ಲಿ ಶುಕ್ರವಾರ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶಿಶು ಅಭಿವೃದ್ಧಿ ಯೋಜನೆಯಿಂದ ರಾಷ್ಟ್ರೀಯ ಪೋಷಣ್ ಅಭಿಯಾನ ಯೋಜನೆಯಡಿ ಆಯೋಜಿಸಿದ್ದ ಪೋಷಣ್ ಮಾಸಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಪ್ರಧಾನಿ ನರೇಂದ್ರ ಮೋದಿ ಅವರು 2018ರ ಮಾರ್ಚ್ ತಿಂಗಳಲ್ಲಿ ರಾಜಸ್ಥಾನದ ಜುಂಝುನ್ ನಲ್ಲಿ ರಾಷ್ಟ್ರೀಯ ಪೋಷಣ್ ಅಭಿಯಾನವನ್ನು ಪ್ರಾರಂಭಿಸಿದರು. ಹುಟ್ಟಿದ ಮಗುವಿನಿಂದ 6 ವರ್ಷ ವಯೋಮಾನದ ಮಕ್ಕಳು ಹಾಗೂ ಹಾಲುಣಿಸುವ ತಾಯಂದಿರ ಪೌಷ್ಟಿಕತೆ ಸುಧಾರಿಸುವ ಉದ್ದೇಶದಿಂದ ಈ ಯೋಜನೆ ಜಾರಿಯಾಗಿದೆ ಎಂದರು.

ADVERTISEMENT

ಅಪೌಷ್ಟಿಕತೆ ಮುಕ್ತ ಭಾರತ ನಿರ್ಮಾಣ, ಗರ್ಭಿಣಿಯರು ಮತ್ತು ಮಕ್ಕಳ ಸಮಗ್ರ ಅಭಿವೃದ್ಧಿ, ಪೌಷ್ಟಿಕಾಂಶ ಖಚಿತಪಡಿಸುವುದು ಈ ಯೋಜನೆಯ ಮುಖ್ಯ ಗುರಿಯಾಗಿದೆ. ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಸರ್ಕಾರ ಈ ಸೇವೆಯನ್ನು ಯಶಸ್ವಿಯಾಗಿ ತಲುಪಿಸುತ್ತಿದೆ ಎಂದು ತಿಳಿಸಿದರು.

ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರ ವೇತನ ಸರಿಯಾದ ಸಮಯಕ್ಕೆ ದೊರೆಯುವಂತೆ ಸರ್ಕಾರ ನಿಗಾ ವಹಿಸಬೇಕು. ಅವರ ಸೇವೆಯನ್ನು ಶಾಶ್ವತಗೊಳಿಸುವತ್ತ ಸರ್ಕಾರ ಗಮನ ಹರಿಸಬೇಕು ಎಂದು ನಗರಸಭೆ ಅಧ್ಯಕ್ಷೆ ಕವಿತಾ ಮಾರುತಿ ಬೇಡರ್ ಮನವಿ ಮಾಡಿದರು.

2018 ರಿಂದ ಆರಂಭಗೊಂಡಿರುವ ಈ ಯೋಜನೆಯಡಿ ಪ್ರತಿ ವರ್ಷ ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳಲ್ಲಿ ಪೋಷಣ್ ಮಾಸಾಚರಣೆ ನಡೆಯುತ್ತದೆ. ಇದರ ಉದ್ದೇಶ ಪೌಷ್ಟಿಕತೆಯ ಕುರಿತು ಜನರಲ್ಲಿ ಜಾಗೃತಿ ಮೂಡಿಸುವುದಾಗಿದೆ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಈ.ವೈ. ಪ್ರಿಯದರ್ಶಿನಿ ಹೇಳಿದರು.

ಸಮಾಜ ಕಲ್ಯಾಣ ಇಲಾಖೆಯ ಹನುಮಂತಪ್ಪ, ಆರೋಗ್ಯಯ ನಾಗರಾಜ್, ಶಿಕ್ಷಕ ಬಸವರಾಜಯ್ಯ ಹಾಗೂ ಶಿಶು ಅಭಿವೃದ್ಧಿ ಇಲಾಖೆಯ ಸಿಬ್ಬಂದಿ, ಅಂಗನವಾಡಿ, ಆಶಾ ಕಾರ್ಯಕರ್ತೆಯರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.