ADVERTISEMENT

ಶಾಮನೂರು ಅಂತಿಮ ದರ್ಶನ: ಇಂದು ಸಂಜೆ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ

ದಾವಣಗೆರೆ ಹೈಸ್ಕೂಲ್ ಮೈದಾನದಲ್ಲಿ ಅಂತಿಮ ದರ್ಶನಕ್ಕೆ ಸಕಲ ಸಿದ್ಧತೆ: ದರ್ಶನ ಪಡೆದ ಗಣ್ಯರು, ಮಠಾಧೀಶರು

​ಪ್ರಜಾವಾಣಿ ವಾರ್ತೆ
Published 15 ಡಿಸೆಂಬರ್ 2025, 6:13 IST
Last Updated 15 ಡಿಸೆಂಬರ್ 2025, 6:13 IST
<div class="paragraphs"><p>ಶಾಮನೂರು ಶಿವಶಂಕರಪ್ಪ ನಿಧನ: ಇಂದು ಸಂಜೆ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ</p></div>

ಶಾಮನೂರು ಶಿವಶಂಕರಪ್ಪ ನಿಧನ: ಇಂದು ಸಂಜೆ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ

   

ದಾವಣಗೆರೆ: ಭಾನುವಾರ ಸಂಜೆ ನಿಧನರಾದ ಹಿರಿಯ ಶಾಸಕ, ಕಾಂಗ್ರೆಸ್ ಮುಖಂಡ ಶಾಮನೂರು ಶಿವಶಂಕರಪ್ಪ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ನಗರದ ಹೈಸ್ಕೂಲ್‌ ಮೈದಾನದಲ್ಲಿ ವ್ಯವಸ್ಥೆ ಮಾಡಲಾಗಿದ್ದು, ಸಿದ್ಧತೆಗಳು ಭರದಿಂದ ನಡೆದಿವೆ.

ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ, ಜಿಲ್ಲಾ ಪಂಚಾಯಿತಿ ಸಿಇಒ ಗಿತ್ತೆ ಮಾಧವ ವಿಠ್ಠಲರಾವ್, ಎಸ್ಪಿ ಉಮಾ ಪ್ರಶಾಂತ್ ಸೇರಿದಂತೆ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಸ್ಥಳದಲ್ಲಿದ್ದು ಸಿದ್ಧತೆಗಳನ್ನು ಪರಿಶೀಲಿಸುತ್ತಿದ್ದಾರೆ.

ADVERTISEMENT

ಹೈಸ್ಕೂಲ್ ಮೈದಾನದಲ್ಲಿ ಬೃಹತ್ ಪೆಂಡಾಲ್ ಅಳವಡಿಸಲಾಗಿದೆ. ಪಾರ್ಥಿವ ಶರೀರವನ್ನಿಡಲು ವೇದಿಕೆಯನ್ನು ಸಿದ್ಧಪಡಿಸಲಾಗಿದೆ. ಅಂತಿಮ ದರ್ಶನಕ್ಕೆ ಬರುವ ಗಣ್ಯರಿಗೆ ಕುಳಿತುಕೊಳ್ಳಲು ಆಸನಗಳ ವ್ಯವಸ್ಥೆ ಮಾಡಲಾಗಿದೆ.

ಅಂತಿಮ ದರ್ಶನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರುವ ನಿರೀಕ್ಷೆ ಇದ್ದು, ನೂಕುನುಗ್ಗಲು ಉಂಟಾಗುವುದನ್ನು ತಪ್ಪಿಸಲು ಸುತ್ತಲೂ ಬ್ಯಾರಿಕೇಡ್ ಅಳವಡಿಸಲಾಗಿದೆ.

ಸಾವಿರಾರು ಪೊಲೀಸರು

ವಿವಿಧ ಜಿಲ್ಲೆಗಳ ಎಸ್ಪಿಗಳು, ಎಎಸ್ಪಿಗಳು, ಇನ್ ಸ್ಪೆಕ್ಟರ್ ಗಳು, ಸಬ್ ಇನ್ ಸ್ಪೆಕ್ಟರ್ ಗಳು ಸೇರಿದಂತೆ ಸಾವಿರಾರು ಪೊಲೀಸರನ್ನು ಹೈಸ್ಕೂಲ್ ಮೈದಾನ ಸೇರಿದಂತೆ ನಗರದ ವಿವಿಧೆಡೆ ಭದ್ರತೆಗೆ ನಿಯೋಜಿಸಲಾಗಿದೆ. ಸಿಎಂ, ಡಿಸಿಎಂ ಸೇರಿದಂತೆ ಹಲವು ಗಣ್ಯರು ಅಂತಿಮ ದರ್ಶನ ಪಡೆಯಲು ಆಗಮಿಸುತ್ತಿದ್ದು, ಪೊಲೀಸ್ ಭದ್ರತೆಯನ್ನು ಹೆಚ್ಚಿಸಲಾಗಿದೆ‌.

ನಗರದ ಬಂಬೂಬಜಾರ್ ರಸ್ತೆಯಲ್ಲಿನ ಕಲ್ಲೇಶ್ವರ ಮಿಲ್ ಆವರಣದಲ್ಲಿ ಸಂಜೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ. ಈಗಾಗಲೇ ಸ್ವಾಮೀಜಿಗಳ ಮಾರ್ಗದರ್ಶನದಲ್ಲಿ ಅಂತ್ಯಕ್ರಿಯೆಗೆ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದೆ. ಶಾಮನೂರು ಶಿವಶಂಕರಪ್ಪ ಅವರ ಪತ್ನಿ ಪಾರ್ವತಮ್ಮ ಅವರ ಅಂತ್ಯಕ್ರಿಯೆ ಕೂಡ ಇಲ್ಲಿಯೇ ನಡೆದಿತ್ತು.

ಸರ್ಕಾರಿ ಗೌರವದೊಂದಿಗೆ ನೆರವೇರಲಿದೆ ಅಂತ್ಯಕ್ರಿಯೆ

ದಾವಣಗೆರೆ: ಬೆಂಗಳೂರಿನಲ್ಲಿ ಭಾನುವಾರ ನಿಧನರಾದ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವದೊಂದಿಗೆ ಸೋಮವಾರ ಸಂಜೆ ದಾವಣಗೆರೆಯಲ್ಲಿ ನೆರವೇರಲಿದೆ.

‘ಹಾಲಿ ಶಾಸಕರೂ, ಮಾಜಿ ಸಚಿವರು ಆಗಿರುವ ಶಾಮನೂರು ಶಿವಶಂಕರಪ್ಪ ಅವರ ಅಂತ್ಯಕ್ರಿಯೆ ಸರ್ಕಾರಿ ಗೌರವದೊಂದಿಗೆ ನೆರವೇರಲಿದೆ’ ಎಂದು ವಿಧಾನಸೌಧದ ಶಿಷ್ಟಾಚಾರ ವಿಭಾಗದ ಉಪಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.

ದರ್ಶನ ಪಡೆದ ಗಣ್ಯರು, ಮಠಾಧೀಶರು

ಶಾಮನೂರು ಶಿವಶಂಕರಪ್ಪ ಅವರ ಪಾರ್ಥಿವ ಶರೀರ ಅವರ ನಿವಾಸಕ್ಕೆ ಬರುತ್ತಿದ್ದಂತೆ ರಾಜ್ಯದ ವಿವಿಧೆಡೆಯ ಮಠಾಧೀಶರು ಹಾಗೂ ಗಣ್ಯರು ಧಾವಿಸಿ ದರ್ಶನ ಪಡೆದರು. ಸಿದ್ದಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ, ಉಜ್ಜಯಿನಿ ಪೀಠದ ಸಿದ್ಧಲಿಂಗ ರಾಜದೇಶಿಕೇಂದ್ರ ಸ್ವಾಮೀಜಿ, ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು, ತರಳಬಾಳು ಮಠದ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ, ಸಾಣೇಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಸೇರಿದಂತೆ ಅನೇಕ ಮಠಾಧೀಶರು ಆಗಮಿಸಿ ದರ್ಶನ ಪಡೆದರು.

ಮನೆಯ ಆವರಣಕ್ಕೆ ಗಣ್ಯರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿತ್ತು. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ಸಂಸದ ಬಿ.ವೈ. ರಾಘವೇಂದ್ರ, ವಿಧಾನಪರಿಷತ್ ಸದಸ್ಯ ಕೆ.ಎಸ್. ನವೀನ್, ಶಿವಮೊಗ್ಗ ಶಾಸಕ ಚನ್ನಬಸಪ್ಪ ಸೇರಿದಂತೆ ಅನೇಕರು ಆಗಮಿಸಿ ದರ್ಶನ ಪಡೆದು ಕಂಬನಿ ಮಿಡಿದರು.

ಮಠಾಧೀಶರ ಸಮ್ಮುಖದಲ್ಲಿ ಪೂಜೆ

ಪಾರ್ಥಿವ ಶರೀರದ ಪೂಜೆಯನ್ನು ವಿವಿಧ ಮಠಾಧೀಶರ ಸಮ್ಮುಖದಲ್ಲಿ ನೆರವೇರಿಸಲಾಯಿತು. ಕುಟುಂಬದ ಸದಸ್ಯರು ಹಾಗೂ ಸಂಬಂಧಿಕರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿತ್ತು. ಮನೆಯ ಎದುರು ಸಾವಿರಾರು ಜನರು ಜಮಾಯಿಸಿದ್ದು, ದರ್ಶನಕ್ಕೆ ಕಾಯುತ್ತಿದ್ದಾರೆ.

ಇಲ್ಲಿಂದ ಮೆರವಣಿಗೆ ಮೂಲಕ ಪಾರ್ಥಿವ ಶರೀರವನ್ನು ಹೈಸ್ಕೂಲ್ ಮೈದಾನಕ್ಕೆ ಕೊಂಡೊಯ್ಯಲಾಗುತ್ತದೆ. ಬೆಳಿಗ್ಗೆ 11.30ಕ್ಕೆ ಮೆರವಣಿಗೆ ಆರಂಭವಾಗಲಿದೆ. ಸಾರ್ವಜನಿಕರು ದರ್ಶನ ಪಡೆದ ಬಳಿಕ ಕಲ್ಲೇಶ್ವರ ಮಿಲ್ ಆವರಣದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.