ಭದ್ರಾವತಿ: ನಗರದ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ (ವಿಐಎಸ್ಎಲ್)ಗೆ ₹ 15,000 ಕೋಟಿ ಬಂಡವಾಳ ತೊಡಗಿಸುವ ಸಂಬಂಧ ಯೋಜನಾ ವರದಿ ತಯಾರಿಸಲು ಕೋಲ್ಕತ್ತದ ಸಂಸ್ಥೆಗೆ ಜವಾಬ್ದಾರಿ ವಹಿಸಲಾಗಿದ್ದು, ಶೀಘ್ರ ಕಾರ್ಖಾನೆಗೆ ಭೇಟಿ ನೀಡಲಿದೆ ಎಂದು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಎಚ್.ಡಿ. ಕುಮಾರಸ್ವಾಮಿ ಭರವಸೆ ನೀಡಿದರು.
ಮುಖಂಡ ಮಂಗೋಟೆ ರುದ್ರೇಶ್ ಹಾಗೂ ಕಾರ್ಮಿಕ ಸಂಘದ ಅಧ್ಯಕ್ಷ ಜೆ. ಜಗದೀಶ್ ನೇತೃತ್ವದ ಕಾರ್ಮಿಕರ ನಿಯೋಗ ಈಚೆಗೆ ನವದೆಹಲಿಯಲ್ಲಿ ಕುಮಾರಸ್ವಾಮಿ ಮತ್ತು ಸಂಸದ ಬಿ.ವೈ. ರಾಘವೇಂದ್ರ ಅವರನ್ನು ಭೇಟಿ ಮಾಡಿ, ಮನವಿ ಸಲ್ಲಿಸಿದ್ದು, ಸಚಿವರು ಭರವಸೆ ನೀಡಿದ್ದಾರೆ ಎಂದು ಕಾರ್ಮಿಕರು ತಿಳಿಸಿದ್ದಾರೆ.
ಕಾರ್ಖಾನೆಯನ್ನು ಮುಚ್ಚುವ ಪ್ರಕ್ರಿಯೆ ಕೈಬಿಟ್ಟು ಸೂಕ್ತ ಬಂಡವಾಳ ತೊಡಗಿಸುವಂತೆ ಮನವಿ ಸಲ್ಲಿಸಲಾಯಿತು. ಮನವಿ ಸ್ವೀಕರಿಸಿದ ಸಚಿವರು ಮತ್ತು ಸಂಸದರು ಕಾರ್ಖಾನೆಗೆ ₹ 15,000 ಕೋಟಿ ಬಂಡವಾಳ ಹೂಡಿಕೆ ಮಾಡುವ ಚಿಂತನೆ ನಡೆದಿದೆ. ಹೂಡಿಕೆ ವರದಿ ತಯಾರಿಸಲು ಕೋಲ್ಕತ್ತದ ಮೆ. ದುಸ್ತುರು ಕಂಪನಿ ಪ್ರೈ.ಲಿ ಸಂಸ್ಥೆಗೆ ಕಳುಹಿಸಿಕೊಡಲಾಗುವುದು. ಒಂದು ವಾರದೊಳಗೆ ವರದಿ ಪಡೆದು ಯೋಜನೆಯ ಪ್ರಸ್ತಾವ ಸರ್ಕಾರದ ಅನುಮೋದನೆಗೆ ಮಂಡಿಸಲಾಗುವುದು ಎಂದು ಭರವಸೆ ನೀಡಿದ್ದಾರೆ ಎಂದು ಕಾರ್ಮಿಕ ಸಂಘದ ಅಧ್ಯಕ್ಷ ಜೆ. ಜಗದೀಶ್ ತಿಳಿಸಿದ್ದಾರೆ.
‘ಸಂಸದ ಬಿ.ವೈ. ರಾಘವೇಂದ್ರ ಕಾರ್ಖಾನೆಗೆ ಬಂಡವಾಳ ಹೂಡಿಕೆ ಸಂಬಂಧ ಅಧಿವೇಶನದಲ್ಲಿ ಮಾತನಾಡಿ ಸರ್ಕಾರದ ಗಮನ ಸೆಳೆದು ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಕೋರುವುದಾಗಿ ತಿಳಿಸಿದ್ದಾರೆ’ ಎಂದು ಕಾರ್ಮಿಕರ ಮುಖಂಡು ವಿವರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.