ADVERTISEMENT

ಭ್ರಷ್ಟಾಚಾರದ ಗುಂಡಿ ಮುಚ್ಚಿಕೊಳ್ಳಲು ಸಮಾವೇಶ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

​ಪ್ರಜಾವಾಣಿ ವಾರ್ತೆ
Published 5 ಡಿಸೆಂಬರ್ 2024, 11:30 IST
Last Updated 5 ಡಿಸೆಂಬರ್ 2024, 11:30 IST
<div class="paragraphs"><p>ದಾವಣಗೆರೆಯಲ್ಲಿ ಛಲವಾದಿ ನಾರಾಯಣಸ್ವಾಮಿ ಮಾತನಾಡಿದರು</p></div>

ದಾವಣಗೆರೆಯಲ್ಲಿ ಛಲವಾದಿ ನಾರಾಯಣಸ್ವಾಮಿ ಮಾತನಾಡಿದರು

   

ಪ್ರಜಾವಾಣಿ ಚಿತ್ರ

ದಾವಣಗೆರೆ: ‘ರಸ್ತೆಗಳಲ್ಲಿ ಬಿದ್ದಿರುವ ಗುಂಡಿಗಳನ್ನು ಮುಚ್ಚಲು ಸಾಧ್ಯವಾಗದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭ್ರಷ್ಟಾಚಾರದ ಗುಂಡಿಯನ್ನು ಮುಚ್ಚಿಕೊಳ್ಳಲು ಹಾಸನದಲ್ಲಿ ಸಮಾವೇಶ ನಡೆಸಿದ್ದಾರೆ‘ ಎಂದು ವಿಧಾನಪರಿಷತ್‌ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯವಾಡಿದರು.

ADVERTISEMENT

‘ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿವೆ. ಗ್ಯಾರಂಟಿ ಹೆಸರಿನಲ್ಲಿ ಸರ್ಕಾರ ಕಾಲಾಹರಣ ಮಾಡುತ್ತಿದೆ. ಸರ್ಕಾರದ ವಿರುದ್ಧ ರಾಜ್ಯದ ಜನರು ಆಕ್ರೋಶಗೊಂಡಿದ್ದಾರೆ. ತಾಲ್ಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ’ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

‘ಉಪಚುನಾವಣೆಯಲ್ಲಿ 3 ವಿಧಾನಸಭಾ ಕ್ಷೇತ್ರ ಗೆದ್ದಿರುವ ಹುಮ್ಮಸ್ಸಿನಲ್ಲಿ ಕಾಂಗ್ರೆಸ್‌ ತೇಲಾಡುತ್ತಿದೆ. ಅಧಿಕಾರದಲ್ಲಿದ್ದಾಗ ಬಿಜೆಪಿ 18 ಕ್ಷೇತ್ರಗಳನ್ನು ಗೆದ್ದಿತ್ತು. ಜನಾಶೀರ್ವಾದವನ್ನು ನಾವು ಗೇಲಿ ಮಾಡುವುದಿಲ್ಲ. ಅಭಿವೃದ್ಧಿ ಕೆಲಸ ಮಾಡುವಂತೆ ಜನರು ಮತ ಹಾಕಿದ್ದಾರೆಯೇ ಹೊರತು ಭ್ರಷ್ಟಾಚಾರಕ್ಕೆ ಪರವಾನಗಿ ನೀಡಿಲ್ಲ’ ಎಂದು ಕುಟುಕಿದರು.

‘ಕೊನೆಯ ಚುನಾವಣೆ ಎಂಬ ಸುಳ್ಳು ಹೇಳಿ 2013ರಿಂದ ಮತದಾರರನ್ನು ಮೋಸಗೊಳಿಸಿದ್ದಾರೆ. ಸಿದ್ದರಾಮಯ್ಯ ಖಾತ್ರಿ ಇಲ್ಲದ ರಾತ್ರಿಯ ಮಾತುಗಳನ್ನು ಆಡುವುದರಲ್ಲಿ ನಿಪುಣರು. ಸಿದ್ದರಾಮಯ್ಯ ರಾಜಕೀಯದಲ್ಲಿ ಇರುವವರೆಗೂ ಡಿ.ಕೆ.ಶಿವಕುಮಾರ್‌ ಮುಖ್ಯಮಂತ್ರಿಯಾಗಲು ಸಾಧ್ಯವಿಲ್ಲ’ ಎಂದರು.

ಶಾಸಕ ವಿ.ಸುನಿಲ್‌ಕುಮಾರ್‌, ಮಾಜಿ ಸಚಿವರಾದ ಬಿ.ಸಿ.ಪಾಟೀಲ್‌, ಎಸ್‌.ಎ.ರವೀಂದ್ರನಾಥ್‌, ಮಾಜಿ ಸಂಸದ ಮುನಿಸ್ವಾಮಿ, ವಿಧಾನಪರಿಷತ್‌ ಮಾಜಿ ಸದಸ್ಯರಾದ ವೈ.ಎ.ನಾರಾಯಣಸ್ವಾಮಿ, ಶಿವಯೋಗಿಸ್ವಾಮಿ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎನ್‌.ರಾಜಶೇಖರ್‌, ಮುಖಂಡರಾದ ಚಂದ್ರಶೇಖರ್ ಪೂಜಾರಿ, ಧನಂಜಯ್‌ ಕಡ್ಲೇಬಾಳು, ಮಾಡಾಳ್‌ ಮಲ್ಲಿಕಾರ್ಜುನ್‌ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.