ADVERTISEMENT

ಗೈರಾದ ವಿದ್ಯಾರ್ಥಿಗಳಿಗೆ ವಿಶೇಷ ಪರೀಕ್ಷೆ

ದಾವಣಗೆರೆಗೆ ವಿ.ವಿ ಪರೀಕ್ಷಾಂಗ ಕುಲಸಚಿವೆ ಪ್ರೊ. ಅನಿತಾ ಭರವಸೆ

​ಪ್ರಜಾವಾಣಿ ವಾರ್ತೆ
Published 24 ನವೆಂಬರ್ 2020, 17:00 IST
Last Updated 24 ನವೆಂಬರ್ 2020, 17:00 IST
ಪ್ರೊ. ಶರಣಪ್ಪ ವಿ. ಹಲಸೆ
ಪ್ರೊ. ಶರಣಪ್ಪ ವಿ. ಹಲಸೆ   

ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾಲಯವು ಕಳೆದ ಸೆಪ್ಟೆಂಬರ್‌ ಮತ್ತು ಅಕ್ಟೋಬರ್‌ನಲ್ಲಿ ನಡೆಸಿದ ಅಂತಿಮ ವರ್ಷದ ಸ್ನಾತಕ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆಗೆ ಹಾಜರಾಗದ ವಿದ್ಯಾರ್ಥಿಗಳಿಗಾಗಿ ಶೀಘ್ರದಲ್ಲೇ ಪರೀಕ್ಷೆ ನಡೆಸಲಾಗುವುದು ಎಂದು ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲಸಚಿವೆ ಪ್ರೊ. ಎಚ್‌.ಎಸ್‌. ಅನಿತಾ ತಿಳಿಸಿದ್ದಾರೆ.

ಕೋವಿಡ್‌ ಕಾರಣಕ್ಕೆ ಕೆಲವು ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗಿರಲಿಲ್ಲ. ಅವರ ಶೈಕ್ಷಣಿಕ ಭವಿಷ್ಯದ ಉದ್ದೇಶದಿಂದ ಹಾಗೂ ಯಾವುದೇ ವಿದ್ಯಾರ್ಥಿಗೂ ಅನ್ಯಾಯ ಆಗಬಾರದು ಎಂಬ ಕಾಳಜಿಯಿಂದ ಗೈರಾಗಿದ್ದ ವಿದ್ಯಾರ್ಥಿಗಳಿಗಾಗಿ ಪ್ರತ್ಯೇಕವಾಗಿ ವಿಶೇಷ ಪರೀಕ್ಷೆ ನಡೆಸಲಾಗುವುದು ಹೇಳಿದ್ದಾರೆ.

‘ಈಗಾಗಲೇ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಗೈರಾಗಿರುವ ವಿದ್ಯಾರ್ಥಿಗಳ ಮಾಹಿತಿ ಪಡೆದು ಪರೀಕ್ಷೆಗೆ ಪ್ರಶ್ನೆಪತ್ರಿಕೆಗಳನ್ನು ಮುದ್ರಿಸಲು ವ್ಯವ‌ಸ್ಥೆ ಮಾಡಲಾಗುತ್ತಿದೆ. ಶೀಘ್ರದಲ್ಲೇ ಪರೀಕ್ಷೆ ಬಗ್ಗೆ ವಿದ್ಯಾರ್ಥಿಗಳಿಗೆ ಹಾಗೂ ಕಾಲೇಜುಗಳಿಗೆ ಸೂಚನೆ ನೀಡಲಾಗುವುದು. ಈ ಹಿಂದೆ ನಡೆದ ಸ್ನಾತಕ ಪದವಿ ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದ 20 ಸಾವಿರ ವಿದ್ಯಾರ್ಥಿಗಳ ಪೈಕಿ 653 ವಿದ್ಯಾರ್ಥಿಗಳು ಗೈರಾಗಿದ್ದರು. ಸ್ನಾತಕೋತ್ತರ ಪದವಿ ಪರೀಕ್ಷೆಗೆ 1,500 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. 40 ವಿದ್ಯಾರ್ಥಿಗಳು ಗೈರಾಗಿದ್ದರು ಎಂದು ಮಾಹಿತಿ ನೀಡಿದ್ದಾರೆ.

ADVERTISEMENT

‘ವಿದ್ಯಾರ್ಥಿಗೆ ಅನ್ಯಾಯ ಆಗಲು ಬಿಡುವುದಿಲ್ಲ’

‘ಕೋವಿಡ್‌ನಿಂದಾಗಿ ವಿದ್ಯಾರ್ಥಿಗಳು, ಪಾಲಕರಲ್ಲಿ ಆತಂಕ ಮೂಡಿದ್ದು ಸಹಜ. ಈ ಕಾರಣಕ್ಕಾಗಿಯೇ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗದ ಕಟ್ಟ ಕಡೆಯ ವಿದ್ಯಾರ್ಥಿಗೂ ಶೈಕ್ಷಣಿಕವಾಗಿ ಅನ್ಯಾಯ ಆಗಬಾರದು. ವಿಶ್ವವಿದ್ಯಾಲಯವು ಯಾವುದೇ ಕಾರಣಕ್ಕೂ ವಿದ್ಯಾರ್ಥಿಗಳಿಗೆ ಅನ್ಯಾಯವಾಗಲು ಅವಕಾಶ ನೀಡುವುದಿಲ್ಲ. ಅವರ ಭವಿಷ್ಯಕ್ಕೆ ಪೂರಕ ವಾತಾವರಣ ನಿರ್ಮಿಸಲಾಗುವುದು. ಹೀಗಾಗಿಯೇ ವಿಶೇಷ ಪರೀಕ್ಷೆ ನಡೆಸಲು ಮುಂದಾಗಿದ್ದೇವೆ. ಸರ್ಕಾರಕ್ಕೂ ಪ್ರಸ್ತಾವ ಸಲ್ಲಿಸಲಾಗಿದೆ’ ಎಂದು ಕುಲಪತಿ ಪ್ರೊ. ಶರಣಪ್ಪ ವಿ. ಹಲಸೆ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.