ಕೋಡಿಹಳ್ಳಿ ಚಂದ್ರಶೇಖರ್
ದಾವಣಗೆರೆ: ರೈತರ ಬಗೆಗೆ ರಾಜ್ಯ ಸರ್ಕಾರ ತಳೆದಿರುವ ನಿರ್ಲಕ್ಷ್ಯ ಧೋರಣೆಯನ್ನು ವಿರೋಧಿಸಿ ಬೆಳಗಾವಿಯ ಸುವರ್ಣ ಸೌಧ ಮುತ್ತಿಗೆ ಚಳವಳಿಯನ್ನು ಡಿ.13 ರಂದು ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದರು.
‘ವಿಧಾನಸಭಾ ಚುನಾವಣೆಗೂ ಮುನ್ನ ಕೃಷಿಗೆ ಸಂಬಂದಿಸಿದಂತೆ ಪ್ರಣಾಳಿಕೆಯಲ್ಲಿ ಮಾಡಿದ್ದ ಘೋಷಣೆಗಳನ್ನು ಕಾಂಗ್ರೆಸ್ ಮರೆತಿದೆ. ರೈತಪರ ಸರ್ಕಾರ ಎಂಬ ಹೇಳಿಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಾಯಿಮಾತಿಗೆ ಸೀಮಿತವಾಗಿದೆ’ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.
‘ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಅನುಷ್ಠಾನಗೊಂಡ ಕೃಷಿ ಸಂಬಂಧಿ ಕಾನೂನುಗಳನ್ನು ಸಿದ್ದರಾಮಯ್ಯ ಟೀಕಿಸಿದ್ದರು. ಅಧಿಕಾರ ಹಿಡಿದು ಒಂದೂವರೆ ವರ್ಷ ಕಳೆದರೂ ಭೂಸುಧಾರಣಾ ಕಾಯ್ದೆಯ ತಿದ್ದುಪಡಿಯ ಬಗ್ಗೆ ಈವರೆಗೆ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಬಗರ್‌ಹುಕುಂ ರೈತರಿಗೆ ಸಾಗುವಳಿ ಚೀಟಿ ನೀಡಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.
‘ವಕ್ಫ್ ಮಂಡಳಿಯ ಆಸ್ತಿಯ ನೆಪದಲ್ಲಿ ರಾಜ್ಯದ ಹಲವು ರೈತರಿಗೆ ನೋಟಿಸ್ ನೀಡಲಾಗಿದೆ. ರೈತರ ಪರವಾಗಿ ಪಹಣಿ ತಿದ್ದುಪಡಿ ಪ್ರಕ್ರಿಯೆ ಮಂದಗತಿಯಲ್ಲಿ ನಡೆಯುತ್ತಿದೆ. ಸರ್ಕಾರದ ಈ ಕ್ರಮದಿಂದ ರೈತರು ಆತಂಕಗೊಂಡಿದ್ದಾರೆ. ಅರಣ್ಯ ಇಲಾಖೆ ಸಣ್ಣ ರೈತರಿಗೆ ಕಿರುಕುಳ ನೀಡುತ್ತಿದೆ’ ಎಂದು ಅಸಮಾಧಾನ ಹೊರಹಾಕಿದರು.
‘ರೈತರ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ವ್ಯತ್ಯಾಸವಿಲ್ಲ. ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸುವಲ್ಲಿ ದೇಶದ ದಿಕ್ಕು ತಪ್ಪಿಸುವ ಪ್ರಯತ್ನವನ್ನು ಕೇಂದ್ರ ಸರ್ಕಾರ ಮಾಡುತ್ತಿದೆ. ಸ್ವಾಮಿನಾಥನ್ ಆಯೋಗದ ವರದಿಯ ಮಾನದಂಡದ ಪ್ರಕಾರ ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡಬೇಕು. ಇದಕ್ಕೆ ಕಾನೂನು ಚೌಕಟ್ಟಿನ ಅಗತ್ಯವಿದ್ದು, ಇದು ಶಾಸನಬದ್ಧವಾಗಿ ಜಾರಿಗೆ ಬರಬೇಕು’ ಎಂದು ಆಗ್ರಹಿಸಿದರು.
‘ವಿದ್ಯುತ್ ಕ್ಷೇತ್ರವನ್ನು ಖಾಸಗೀಕರಣ ಮಾಡುವ ಬಿಜೆಪಿಯ ಪ್ರಯತ್ನಕ್ಕೆ ಕಾಂಗ್ರೆಸ್ ಸಹಕಾರ ನೀಡುತ್ತಿದೆ. ರಾಜ್ಯದಲ್ಲಿ ಖಾಸಗೀಕರಣ ಪ್ರಕ್ರಿಯೆ ಆರಂಭವಾಗಿದೆ. ಕೃಷಿ ಪಂಪ್‌ಸೆಟ್‌ಗಳಿಗೆ ರೈತರು ಸೌರ ವಿದ್ಯುತ್ ಬಳಕೆ ಮಾಡಿಕೊಳ್ಳುವಂತೆ ಸೂಚಿಸಲಾಗುತ್ತಿದೆ. ಮುಂಬೈ ಮಾದರಿಯಲ್ಲಿ ಮನೆಗಳಿಗೆ ಪ್ರೀಪೆಯ್ಡ್ ವಿದ್ಯುತ್ ಮೀಟರ್ ಕಡ್ಡಾಯಗೊಳಿಸುವ ಹುನ್ನಾರ ನಡೆದಿದೆ’ ಎಂದು ದೂರಿದರು.
ರಾಜ್ಯ ರೈತ ಸಂಘದ ಕಾರ್ಯಾಧ್ಯಕ್ಷ ಭಕ್ತರಹಳ್ಳಿ ಬೈರೇಗೌಡ, ರಾಜ್ಯ ಕಾರ್ಯದರ್ಶಿ ಮಲ್ಲಶೆಟ್ಟಿಹಳ್ಳಿ ಚನ್ನಬಸಪ್ಪ, ಜಿಲ್ಲಾ ಘಟಕದ ಅಧ್ಯಕ್ಷ ಶತಕೋಟಿ ಬಸಪ್ಪ, ಕಾರ್ಯಾಧ್ಯಕ್ಷ ಚಿನ್ನಸಮುದ್ರ ಶೇಖರನಾಯ್ಕ, ಜಿಲ್ಲಾ ಕಾರ್ಯದರ್ಶಿ ಎನ್.ಬಸವರಾಜ್ ದಾಗಿನಕಟ್ಟೆ, ಗಣೇಶ್ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.