ದಾವಣಗೆರೆ: ರಾಜ್ಯ ಸರ್ಕಾರ ನಡೆಸಿದ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯಲ್ಲಿ (ಜಾತಿ ಜನಗಣತಿ) ವೀರಶೈವ ಲಿಂಗಾಯತರಿಗೆ ಆಗಿರುವ ಅನ್ಯಾಯದ ವಿರುದ್ಧ ಧ್ವನಿ ಎತ್ತದೇ ಇರುವ ಸಮುದಾಯದ ಸಚಿವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಚನ್ನಗಿರಿ ಶಾಸಕ, ಕಾಂಗ್ರೆಸ್‌ನ ಬಸವರಾಜು ಶಿವಗಂಗಾ ಆಗ್ರಹಿಸಿದರು.
‘ಒಕ್ಕಲಿಗರಿಗೆ ಆಗಿರುವ ಅನ್ಯಾಯದ ಕುರಿತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಮುದಾಯದ ಶಾಸಕರ ಸಭೆ ಕರೆದು ಚರ್ಚಿಸಿದ್ದಾರೆ. ರಾಜ್ಯ ಸರ್ಕಾರದಲ್ಲಿ ವೀರಶೈವ ಲಿಂಗಾಯತ ಸಮುದಾಯದ ಏಳು ಜನ ಸಚಿವರಿದ್ದಾರೆ. ಯಾರೊಬ್ಬರೂ ಈ ಕುರಿತು ಸ್ಪಂದಿಸುತ್ತಿಲ್ಲ. ಅರಣ್ಯ ಸಚಿವ ಈಶ್ವರ್ ಖಂಡ್ರೆ ಶಾಸಕರ ಸಂಪರ್ಕಕ್ಕೂ ಸಿಗುತ್ತಿಲ್ಲ’ ಎಂದು ಬುಧವಾರ ಸುದ್ದಿಗಾರರ ಎದುರು ಅಸಮಾಧಾನ ವ್ಯಕ್ತಪಡಿಸಿದರು.
‘ಹಲವು ಸಚಿವರು ಸ್ವಾರ್ಥಕ್ಕಾಗಿ ರಾಜಕಾರಣ ಮಾಡುತ್ತಿದ್ದಾರೆ. ಸಮುದಾಯದ ಹಿತಾಸಕ್ತಿ ಕಾಪಾಡುವ ಹೊಣೆಗಾರಿಕೆಯನ್ನು ಪ್ರದರ್ಶಿಸುತ್ತಿಲ್ಲ. ಸಚಿವ ಸಂಪುಟದ ಎದುರು ಜಾತಿ ಜನಗಣತಿ ವರದಿ ಮಂಡಿಸಿ ಚರ್ಚಿಸಲಿ. ಆದರೆ, ಅದನ್ನು ಅನುಷ್ಠಾನಕ್ಕೆ ತರುವುದು ಬೇಡ. ಒಂದು ವೇಳೆ ಅನುಷ್ಠಾನಕ್ಕೆ ಮುಂದಾದರೆ ಅನ್ಯಾಯಕ್ಕೆ ಒಳಗಾಗಿರುವ ಎಲ್ಲ ಸಮುದಾಯಗಳನ್ನು ಒಗ್ಗೂಡಿಸಿ ಹೋರಾಟ ಮಾಡುತ್ತೇವೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.