ADVERTISEMENT

ದಾವಣಗೆರೆ: ರಾಜ್ಯೋತ್ಸವ ಸರಳ ಆಚರಣೆಗೆ ನಿರ್ಧಾರ

ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ

​ಪ್ರಜಾವಾಣಿ ವಾರ್ತೆ
Published 20 ಅಕ್ಟೋಬರ್ 2020, 13:50 IST
Last Updated 20 ಅಕ್ಟೋಬರ್ 2020, 13:50 IST
ದಾವಣಗೆರೆ ಜಿಲ್ಲಾಡಳಿತ ಭವನದಲ್ಲಿ ಮಂಗಳವಾರ ನಡೆದ ಕನ್ನಡ ರಾಜ್ಯೋತ್ಸವ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಮಾತನಾಡಿದರು.  – ಪ್ರಜಾವಾಣಿ ಚಿತ್ರ
ದಾವಣಗೆರೆ ಜಿಲ್ಲಾಡಳಿತ ಭವನದಲ್ಲಿ ಮಂಗಳವಾರ ನಡೆದ ಕನ್ನಡ ರಾಜ್ಯೋತ್ಸವ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಮಾತನಾಡಿದರು.  – ಪ್ರಜಾವಾಣಿ ಚಿತ್ರ   

ದಾವಣಗೆರೆ: ಕೋವಿಡ್ ನಿಯಂತ್ರಣ ಮಾರ್ಗಸೂಚಿ ಹಾಗೂ ಚುನಾವಣಾ ಮಾದರಿ ನೀತಿ ಸಂಹಿತೆಯನ್ನು ಪಾಲಿಸಿಕೊಂಡು ಈ ಬಾರಿಯ ಕನ್ನಡ ರಾಜ್ಯೋತ್ಸವವನ್ನು ಜಿಲ್ಲಾ ಕೇಂದ್ರದಲ್ಲಿ ನವೆಂಬರ್‌ 1ರಂದು ಸರಳ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೇಳಿದರು.

ಕನ್ನಡ ರಾಜ್ಯೋತ್ಸವ ಆಚರಣೆ ಸಂಬಂಧ ಜಿಲ್ಲಾಡಳಿತ ಭವನದಲ್ಲಿ ಮಂಗಳವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

‘ಈ ಬಾರಿಯ ಕನ್ನಡ ರಾಜ್ಯೋತ್ಸವ ಪ್ರತಿ ಬಾರಿಗಿಂತ ಭಿನ್ನವಾಗಿರಲಿದೆ. ಹೊರಾಂಗಣದಲ್ಲಿ ಏರ್ಪಡಿಸುವ ಕಾರ್ಯಕ್ರಮಗಳಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅನೇಕ ನಿಯಮಗಳನ್ನು ರೂಪಿಸಿವೆ. ಜೊತೆಗೆ ಆಗ್ನೇಯ ಪದವೀಧರ ಕ್ಷೇತ್ರಕ್ಕೂ ಚುನಾವಣೆ ನಡೆಯುತ್ತಿರುವುದರಿಂದ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಇದನ್ನೂ ಪಾಲಿಸಬೇಕಿದೆ. ಹೀಗಾಗಿ ಈ ಬಾರಿ ಕನ್ನಡ ತಾಯಿಯ ಹಬ್ಬವನ್ನು ಸರಳವಾಗಿ ಆಚರಿಸಲಾಗುವುದು’ ಎಂದು ತಿಳಿಸಿದರು.

ADVERTISEMENT

ನವೆಂಬರ್‌ 1ರಂದು ಬೆಳಿಗ್ಗೆ 8ಕ್ಕೆ ಕನ್ನಡ ತಾಯಿ ಭುವನೇಶ್ವರಿ ದೇವಿಯ ಮೆರವಣಿಗೆ ನಗರದಲ್ಲಿ ಪ್ರಾರಂಭವಾಗಲಿದೆ. ಆರು ಕಲಾ ತಂಡಗಳು ಮಾತ್ರ ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿವೆ. ಬೆಳಿಗ್ಗೆ 10ಕ್ಕೆ ಜಿಲ್ಲಾ ಕ್ರೀಡಾಂಗಣದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಲಾಗುವುದು. ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಸ್ತಬ್ಧಚಿತ್ರ ಪ್ರದರ್ಶನ ಹಾಗೂ ಅಭಿವೃದ್ಧಿಪರ ಭಾಷಣ ಇರುವುದಿಲ್ಲ. ಕೋವಿಡ್ ಕಾರಣಕ್ಕೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮಕ್ಕಳಿಗೆ ಅವಕಾಶವಿಲ್ಲ. ಸಾಂಸ್ಕೃತಿಕ ಕಾರ್ಯಕ್ರಮಗಳೂ ಇರುವುದಿಲ್ಲ ಎಂದು ಮಾಹಿತಿ ನೀಡಿದರು.

ಮೆರವಣಿಗೆ ಹಾಗೂ ಸಮಾರಂಭದಲ್ಲಿ ಎಲ್ಲರೂ ಕಡ್ಡಾಯವಾಗಿ ಮಾಸ್ಕ್‌ ಧರಿಸಬೇಕು. ಅಂತರ ಕಾಯ್ದುಕೊಳ್ಳಬೇಕು. ರಾಜ್ಯೋತ್ಸವದ ದಿನ ಹಾಗೂ ಮುನ್ನಾದಿನ ಜಿಲ್ಲೆಯ ಎಲ್ಲಾ ಸರ್ಕಾರಿ ಹಾಗೂ ಅರೆ ಸರ್ಕಾರಿ ಕಟ್ಟಡಗಳನ್ನು ಹಳದಿ ಹಾಗೂ ಕೆಂಪು ವಿದ್ಯುತ್ ದೀಪಗಳಿಂದ ಅಲಂಕಾರ ಮಾಡಬೇಕು ಎಂದು ಮನವಿ ಮಾಡಿದರು.

ನಗರದ ಎಲ್ಲಾ ಅಂಗಡಿ, ಸಂಸ್ಥೆಗಳ ನಾಮಫಲಕಗಳನ್ನು ಕಡ್ಡಾಯವಾಗಿ ಕನ್ನಡಮಯಗೊಳಿಸಬೇಕು. ಈ ನಿಟ್ಟಿನಲ್ಲಿ ನವೆಂಬರ್ ತಿಂಗಳಿನಲ್ಲಿಯೇ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕು. ಎಸ್ಸೆಸ್ಸೆಲ್ಸಿ ಪರೀಕ್ಷೆಯ ಕನ್ನಡ ವಿಷಯದಲ್ಲಿ 125ಕ್ಕೆ 125 ಅಂಕ ಗಳಿಸಿದವರನ್ನು ಗುರುತಿಸಿ ಜಿಲ್ಲಾಡಳಿತ ಸನ್ಮಾನ ಮಾಡಬೇಕು ಎಂದು ಕನ್ನಡ ಸಂಘಟನೆಗಳ ಪ್ರತಿನಿಧಿಗಳು ಒತ್ತಾಯಿಸಿದರು.

ಕನ್ನಡ ವಂಶದ ಮೊದಲ ದೊರೆ ಮಯೂರವರ್ಮನ ಪುತ್ಥಳಿಯನ್ನು ಜಿಲ್ಲಾ ಕೇಂದ್ರದಲ್ಲಿ ಸ್ಥಾಪಿಸಲು ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದೂ ಮನವಿ ಸಲ್ಲಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪದ್ಮ ಬಸವಂತಪ್ಪ, ಹೆಚ್ಚುವರಿ ಜಿಲ್ಲಾಧಿಕಾರಿ ಪೂಜಾರ್ ವೀರಮಲ್ಲಪ್ಪ, ಉಪವಿಭಾಗಾಧಿಕಾರಿ ಮಮತಾ ಹೊಸಗೌಡರ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ನಜ್ಮಾ, ಮಹಾನಗರ ಪಾಲಿಕೆ ಆಯುಕ್ತ ವಿಶ್ವನಾಥ್ ಮುದಜ್ಜಿ, ಡಿವೈಎಸ್‌ಪಿ ತಾಮ್ರಧ್ವಜ ಸೇರಿ ವಿವಿಧ ಇಲಾಖೆ ಅಧಿಕಾರಿಗಳು, ಜಿಲ್ಲೆಯ ವಿವಿಧ ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

ನವೆಂಬರ್‌ನಲ್ಲೇ ಸಾಧಕರಿಗೆ ಸನ್ಮಾನ

ವಿವಿಧ ಕಾರಣಗಳಿಂದಾಗ ಕಳೆದ ಬಾರಿಯೂ ಜಿಲ್ಲಾ ಮಟ್ಟದ ರಾಜ್ಯೋತ್ಸವ ಸಮಾರಂಭದಲ್ಲಿ ಸಾಧಕರಿಗೆ ಸನ್ಮಾನ ಮಾಡಿರಲಿಲ್ಲ. ಹೀಗಾಗಿ ಈ ಬಾರಿಯಾದರೂ ನೀತಿ ಸಂಹಿತೆ ಮುಗಿದ ಬಳಿಕ, ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ಮಾಡಿರುವವರನ್ನು ಗುರುತಿಸಿ, ಜಿಲ್ಲಾ ಮಟ್ಟದ ಸಮಾರಂಭದಲ್ಲಿ ಸನ್ಮಾನಿಸಬೇಕು. ಆಯ್ಕೆಗೊಂಡ ಸಾಧಕರ ಅಪರಾಧ ಹಿನ್ನೆಲೆಯನ್ನು ಪರಿಶೀಲಿಸಿದ ಬಳಿಕವೇ ಪಟ್ಟಿಯನ್ನು ಅಂತಿಮಗೊಳಿಸಬೇಕು ಎಂದು ಕನ್ನಡಪರ ಸಂಘಟನೆಗಳ ಪ್ರತಿನಿಧಿಗಳು ಮನವಿ ಮಾಡಿದರು.

‘ಎರಡೂ ವರ್ಷಗಳನ್ನು ಪರಿಗಣಿಸಿ ಸಾಧಕರನ್ನು ಗುರುತಿಸಿ ಆಯ್ಕೆ ಮಾಡಲು ಸನ್ಮಾನ ಸಮಿತಿಯನ್ನು ರಚಿಸಲಾಗುವುದು. ಸನ್ಮಾನಕ್ಕೆ ಆಯ್ಕೆಯಾದವರ ಅಂತಿಮ ಪಟ್ಟಿಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಸಲ್ಲಿಸಿ, ಅಂತಹವರ ಹಿನ್ನೆಲೆಯ ಬಗ್ಗೆ ವರದಿ ಪಡೆದ ಬಳಿಕವೇ ಆಯ್ಕೆ ಪಟ್ಟಿಯನ್ನು ಅಂತಿಮಗೊಳಿಸಲಾಗುವುದು. ನವೆಂಬರ್ ತಿಂಗಳ ಒಳಗಾಗಿ ಈ ಸಾಧಕರನ್ನು ಸನ್ಮಾನಿಸಲಾಗುವುದು’ ಎಂದು ಜಿಲ್ಲಾಧಿಕಾರಿ ಭರವಸೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.