ADVERTISEMENT

ಸೇವಾಲಾಲ್ ಜಯಂತಿ; ಅದ್ದೂರಿ ಆಚರಣೆಗೆ ನಿರ್ಧಾರ

ವಿಧಾನಸಭಾ ಉಪಸಭಾಪತಿ ರುದ್ರಪ್ಪ ಲಮಾಣಿ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ

​ಪ್ರಜಾವಾಣಿ ವಾರ್ತೆ
Published 17 ಜನವರಿ 2026, 7:23 IST
Last Updated 17 ಜನವರಿ 2026, 7:23 IST
ರುದ್ರಪ್ಪ ಲಮಾಣಿ
ರುದ್ರಪ್ಪ ಲಮಾಣಿ   

ದಾವಣಗೆರೆ: ಸಂತ ಸೇವಾಲಾಲ್ ಅವರ ಜನ್ಮಸ್ಥಳ ಸೂರಗೊಂಡನಕೊಪ್ಪದಲ್ಲಿ 287ನೇ ಜಯಂತಿಯನ್ನು ರಾಷ್ಟ್ರಮಟ್ಟದಲ್ಲಿ ಗುರುತಿಸುವಂತೆ ಅದ್ದೂರಿಯಾಗಿ ಆಚರಿಸಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ವಿಧಾನಸಭಾ ಉಪಸಭಾಪತಿ ರುದ್ರಪ್ಪ ಲಮಾಣಿ ತಿಳಿಸಿದರು. 

ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ ನಡೆದ ಸಂತ ಸೇವಾಲಾಲ್ ಜಯಂತಿ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. 

‘ಸಂತ ಸೇವಾಲಾಲ್ ಜಯಂತಿಯು ಕೇವಲ ಒಂದು ಸಮುದಾಯಕ್ಕೆ ಸೀಮಿತವಾಗದೆ, ಸರ್ವ ಜನಾಂಗದ ಸಹಭಾಗಿತ್ವದೊಂದಿಗೆ ನಡೆಯಲಿದೆ. ಫೆ.14ರಂದು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಹಲವು ಸಚಿವರು ಭಾಗವಹಿಸಲಿದ್ದಾರೆ’ ಎಂದು ತಿಳಿಸಿದರು. 

ADVERTISEMENT

‘ಸೂರಗೊಂಡನಕೊಪ್ಪ ಅಭಿವೃದ್ಧಿಗೆ ಹಿಂದೆ 100 ಎಕರೆ ಜಾಗ ಮೀಸಲಿಟ್ಟಿದ್ದರು. ಆದರೆ, ಕಾರಣಾಂತರದಿಂದ ಅಭಿವೃದ್ಧಿ ಕಾಮಗಾರಿಗಳು ನಡೆಯಲಿಲ್ಲ. ಈಗಿನ ಸರ್ಕಾರ ಜಯಂತಿ ಆಚರಣೆಗೆ ಪೂರ್ಣ ಸಹಕಾರ ನೀಡುತ್ತಿದೆ’ ಎಂದರು. 

ಮೂಲಸೌಕರ್ಯ: ‘ಬಂಜಾರ ಸಮುದಾಯದ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಅನುಕೂಲ ಕಲ್ಪಿಸಲು ₹ 50 ಕೋಟಿ ವೆಚ್ಚದಲ್ಲಿ ಮೊರಾರ್ಜಿ ದೇಸಾಯಿ ಮಾದರಿ ವಸತಿ ಶಾಲೆಯನ್ನು ಮಂಜೂರು ಮಾಡಿ, ಅನುದಾನ ಬಿಡುಗಡೆ ಮಾಡಲಾಗಿದೆ. ಕಟ್ಟಡದ ಭೂಮಿ ಪೂಜೆಯನ್ನು ಇದೇ ವೇಳೆ ನೆರವೇರಿಸಲಾಗುವುದು’ ಎಂದು ತಿಳಿಸಿದರು. 

‘ಮಹಾರಾಷ್ಟ್ರದ ಪೌರಾಗಡ್ ಮಾದರಿಯಲ್ಲಿ ಸೂರಗೊಂಡನಕೊಪ್ಪವನ್ನು ಅಭಿವೃದ್ಧಿಪಡಿಸುವ ಆಶಯವಿದೆ. ಈಗಾಗಲೇ ಐಟಿಐ ಕಾಲೇಜು ಇದ್ದು, ಮುಂದಿನ ದಿನಗಳಲ್ಲಿ ಪದವಿ ಹಾಗೂ ವೈದ್ಯಕೀಯ ಕಾಲೇಜು ಸ್ಥಾಪಿಸುವ ಗುರಿ ಹೊಂದಲಾಗಿದೆ’ ಎಂದರು. 

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಯದೇವನಾಯ್ಕ, ಜಿಲ್ಲಾ ಪಂಚಾಯಿತಿ ಸಿಇಒ ಗಿತ್ತೆ ಮಾಧವ ವಿಠ್ಠಲರಾವ್, ಮರಿಯಮ್ಮ ದೇವಿ ದೇವಸ್ಥಾನ ಸಮಿತಿಯ ಅಧ್ಯಕ್ಷ ಈಶ್ವರ ನಾಯ್ಕ, ಪ್ರಧಾನ ಕಾರ್ಯದರ್ಶಿ ಅರುಣ್‍ಕುಮಾರ್, ಹನುಮಂತನಾಯ್ಕ, ಬೋಜ್ಯಾನಾಯ್ಕ, ಸವಿತಾಬಾಯಿ ಹಾಗೂ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.

‘ಭಕ್ತರು ಸಾರ್ವಜನಿಕರ ಸಹಕಾರ ಅಗತ್ಯ’

‘ಸಂತ ಸೇವಾಲಾಲ್ ಜಯಂತಿ ಕಾರ್ಯಕ್ರಮ ಯಶಸ್ವಿಯಾಗಲು ಭಕ್ತರು ಹಾಗೂ ಸಾರ್ವಜನಿಕರ ಸಹಕಾರ ಅಗತ್ಯವಾಗಿದೆ’ ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಹೇಳಿದರು.  ‘ರಸ್ತೆ ಡಾಂಬರೀಕರಣ ಮಾಡಲಾಗಿದೆ. ದೇವಸ್ಥಾನದ ಅಭಿವೃದ್ಧಿಗೆ 8 ಎಕರೆ ಜಮೀನು ಮಂಜೂರು ಮಾಡಿ ಆದೇಶಿಸಲಾಗಿದೆ. ಜಯಂತಿಯಂದು ಆಗಮಿಸುವ ಮಾಲಾಧಾರಿಗಳಿಗೆ ಭಕ್ತರಿಗೆ ಎಲ್ಲಾ ಸೌಲಭ್ಯ ಕಲ್ಪಿಸಲಾಗುತ್ತದೆ. ಚಿನ್ನಿಕಟ್ಟೆಯಿಂದ ಸೂರಗೊಂಡನಕೊಪ್ಪಕ್ಕೆ ಬಸ್ ಸೌಲಭ್ಯ ಕಲ್ಪಿಸಲಾಗುತ್ತದೆ’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.