
ಹರಿಹರ: ಕೆಪಿಎಸ್ ಮ್ಯಾಗ್ನೆಟ್ ಯೋಜನೆಯಡಿ ತಾಲ್ಲೂಕಿನ ಹಲವು ಸರ್ಕಾರಿ ಶಾಲೆಗಳನ್ನು ಮುಚ್ಚುವ ರಾಜ್ಯ ಸರ್ಕಾರದ ನಿರ್ಧಾರ ಖಂಡಿಸಿ ಐಐಡಿಎಸ್‌ಒ ಹಾಗೂ ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿ ನೇತೃತ್ವದಲ್ಲಿ ಮಂಗಳವಾರ ನಗರದ ಗಾಂಧಿ ಸರ್ಕಲ್‌ನಲ್ಲಿ ಪ್ರತಿಭಟನಾ ಸಮಾವೇಶ ನಡೆಸಲಾಯಿತು.
ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಆದೇಶಗಳ ಪ್ರಕಾರ, ರಾಜ್ಯದಾದ್ಯಂತ 5,900 ಗ್ರಾಮ ಪಂಚಾಯಿತಿಗಳ ಸರ್ಕಾರಿ ಶಾಲೆಗಳನ್ನು ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳಾಗಿ ಪರಿವರ್ತಿಸಲು ನಿರ್ಧರಿಸಲಾಗಿದೆ. ಈ ಯೋಜನೆಯಲ್ಲಿ 5 ಕಿ.ಮೀ. ವ್ಯಾಪ್ತಿಯ ಸಾವಿರಾರು ಸರ್ಕಾರಿ ಶಾಲೆಗಳನ್ನು ಕೊಲ್ಲುವ ಹುನ್ನಾರ ಅಡಗಿದೆ ಎಂದು ಐಐಡಿಎಸ್‌ಒ ರಾಜ್ಯ ಕಾರ್ಯದರ್ಶಿ ಅಜಯ್ ಕಾಮತ್ ಆಕ್ರೋಶ ವ್ಯಕ್ತಪಡಿಸಿದರು.
ಕಾಂಗ್ರೆಸ್ ಮತ್ತು ಬಿಜೆಪಿ ಒಂದೆ ನಾಣ್ಯದ ಎರಡು ಮುಖಗಳು. ಒಂದು, ಕೆಲವರನ್ನು ಒಲಿಸುವ ರಾಜಕೀಯ ಮಾಡಿದರೆ, ಇನ್ನೊಂದು, ದ್ವೇಷ ಹುಟ್ಟುಹಾಕುತ್ತದೆ. ಕೆಪಿಎಸ್ ಮ್ಯಾಗ್ನೆಟ್ ಯೋಜನೆಗೆ ಎರಡು ಪಕ್ಷಗಳು ಬೆಂಬಲವಾಗಿವೆ ಎಂದು ಎಐಡಿಎಸ್ ಒ ರಾಜ್ಯ ಉಪಾಧ್ಯಕ್ಷೆ ಅಪೂರ್ವ ಸಿ.ಎಂ. ಎಂದರು.
ಸರ್ಕಾರಿ ಶಾಲೆಗಳನ್ನು ಮುಚ್ಚಲು ಈ ಹಿಂದೆ ಬಿಜೆಪಿ ಸರ್ಕಾರ ಪ್ರಯತ್ನಿಸಿತ್ತು. ಇದನ್ನು ವಿರೋಧಿಸುತ್ತಲೇ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರವು ಮತ್ತೆ ಈ ನೀತಿಯನ್ನು ಇನ್ನಷ್ಟು ಕರಾಳ ಮಾದರಿಯಲ್ಲಿ ಜಾರಿಗೊಳಿಸುತ್ತಿದೆ. ಈ ವಿಷಯದಲ್ಲಿ ಎಲ್ಲ ರಾಜಕೀಯ ಪಕ್ಷಗಳು ಸಹ ಶಾಮೀಲಾಗಿವೆ ಎಂದು ಆಶ್ರಯ ಕಾಲೋನಿಯ ಸಾರ್ವಜನಿಕ ಶಿಕ್ಷಣ ಉಳಿಸಿ ಪೋಷಕರ ಸಮಿತಿಯ ಅಧ್ಯಕ್ಷ ಡಿ.ಹನುಮಂತಪ್ಪ ಆಕ್ರೋಶ ವ್ಯಕ್ತಪಡಿಸಿದರು.
ಎಐಡಿಎಸ್‌ಒ ಜಿಲ್ಲಾ ಘಟಕದ ಅಧ್ಯಕ್ಷೆ ಪೂಜಾ ನಂದಿಹಳ್ಳಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಘಟಕದ ಕಾರ್ಯದರ್ಶಿ ಸುಮನ್ ಟಿ.ಎಸ್., ಸಂಯುಕ್ತ ಬೀದಿಬದಿ ವ್ಯಾಪಾರಸ್ಥರ ಸಂಘದ ಮುಖಂಡರಾದ ಮಂಜುಳಾ ಡಿ., ವೈದ್ಯರಾದ ನಸೀರ್ ಮಾತನಾಡಿದರು.
ರೇಣುಕಾ, ಕಲೀಮುಲ್ಲಾ, ಪೂರ್ಣಿಮಾ, ಸಲ್ಮಾ ಬಾನು, ಲಕ್ಷ್ಮಿ, ಗುತ್ಯಮ್ಮ ಹಾಗೂ ಪೋಷಕರು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.