ADVERTISEMENT

ಸಾಂಕ್ರಾಮಿಕ ರೋಗಗಳ ಅರಿವು ಮೂಡಿಸಿ

ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶೈಲಜಾ ಬಸವರಾಜ್

​ಪ್ರಜಾವಾಣಿ ವಾರ್ತೆ
Published 15 ಜುಲೈ 2019, 19:44 IST
Last Updated 15 ಜುಲೈ 2019, 19:44 IST
ದಾವಣಗೆರೆಯ ಜಿಲ್ಲಾ ಕ್ಷಯರೋಗ ನಿಯಂತ್ರಣ ಕೇಂದ್ರದಿಂದ ನಡೆದ ಕ್ಷಯ ರೋಗ ಪತ್ತೆ ಮತ್ತು ಚಿಕಿತ್ಸೆ ಆಂದೋಲನವನ್ನು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶೈಲಜಾ ಬಸವರಾಜ ಉದ್ಘಾಟಿಸಿದರು
ದಾವಣಗೆರೆಯ ಜಿಲ್ಲಾ ಕ್ಷಯರೋಗ ನಿಯಂತ್ರಣ ಕೇಂದ್ರದಿಂದ ನಡೆದ ಕ್ಷಯ ರೋಗ ಪತ್ತೆ ಮತ್ತು ಚಿಕಿತ್ಸೆ ಆಂದೋಲನವನ್ನು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶೈಲಜಾ ಬಸವರಾಜ ಉದ್ಘಾಟಿಸಿದರು   

ದಾವಣಗೆರೆ: ಕ್ಷಯ ಒಂದು ಸಾಂಕ್ರಾಮಿಕ ರೋಗವಾಗಿದ್ದು, ಇದನ್ನು ನಿರ್ಮೂಲನೆಗೆ ರೋಗಗಳು ಹಾಗೂ ಅವುಗಳ ಲಕ್ಷಣಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಜಿ.ಎನ್. ಶೈಲಜಾ ಬಸವರಾಜ್ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಜಿಲ್ಲಾ ಕ್ಷಯರೋಗ ನಿಯಂತ್ರಣ ಕೇಂದ್ರಗಳ ಸಂಯುಕ್ತಾಶ್ರಯದಲ್ಲಿ ಸೋಮವಾರ ನಗರದ ಕುಟುಂಬ ಕಲ್ಯಾಣ ಕೇಂದ್ರ-2ರಲ್ಲಿ ಆಯೋಜಿಸಿದ್ದ ಕ್ಷಯ ರೋಗ ಪತ್ತೆ ಮತ್ತು ಚಿಕಿತ್ಸೆ ಆಂದೋಲನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಾಂಕ್ರಾಮಿಕವಲ್ಲದ ರೋಗಗಳಿಂದ ರೋಗಿಗಳಷ್ಟೇ ಬಳಲುತ್ತಾರೆ. ಆದರೆ ಸಾಂಕ್ರಮಿಕ ರೋಗಗಳು ಇತರರಿಗೆ ಹರಡುವುದರಿಂದ ಎಲ್ಲರಿಗೂ ತೊಂದರೆಯಾಗುತ್ತದೆ. ಆದ್ದರಿಂದ ಸಾಂಕ್ರಾಮಿಕ ರೋಗಗಳ ನಿರ್ಮೂಲನೆ ಪ್ರತಿಯೊಬ್ಬರ ಜವಾಬ್ದಾರಿ ಎಂದರು.

ADVERTISEMENT

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಚ್.ಎಸ್ ರಾಘವೇಂದ್ರಸ್ವಾಮಿ ಮಾತನಾಡಿ, ‘ಸಾಂಕ್ರಾಮಿಕ ರೋಗಗಳು ಹೆಚ್ಚಾಗಿ ಜೂನ್‍ನಿಂದ ಸೆಪ್ಟೆಂಬರ್‍ವರೆಗೆ ಕಂಡು ಬರುತ್ತವೆ. ಕ್ಷಯ ರೋಗಿಗಳನ್ನು ಮನೆಗಳಲ್ಲಿ ಕಡೆಗಣಿಸಲಾಗುತ್ತದೆ. ಆದ್ದರಿಂದ ಕ್ಷಯ ರೋಗಿಗಳಿಗೆ ನಿಕ್ಷಯ ಪೋಷಣಾ ಯೋಜನೆಯಡಿ ಪೌಷ್ಟಿಕ ಆಹಾರ ಸೇವನೆಗೆ ಮಾಸಿಕವಾಗಿ ₹500 ಗಳನ್ನು ನೀಡಲಾಗುತ್ತಿದೆ’ ಎಂದರು.

ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ. ರಾಘವನ್ ಪ್ರಾಸ್ತಾವಿಕವಾಗಿ ಮಾತನಾಡಿ, ‘2025ರ ವೇಳೆಗೆ ದೇಶದಲ್ಲಿ ಕ್ಷಯರೋಗವನ್ನು ಕೊನೆಗಾಣಿಸಿ ‘ಕ್ಷಯಮುಕ್ತ ಭಾರತ’ ಎಂದು ಘೋಷಿಸುವ ಗುರಿಯನ್ನು ಹೊಂದಲಾಗಿದೆ. ಈ ನಿಟ್ಟಿನಲ್ಲಿ ಜುಲೈ 15ರಿಂದ 27ರವರೆಗೆ ಜಿಲ್ಲೆಯಾದ್ಯಂತ ಎಲ್ಲಾ ತಾಲೂಕುಗಳಲ್ಲಿ ಸಕ್ರಿಯ ಕ್ಷಯ ರೋಗ ಪತ್ತೆ ಆಂದೋಲನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

ಜಿಲ್ಲೆಯಾದ್ಯಂತ ನಗರದಲ್ಲಿರುವ ಕೊಳಚೆ ಪ್ರದೇಶಗಳು, ಕಟ್ಟಡ ನಿರ್ಮಾಣ ಕಾರ್ಮಿಕರು, ಉಪಹಾರಗೃಹ, ನಿರಾಶ್ರಿತ ಶಿಬಿರಗಳು, ವಸತಿ ಇಲ್ಲದವರು, ಬೀದಿ ಮಕ್ಕಳು ಮತ್ತು ಅನಾಥಾಶ್ರಮಗಳು ಗಣಿ ಪ್ರದೇಶಗಳು, ಕಲ್ಲು ಕ್ವಾರಿಗಳು, ಮಿಲ್ ಕೆಲಸಗಾರರು, ಕಾರ್ಮಿಕರು, ಅಸಂಘಟಿತ ಕಾರ್ಮಿಕರು, ಗುಡ್ಡಗಾಡು ಪ್ರದೇಶದ ಜನರನ್ನು ಕ್ಷಯ ರೋಗ ಪತ್ತೆ ಸಮೀಕ್ಷೆಗೆ ಒಳಪಡಿಸಲಾಗುವುದು’ ಎಂದು ತಿಳಿಸಿದರು.

ಇದೇ ವೇಳೆ ಐ.ಇ.ಸಿ ಸಾಮಗ್ರಿಗಳ ಬಿಡುಗಡೆ ಮಾಡಲಾಯಿತು. ಕ್ಷಯ ರೋಗಿಗಳಿಗೆ ಪ್ರೋಟಿನ್ ಪೌಡರ್‍ ಅನ್ನು ವಿತರಿಸಲಾಯಿತು.

ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ಎ.ಎಂ ರೇಣುಕಾರಾಧ್ಯ, ಜಿಲ್ಲಾ ಕುಷ್ಠ ರೋಗ ನಿಯಂತ್ರಣಾಧಿಕಾರಿ ಡಾ. ಪಿ.ಡಿ. ಮುರುಳಿಧರ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಎಲ್.ಡಿ ವೆಂಕಟೇಶ್, ನಗರ ಕುಟುಂಬ ಕಲ್ಯಾಣಾಧಿಕಾರಿ ಡಾ.ಪಿ.ಕೆ. ವೆಂಕಟೇಶ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.