ADVERTISEMENT

ಸದಾಶಿವ ಆಯೋಗದ ವರದಿ ಅವೈಜ್ಞಾನಿಕ: ಕರ್ನಾಟಕ ಬಂಜಾರ ರಕ್ಷಣಾ ವೇದಿಕೆ

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್‌ ಹೇಳಿಕೆಗೆ ಖಂಡನೆ

​ಪ್ರಜಾವಾಣಿ ವಾರ್ತೆ
Published 30 ಅಕ್ಟೋಬರ್ 2020, 15:02 IST
Last Updated 30 ಅಕ್ಟೋಬರ್ 2020, 15:02 IST
ಸರ್ದಾರ್ ಸೇವಾಲಾಲ್ ಸ್ವಾಮೀಜಿ
ಸರ್ದಾರ್ ಸೇವಾಲಾಲ್ ಸ್ವಾಮೀಜಿ   

ದಾವಣಗೆರೆ: ‘ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿಯನ್ನು ಜಾರಿಗೊಳಿಸಲು ಬದ್ಧ’ ಎಂಬ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್‌ ಹೇಳಿಕೆಯನ್ನು ಕರ್ನಾಟಕ ಬಂಜಾರ ರಕ್ಷಣಾ ವೇದಿಕೆ ಖಂಡಿಸಿದೆ.

‘ಶಿರಾ ಕ್ಷೇತ್ರದ ಉಪಚುನಾವಣೆ ಮತಯಾಚನೆ ಸಂದರ್ಭ ಕಟೀಲ್ ಅವರು ಈ ಹೇಳಿಕೆ ನೀಡಿದ್ದು, ಇದು ಪರಿಶಿಷ್ಟ ಜಾತಿಯಲ್ಲಿ 101 ಉಪಜಾತಿಗಳ ನಡುವೆ ಒಡಕು ತರಲಿದೆ. ನಾವು ಒಂದೇ ಮನೆಯ ಮನಸ್ಸುಗಳಂತೆ ಇದ್ದೇವೆ. ಇದನ್ನು ಒಡೆಯುವ ಕೆಲಸಕ್ಕೆ ಮುಂದಾಗಿದ್ದಾರೆ. ಕೂಡಲೇ ಈ ಹೇಳಿಕೆಯನ್ನು ವಾಪಸ್ ಪಡೆಯಬೇಕು. ಅಲ್ಲದೇ ಕ್ಷಮೆ ಯಾಚಿಸಬೇಕು’ ಎಂದು ಬಂಜಾರ ಗುರುಪೀಠದ ಸರ್ದಾರ್ ಸೇವಾಲಾಲ್ ಸ್ವಾಮೀಜಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು.

‘ಸದಾಶಿವ ಆಯೋಗದ ವರದಿಯನ್ನು ಜಾರಿಗೆ ತಂದರೆ ಒಳಮೀಸಲಾತಿಯ ಪ್ರಮಾಣ ಕಡಿಮೆಯಾಗುತ್ತದೆ. ಈ ವರದಿ ಅವೈಜ್ಞಾನಿಕವಾಗಿದ್ದು, ಸಮಾಜದವರಿಗೆ ಅನ್ಯಾಯವಾಗುತ್ತದೆ. ಹೀಗಾಗಿ ಈ ವರದಿ ಜಾರಿಯಾಗಬಾರದು. ನಮ್ಮಲ್ಲಿ ಕೆಲವರು ವಲಸೆ ಹೋಗಿದ್ದು, ಅವರ ಸ್ಥಿತಿಗತಿಗಳನ್ನು ಅಧ್ಯಯನ ಮಾಡಿ, ಅವರ ಸಾಮಾಜಿಕ, ಶೈಕ್ಷಣಿಕ ಸ್ಥಿತಿಗಳನ್ನು ಅರ್ಥ ಮಾಡಿಕೊಂಡು, ಸರ್ಕಾರ ನ್ಯಾಯಸಮ್ಮತವಾಗಿ ನಡೆದುಕೊಳ್ಳಬೇಕು’ ಎಂದು ಒತ್ತಾಯಿಸಿದರು.

ADVERTISEMENT

‘ಚುನಾವಣಾ ಲಾಭಕ್ಕಾಗಿ, ತಮ್ಮ ಸ್ವಾರ್ಥಕ್ಕಾಗಿ ಹೇಳಿಕೆ ನೀಡುತ್ತಿದ್ದಾರೆ. ಪಕ್ಷದ ಸ್ವಾರ್ಥಕ್ಕಾಗಿ ಈ ಹೇಳಿಕೆ ನೀಡುವುದು ಸರಿಯಲ್ಲ. ಈ ಕುರಿತು ಮುಂದಿನ ಹೋರಾಟವನ್ನು ರೂಪಿಸುವ ಬಗ್ಗೆ ಚಿತ್ರದುರ್ಗದ ಗುರುಪೀಠದಲ್ಲಿ ಶನಿವಾರ ನಡೆಯುವ ಮುಖಂಡರ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗುವುದು’ ಎಂದರು.

ರಾಜ್ಯ ಘಟಕದ ಅಧ್ಯಕ್ಷ ಕೆ.ಡಿ. ನಾಯ್ಕ್ ಮಾತನಾಡಿ, ‘ರಾಜಕೀಯ ಮುಖಂಡರು ಬೇಜವಾಬ್ದಾರಿ ಹೇಳಿಕೆಗಳನ್ನು ನೀಡಬಾರದು. ಈ ಹೇಳಿಕೆಯನ್ನು ಹಿಂಪಡೆಯದಿದ್ದರೆ ಸಂಘಟನೆಯ ಮೂಲಕ ರಾಜ್ಯವ್ಯಾಪಿ ಹೋರಾಟ ಮಾಡುತ್ತೇವೆ’ ಎಂದು ಎಚ್ಚರಿಸಿದರು.

‘ಕಳೆದ ಚುನಾವಣೆಯಲ್ಲಿ ಮಾಜಿ ಸಚಿವ ಎಚ್.ಆಂಜನೇಯ ಅವರು ಇದೇ ವಿಚಾರವಾಗಿ ಹೇಳಿಕೆ ನೀಡಿದ್ದರಿಂದ ಕಾಂಗ್ರೆಸ್ ಇಲ್ಲದಂತೆ ಆಯಿತು. ನಮ್ಮಲ್ಲಿ ಯಾವುದೇ ಒಡಕ್ಕಿಲ್ಲ. ನಮಗೆ ಮೀಸಲಾತಿ ಹೆಚ್ಚು ಬೇಕು. ಮನಸ್ಸು, ಮನೆ ಒಡೆಯುವ ಕೆಲಸ ಮಾಡುತ್ತಿದ್ದಾರೆ. ಇದನ್ನು ಕಾನೂನು ವ್ಯಾಪ್ತಿಗೆ ತರಲಿ’ ಎಂದು ಒತ್ತಾಯಿಸಿದರು.

ವೇದಿಕೆಯ ಗೌರವಾಧ್ಯಕ್ಷ ಆರ್.ವೆಂಕಟೇಶ್ ನಾಯ್ಕ್, ರಾಜ್ಯ ಕಾರ್ಯಾಧ್ಯಕ್ಷ ಬಸವರಾಜ ನಾಯ್ಕ್, ಪ್ರಧಾನ ಕಾರ್ಯದರ್ಶಿ ಅರುಣ್ ಎನ್., ಅಖಿಲ ಭಾರತ ಬಂಜಾರ ಸೇವಾ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಪ್ರವೀಣ್ ಕುಮಾರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.