
ಹರಿಹರ (ದಾವಣಗೆರೆ): ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ಪ್ರಮಾಣ ಏರಿಕೆ ಮಾಡಿರುವುದನ್ನು ಸಂವಿಧಾನದ 9ನೇ ಪರಿಚ್ಛೇದಕ್ಕೆ ಸೇರಿಸುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು ಶೀಘ್ರವೇ ದೆಹಲಿಗೆ ತೆರಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ತಾಲ್ಲೂಕಿನ ರಾಜನಹಳ್ಳಿಯ ವಾಲ್ಮೀಕಿ ಗುರುಪೀಠದಲ್ಲಿ ಸೋಮವಾರ ನಡೆದ ಮಹರ್ಷಿ ವಾಲ್ಮೀಕಿ ಜಾತ್ರಾ ಮಹೋತ್ಸವದ ಜನಜಾಗೃತಿ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.
‘ಜನಸಂಖ್ಯೆಗೆ ಅನುಗುಣವಾಗಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಮೀಸಲಾತಿಯನ್ನು ಶೇ 24.1ಕ್ಕೆ ಏರಿಕೆ ಮಾಡಿರುವುದರ ಪರವಾಗಿರುವ ಮುಖ್ಯಮಂತ್ರಿ ನಾನು. ಇದನ್ನು ಸಂವಿಧಾನದ 9ನೇ ಪರಿಚ್ಛೇದಕ್ಕೆ ಸೇರ್ಪಡೆ ಮಾಡದೇ ಇದ್ದರೆ ರಾಜ್ಯ ಸರ್ಕಾರದ ಪ್ರಯತ್ನ ವ್ಯರ್ಥವಾಗುತ್ತದೆ. ಸಂಸದರು ಕೂಡ ಕೇಂದ್ರ ಸರ್ಕಾರದ ಮೇಲೆ ಒತ್ತಡ ತರಬೇಕು’ ಎಂದು ಸಲಹೆ ನೀಡಿದರು.
‘2013ಕ್ಕೂ ಮುನ್ನ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ₹ 6,000 ಕೋಟಿ ಮಾತ್ರ ವೆಚ್ಚವಾಗುತ್ತಿತ್ತು. ಪರಿಶಿಷ್ಟ ಜಾತಿ ಉಪಯೋಜನೆ (ಎಸ್‌ಸಿಎಸ್‌ಪಿ) ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆ (ಟಿಎಸ್‌ಪಿ) ಕಾಯ್ದೆಯನ್ನು ಜಾರಿಗೊಳಿಸಿದ ಪರಿಣಾಮವಾಗಿ ಈ ವೆಚ್ಚ ₹ 42,018 ಕೋಟಿಗೆ ಏರಿಕೆಯಾಗಿದೆ. ಈ ಕಾಯ್ದೆಯಲ್ಲಿ ಕೆಲ ನ್ಯೂನತೆಗಳು ಇರಬಹುದು. ಇವುಗಳನ್ನು ಸರಿಪಡಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ’ ಎಂದು ಆಶ್ವಾಸನೆ ನೀಡಿದರು.
‘ಎಸ್‌ಸಿಎಸ್‌ಪಿ, ಟಿಎಸ್‌ಪಿ ಕಾಯ್ದೆ ಕರ್ನಾಟಕ, ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಮಾತ್ರ ಅನುಷ್ಠಾನಕ್ಕೆ ಬಂದಿದೆ. ಸರ್ಕಾರಿ ನೌಕರರ ಬಡ್ತಿಯಲ್ಲಿ ಮೀಸಲಾತಿ ಹಾಗೂ ₹ 1 ಕೋಟಿ ವರೆಗಿನ ಗುತ್ತಿಗೆಯಲ್ಲಿ ಮೀಸಲಾತಿಯಂತಹ ಕಾಯ್ದೆಗಳು ಕರ್ನಾಟಕದಲ್ಲಿ ಮಾತ್ರ ಜಾರಿಗೆ ಬಂದಿವೆ. ಪರಿಶಿಷ್ಟ ಜಾತಿ ಮತ್ತು ಪಂಗಡದವರ ಬಗ್ಗೆ ಮೊಸಳೆ ಕಣ್ಣೀರು ಸುರಿಸುವ ಬಿಜೆಪಿಯು ತನ್ನ ಆಡಳಿತ ಇರುವ ರಾಜ್ಯಗಳಲ್ಲಿ ಏಕೆ ರೂಪಿಸಿಲ್ಲ’ ಎಂದು ಪ್ರಶ್ನಿಸಿದರು.
ನಿವೃತ್ತ ನ್ಯಾಯಮೂರ್ತಿ ಎನ್.ವೈ. ಹನುಮಂತಪ್ಪ ಅವರಿಗೆ ‘ವಾಲ್ಮೀಕಿ ರತ್ನ’ ಹಾಗೂ ಅಗ್ನಿಶಾಮಕ ಮತ್ತು ತುರ್ತುಸೇವೆಗಳ ಇಲಾಖೆಯ ಡಿಐಜಿ ರವಿ ಡಿ.ಚನ್ನಣ್ಣನವರ್ ಅವರಿಗೆ ‘ಮದಕರಿ ನಾಯಕ’ ಪ್ರಶಸ್ತಿ ಪ್ರದಾನ ಮಾಡಲಾಯಿತು.
ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ, ಪಂಚಮಸಾಲಿ ಗುರುಪೀಠದ ವಚನಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ, ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ, ಸಂಸದ ಜಿ.ಕುಮಾರ ನಾಯಕ, ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ ಹಾಜರಿದ್ದರು.
ಮೀಸಲಾತಿ ಏರಿಕೆಗೆ ಸಂಬಂಧಿಸಿದ ನಿರ್ಣಯವನ್ನು ಅಧಿವೇಶನದಲ್ಲಿ ಕೈಗೊಂಡು ಕೇಂದ್ರಕ್ಕೆ ಶಿಫಾರಸು ಮಾಡಲಾಗಿದೆ. ಸಂವಿಧಾನದ 9 ನೇ ಪರಿಚ್ಛೇದಕ್ಕೆ ಸೇರಿದಾಗ ಮಾತ್ರ ಸೌಲಭ್ಯ ಅನುಭವಿಸಲು ಸಾಧ್ಯರುದ್ರಪ್ಪ ಲಮಾಣಿ, ವಿಧಾನಸಭೆಯ ಉಪಸಭಾಧ್ಯಕ್ಷ
‘ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಬಡವರಿಗೆ ನಿವೇಶನ ನೀಡುವ ಯೋಜನೆಯೊಂದನ್ನು ಸಮಾಜ ಕಲ್ಯಾಣ ಇಲಾಖೆ ರೂಪಿಸಿದೆ. ಇದಕ್ಕೆ ₹ 40 ಕೋಟಿ ಅನುದಾನವನ್ನು ಮೀಸಲಿಟ್ಟಿದೆ. ಅಂಬೇಡ್ಕರ್ ಹಾಗೂ ವಾಲ್ಮೀಕಿ ಕಾಲೊನಿ ನಿರ್ಮಿಸುವ ಈ ಯೋಜನೆಗೆ ಮುಖ್ಯಮಂತ್ರಿ ಶೀಘ್ರ ಅನುದಾನ ಬಿಡುಗಡೆ ಮಾಡಬೇಕು’ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಕೋರಿದರು.
‘ದಲಿತ ಸಮುದಾಯ ಹೆಚ್ಚಾಗಿ ಅವಲಂಬಿತರಾಗಿರುವ ಸರ್ಕಾರಿ ಶಾಲೆ, ಸರ್ಕಾರಿ ಆಸ್ಪತ್ರೆಗಳನ್ನು ಸಶಕ್ತಗೊಳಿಸಬೇಕು. ವಸತಿ ಶಾಲೆಗಳಿಗೆ ಅಗತ್ಯ ಮೂಲಸೌಲಭ್ಯ ಕಲ್ಪಿಸಬೇಕು. ಹಂಪಿ, ಕಿತ್ತೂರು, ದಸರಾ ಉತ್ಸವದ ಮಾದರಿಯಲ್ಲಿ ನಾಯಕ ಸಮುದಾಯದ ಇತಿಹಾಸ ಸಾರುವ ದುರ್ಗೋತ್ಸವವನ್ನು ಚಿತ್ರದುರ್ಗದಲ್ಲಿ ಮಾಡಬೇಕು’ ಎಂದು ಮನವಿ ಮಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.